ಬುಧವಾರ, ಮೇ 25, 2022
22 °C
ಹಸಿರು ನ್ಯಾಯಾಧೀಕರಣ ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ಸುಭಾಷ್ ಆಡಿ ನಿರ್ದೇಶನ

ಪ್ರಾಥಮಿಕ ಹಂತದಲ್ಲೇ ಕಸ ವಿಂಗಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ಹುಬ್ಬಳ್ಳಿ - ಧಾರವಾಡ ನಗರದಲ್ಲಿ ನಿತ್ಯ ಉತ್ಪತ್ತಿಯಾಗುವ ಒಣಕಸ ಹಾಗೂ ಹಸಿಕಸವನ್ನು ಪ್ರಾಥಮಿಕ ಹಂತದಲ್ಲಿಯೇ ವಿಂಗಡಿಸಿ’ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ಸುಭಾಷ್ ಆಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ನಗರದಲ್ಲಿ ಸೋಮವಾರ ಘನತ್ಯಾಜ್ಯ, ಕಟ್ಟಡ ತ್ಯಾಜ್ಯ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಿಯಮಗಳು -2016ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಅಧಿಕಾರಿಗಳು ಹಾಗೂ ನೈರುತ್ಯ ರೈಲ್ವೆ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ಕಡ್ಡಾಯವಾಗಿ ಕಸ ವಿಂಗಡಣೆ ಮಾಡಿ, ಹಸಿ ಕಸವನ್ನು ಕಾಂಪೋಸ್ಟ್ ಮಾಡಬೇಕು. ಒಣ ಕಸವನ್ನು ಪುನರ್ ವಿಂಗಡಿಸಿ ಮರು ಬಳಕೆದಾರರಿಗೆ ನೀಡಬೇಕು’ ಎಂದರು.

‘ಹೆಚ್ಚಿನ ತ್ಯಾಜ್ಯ ಉತ್ಪಾದಿಸುವವರು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಅಪಾಯಕಾರಿ ಹಾಗೂ ವೈದ್ಯಕೀಯ ತ್ಯಾಜ್ಯ ಸೇರಿದಂತೆ ಎಲ್ಲ ಮಾದರಿಯ ತ್ಯಾಜ್ಯವನ್ನು ಪ್ರಾಥಮಿಕ ಹಂತದಲ್ಲೇ ವಿಂಗಡಣೆ ಮಾಡಬೇಕು. ವಿಲೇವಾರಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಬೇಕು’ ಎಂದು ಸಲಹೆ ನೀಡಿದರು.

ರೈಲ್ವೆ ಅಧಿಕಾರಿಗಳೊಂದಿಗೆ ಸಭೆ: ‘ರೈಲು ನಿಲ್ದಾಣ ಹಾಗೂ ಹಳಿಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರು ಕಸ ಎಸೆಯುತ್ತಿದ್ದು, ಇದನ್ನು ತಡೆಯಲು ಯೋಜನೆ ರೂಪಿಸಬೇಕು’ ಎಂದು ಸುಭಾಷ್ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಮಾತನಾಡಿ, ‘ಹುಬ್ಬಳ್ಳಿ ರೈಲ್ವೆ ನಿಲ್ದಾಣ ಹಾಗೂ ಕಾಲೊನಿಗಳಲ್ಲಿ ಉತ್ಪತ್ತಿಯಾಗುವ ಒಣಕಸ ಹಾಗೂ ಹಸಿಕಸವನ್ನು ವಿಂಗಡಿಸಲಾಗುತ್ತಿದ್ದು, ಹಸಿ ಕಸವನ್ನು ಕಾಂಪೋಸ್ಟ್ ಮಾಡಲಾಗುತ್ತಿದೆ. ರೈಲು ಪ್ರಯಾಣದ ವೇಳೆ ಹಾಗೂ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ನೀಡುವ ಆಹಾರ ಪೊಟ್ಟಣಗಳಲ್ಲಿ ಪ್ಲಾಸ್ಟಿಕ್ ಉಪಯೋಗಿಸುತ್ತಿಲ್ಲ. ಕಸ ವಿಲೇವಾರಿಗೆ ಸಂಬಂಧಿಸಿದಂತೆ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು. 

ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ, ಡಿಸಿಪಿ ಸಾಹಿಲ್ ಬಾಗ್ಲಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್. ರುದ್ರೇಶ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ರಾಜಶೇಖರ ಪುರಾಣಿಕ್, ಪರಿಸರ ಅಧಿಕಾರಿ ಶೋಭಾ ಪೋಳ, ನೈರುತ್ಯ ರೈಲ್ವೆಯ ಅರವಿಂದ ಮಳಖೇಡ, ಯು. ಸುಬ್ಬರಾವ, ಅಜಯಸಿಂಗ್, ಆರ್.ಕೆ. ಸಿಂಗ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು