ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣ್ಣು, ಕಿವಿ ಕಳೆದುಕೊಂಡ ಸರ್ಕಾರ: ಸಿದ್ದರಾಮಯ್ಯ ಟೀಕೆ

Last Updated 5 ಸೆಪ್ಟೆಂಬರ್ 2019, 12:26 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ, ಅವರಿಗೆ ಪುನರ್ವಸತಿ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕಣ್ಣು, ಕಿವಿ ಕಳೆದುಕೊಂಡ ಸರ್ಕಾರಕ್ಕೆ ನಮ್ಮ ಹೋರಾಟದ ಕೂಗು ಕೇಳುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಪ್ರವಾಹದಿಂದ ದವಸ ಧಾನ್ಯಗಳು, ಸಾಮಗ್ರಿಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಅನೇಕ ಕಡೆ ತಾತ್ಕಾಲಿಕ ಪುನರ್ವಸತಿ ಕೇಂದ್ರಗಳನ್ನು ಮುಚ್ಚಲಾಗಿದೆ. ಮನೆ ಕಳೆದುಕೊಂಡವರಿಗೆ ಶೆಡ್‌ ನಿರ್ಮಿಸಿಕೊಡಲು ಹೇಳಿದರೂ ಪ್ರಯೋಜನವಾಗಿಲ್ಲ. ಮನೆ ಹಾಗೂ ಬೆಳೆ ಪರಿಹಾರವನ್ನು ಸರಿಯಾಗಿ ನೀಡುತ್ತಿಲ್ಲ’ ಎಂದು ದೂರಿದರು.

‘ವಿರೋಧ ಪಕ್ಷವಾಗಿ ಕಾಂಗ್ರೆಸ್‌ ಈ ವಿಷಯದಲ್ಲಿ ಸಾಕಷ್ಟು ಹೋರಾಟ ಮಾಡುತ್ತಿದೆ. ಅಧಿಕಾರಿಗಳನ್ನು ಎಚ್ಚರಿಸುತ್ತಿದೆ. ಆದರೆ, ದಪ್ಪ ಚರ್ಮದ ಸರ್ಕಾರಕ್ಕೆ ಸಂತ್ರಸ್ತರ ಸಂಕಟ ಅರ್ಥವಾಗುತ್ತಿಲ್ಲ’ ಎಂದರು.

‘ಕೊಯ್ನಾ ಮತ್ತು ಕರ್ನಾಟಕದ ಜಲಾಶಯಗಳಿಂದ ಒಟ್ಟಿಗೆ ನೀರು ಬಿಡುವ ಬದಲು ಹಂತಹಂತವಾಗಿ ಆಗಾಗ ನೀರು ಹೊರಬಿಡುತ್ತಿರಬೇಕು. ಜಲಾಶಯ ತುಂಬದಂತೆ ಎಚ್ಚರಿಕೆ ವಹಿಸಬೇಕು. ಇದರಿಂದ ಹೆಚ್ಚಿನ ಅನಾಹುತ ತಡೆಯಲು ಸಾಧ್ಯವಾಗುತ್ತದೆ’ ಎಂದರು.

ಡಿ.ಕೆ. ಶಿವಕುಮಾರ್‌ ಬಂಧನದ ಬಳಿಕ ಎಲ್ಲ ಕಡೆಯೂ ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತದೆ. ಇದನ್ನೇ ಬಳಸಿಕೊಂಡು ಕೆಲ ಕಿಡಿಗೇಡಿಗಳು ಹಿಂಸಾಚಾರ ಮಾಡುತ್ತಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುವಂತೆ ನಮ್ಮ ಕಾರ್ಯಕರ್ತರಿಗೆ ಕಟ್ಟಿನಿಟ್ಟಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಶಾಸಕ ಪ್ರಸಾದ ಅಬ್ಬಯ್ಯ, ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್‌ ಕುಮಾರ ಪಾಟೀಲ, ಮಾಜಿ ಸಚಿವ ಅಲ್ಕೋಡು ಹನುಮಂತಪ್ಪ, ಮುಖಂಡ ಸದಾನಂದ ಡಂಗನವರ ಇದ್ದರು.

ಬೊಮ್ಮಾಯಿ–ಸಿದ್ದರಾಮಯ್ಯ ಮಾತುಕತೆ

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಿದ್ದರಾಯಮ್ಮ ಅವರು ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ಹುಬ್ಬಳ್ಳಿಗೆ ಬಂದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುಮಾರು ಹತ್ತು ನಿಮಿಷ ಮಾತುಕತೆ ನಡೆಸಿದರು. ಈ ವೇಳೆ ಉಭಯ ಪಕ್ಷಗಳ ಯಾವ ಮುಖಂಡರಿಗೂ, ಶಾಸಕರಿಗೂ ಅವಕಾಶ ಇರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT