ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲು ಆಗ್ರಹ

Last Updated 22 ಆಗಸ್ಟ್ 2022, 15:56 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಿ ರಾಣಿ ಚನ್ನಮ್ಮ (ಈದ್ಗಾ) ಮೈದಾನ ಗಜಾನನ ಉತ್ಸವ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ನಗರದಲ್ಲಿ ಸೋಮವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.

ದುರ್ಗದಬೈಲ್‌ನಲ್ಲಿ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ಅವರು ಸಹಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ದುರ್ಗದಬೈಲ್‌ನಿಂದ ಮಹಾನಗರ ಪಾಲಿಕೆ ಕಚೇರಿವರೆಗೆ ಅಭಿಯಾನ ನಡೆಯಿತು. ಅಭಿಯಾನವನ್ನು ಬೆಂಬಲಿಸಿ ವಿವಿಧ ವ್ಯಾಪಾರಿಗಳು, ಸಾರ್ವಜನಿಕರು ಸಹಿ ಹಾಕಿದರು.

ಮಹಾನಗರ ಪಾಲಿಕೆ ಆವರಣದಲ್ಲಿ ಬಜರಂಗದಳ, ಶ್ರೀರಾಮಸೇನೆ, ವಿಶ್ವ ಹಿಂದೂ ಪರಿಷತ್‌, ಹಿಂದೂ ಜಾಗರಣ ವೇದಿಕೆ ಮತ್ತು ರಾಣಿ ಚನ್ನಮ್ಮ (ಈದ್ಗಾ) ಮೈದಾನ ಗಜಾನನ ಉತ್ಸವ ಸಮಿತಿ ಸದಸ್ಯರು ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ಗಣೇಶನ ಕುರಿತ ಹಾಡುಗಳು, ಶ್ಲೋಕಗಳನ್ನು ಹಾಡಿದರು. ಗಣೇಶೋತ್ಸವಕ್ಕೆ ಅನುಮತಿ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಅಣಕು ಪ್ರದರ್ಶನ ನಡೆಸಿದರು.

ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್, ‘ಈದ್ಗಾ ಮೈದಾನ ಪಾಲಿಕೆಗೆ ಸೇರಿದ ಜಾಗ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.ಆರು ವರ್ಷಗಳಿಂದ ಅನುಮತಿಗೆ ಒತ್ತಾಯ ಮಾಡಲಾಗುತ್ತಿದೆ. ಈ ವರ್ಷ ಅನುಮತಿ ನೀಡದಿದ್ದರೂ ಗಣೇಶ ಮೂರ್ತಿ ಪ್ರತಿಷ್ಠಾಪಿಸುತ್ತೇವೆ. ಇದು ನಮ್ಮ ಹಕ್ಕು. ಇದನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ.ಮುಸ್ಲಿಮರು ವಿರೋಧ ಮಾಡಿದರೆ ಅವರಿಗೆ ಅಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಕೊಡುವುದಿಲ್ಲ’ ಎಂದರು.

‘ಈದ್ಗಾ ಮೈದಾನದಲ್ಲಿ ಮುಸ್ಲಿಮರಿಗೆ ವರ್ಷಕ್ಕೆ ಎರಡು ಬಾರಿ ಪ್ರಾರ್ಥನೆ ಮಾಡಲು ಅವಕಾಶ ನೀಡಲಾಗಿದೆ. ಅದೇ ರೀತಿ ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ನೀಡಬೇಕು. ಶಾಂತಿ, ಸೌಹಾರ್ದ, ವಿಜೃಂಭಣೆಯಿಂದ ಗಣೇಶೋತ್ಸವ ಆಚರಣೆ ಮಾಡುತ್ತೇವೆ. ಈ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

‘ಗಣೇಶೋತ್ಸವಕ್ಕೆ ಅನುಮತಿ ನೀಡದಿದ್ದರೆ ಆಗಸ್ಟ್‌ 26ರಂದು ಶಾಸಕ ಜಗದೀಶ ಶೆಟ್ಟರ್‌ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು. ಜನಪ್ರತಿನಿಧಿಗಳು ನಾಗರಿಕರ ಬೇಡಿಕೆಗಳಿಗೆ ಸ್ಪಂದಿಸಬೇಕು. ಹಿಂದೂಗಳ ಭಾವನೆಗಳನ್ನು ಗೌರವಿಸಬೇಕು. ಬೆಂಗಳೂರಿನ ಈದ್ಗಾ ಮೈದಾನದಲ್ಲೂ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು’ ಎಂದು ಒತ್ತಾಯಿಸಿದರು.

ರಾಣಿ ಚನ್ನಮ್ಮ (ಈದ್ಗಾ) ಮೈದಾನ ಗಜಾನನ ಉತ್ಸವ ಸಮಿತಿ ಸಂಚಾಲಕ ಹನಮಂತಸಾ ನಿರಂಜನ ಮಾತನಾಡಿ, ಗಣೇಶೋತ್ಸವಕ್ಕೆ ಅನುಮತಿ ಕೋರಿ ಈಗಾಗಲೇ ಎರಡು ಬಾರಿ ಗಡುವು ನೀಡಲಾಗಿತ್ತು. ಅನುಮತಿ ನೀಡಲು ವಿವಿಧ ಇಲಾಖೆಗಳು ಅಲೆದಾಡಿಸುತ್ತಿವೆ. ಇದು ಕೊನೆಯ ಎಚ್ಚರಿಕೆ ಎಂದರು.

ಶ್ರೀರಾಮಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಅಪ್ಪಣ್ಣ ದೆವಟಗಿ, ಮಂಜುನಾಥ, ರಾಜೇಶ್ರೀ ಜಡಿ ಇದ್ದರು.

ಅರ್ಜಿ ಸಲ್ಲಿಸಿದರೆ ಪರಿಶೀಲಿಸಿ ಕ್ರಮ

ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ. ಮಾತನಾಡಿ, ಗಣೇಶೋತ್ಸವಕ್ಕೆ ಅನುಮತಿ ನೀಡಲು ಏಕಗವಾಕ್ಷಿ ಕೇಂದ್ರ ಸ್ಥಾಪಿಸಲಾಗುವುದು. ಅದರಲ್ಲಿ ಅರ್ಜಿ ಸಲ್ಲಿಸಿದರೆ ಪೊಲೀಸ್ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಚರ್ಚಿಸಿ ಅನುಮತಿ ನೀಡುವ ಕುರಿತು ನಿರ್ಧರಿಸಲಾಗುವುದು ಎಂದು ಹೇಳಿದರು.

ಸಾರ್ವಜನಿಕರಿಗೆ ತೊಂದರೆ ಆಗದಂತೆ ಶಾಂತಿಯುತವಾಗಿ ಗಣೇಶೋತ್ಸವ ಆಚರಣೆ ಮಾಡಬೇಕು. ಈಗಾಗಲೇ ಗಣೇಶ ಮೂರ್ತಿಗಳ ವಿಸರ್ಜನೆ, ಮೆರವಣಿಗೆಗಾಗಿ ರಸ್ತೆ ದುರಸ್ತಿ, ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಪಾಲಿಕೆ ಮಾಡುತ್ತಿದೆ ಎಂದರು.

‘ಗಣೇಶೋತ್ಸವಕ್ಕೆ ಅನುಮತಿ ನೀಡಲು ವಿವಿಧ ಇಲಾಖೆಗಳಿಂದ ಪೂರ್ವಾನುಮತಿ ಪಡೆಯಬೇಕು ಎಂಬ ಷರತ್ತು ಹಾಕದೆ ಪಾಲಿಕೆ ಕೂಡಲೇ ಅನುಮತಿ ಪತ್ರ ನೀಡಬೇಕು’ ಎಂದು ಪ್ರತಿಭಟನಾಕಾರರು ಪಾಲಿಕೆ ಆಯುಕ್ತರ ಕಾಲಿಗೆ ನಮಸ್ಕರಿಸಿ, 1500ಕ್ಕೂ ಹೆಚ್ಚು ಜನರ ಸಹಿ ಇದ್ದ ಮನವಿ ಮನವಿಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT