ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೀಕೆ ನಿಲ್ಲಿಸಿ, ಕೋವಿಡ್ ತಡೆಗೆ ಕೈ ಜೋಡಿಸಿ: ಸಚಿವ ಜಗದೀಶ ಶೆಟ್ಟರ್

ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರಿಕೆ ಬಗ್ಗೆ ಚರ್ಚಿಸಿ ತೀರ್ಮಾನ:
Last Updated 21 ಜುಲೈ 2020, 9:09 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಕೋವಿಡ್‌ನಂತಹ ಸಂಕಷ್ಟದ ಸಂದರ್ಭದಲ್ಲಿಯೂ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವುದು ಸರಿಯಲ್ಲ. ಕೊರೊನಾ ತಡೆಗೆ ಶ್ರಮಿಸುತ್ತಿರುವ ಸರ್ಕಾರದದೊಂದಿಗೆ ಎಲ್ಲರೂ ಕೈ ಜೋಡಿಸಬೇಕು. ರಚನಾತ್ಮಕ ಸಲಹೆಗಳನ್ನು ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರ ಆರೋಪ ಆಧಾರರಹಿತವಾಗಿದೆ’ ಎಂದರು.

‘ಮಾರ್ಚ್ ತಿಂಗಳಲ್ಲಿ ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಇತರ ಉಪಕರಣಗಳ ಬೆಲೆ ದುಬಾರಿಯಾಗಿತ್ತು. ಹಾಗಾಗಿ, ಖರೀದಿ ಮೊತ್ತವೂ ಹೆಚ್ಚಾಗಿದೆ. ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ದಾಖಲೆಗಳಿದ್ದರೆ ಸಂಬಂಧಪಟ್ಟ ತನಿಖಾ ಸಂಸ್ಥೆಗಳಿಗೆ ದೂರು ಕೊಡಲಿ. ಇಲ್ಲವಾದರೆ, ಅಧಿವೇಶನದಲ್ಲಿ ವಿಷಯವನ್ನು ಪ್ರಸ್ತಾಪಿಸಲಿ’ ಎಂದು ತಿರುಗೇಟು ನೀಡಿದರು.

ಅಗತ್ಯ ಕ್ರಮ:‘ಕೋವಿಡ್ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಹುಬ್ಬಳ್ಳಿಯ ವೈದ್ಯ ಬಂಗಾರ ಶೆಟ್ಟರ ಅವರು, 30‌ ಹಾಸಿಗೆ ಸಾಮರ್ಥ್ಯದ ಅಶೋಕ ಆಸ್ಪತ್ರೆಯನ್ನು ಕೋವಿಡ್ ಚಿಕಿತ್ಸೆಗಾಗಿ ಜಿಲ್ಲಾಡಳಿತಕ್ಕೆ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಜಿಲ್ಲಾಡಳಿತದಿಂದ ಹೆಚ್ಚುವರಿಯಾಗಿ 20 ಹಾಸಿಗೆ ವ್ಯವಸ್ಥೆ ಮಾಡಲಾಗುವುದು‌. ಸುಚಿರಾಯು, ತತ್ವದರ್ಶಿ ಸೇರಿದಂತೆ ಇತರೆ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ರಸಗೊಬ್ಬರ ಕೊರತೆ ಇಲ್ಲ:‘ಜಿಲ್ಲೆಯಲ್ಲಿ ಯೂರಿಯಾ ಸೇರಿದಂತೆ ಯಾವುದೇ ರಸಗೊಬ್ಬರಗಳ ಕೊರತೆ ಇಲ್ಲ. ಖಾಸಗಿ ಅಂಗಡಿಗಳಲ್ಲಿ ರೈತರಿಗೆ ಅಧಿಕ ದರದಲ್ಲಿ ಗೊಬ್ಬರ ಮಾರಾಟ ಮಾಡದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.

ತರಕಾರಿ ಮಾರಾಟ ವಾಹನಕ್ಕೆ ಚಾಲನೆ
ರಿಯಾಯಿತಿ ದರದಲ್ಲಿ ಜನರಿಗೆ ಹಣ್ಣು ಮತ್ತು ತರಕಾರಿ ಮಾರಾಟ ಮಾಡುವ ವಿ ಬಾಸ್ಕೆಟ್ ಕಂಪನಿಯ ವಾಹನಗಳಿಗೆ ತಮ್ಮ ನಿವಾಸದ ಬಳಿಜಗದೀಶ ಶೆಟ್ಟರ್ ಮಂಗಳವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ವಿ ಬಾಸ್ಕೆಟ್‌ನಿಂದ ನೇರವಾಗಿ ರೈತರಿಂದ ಹಣ್ಣು ಹಾಗೂ ತರಕಾರಿಗಳನ್ನು ಖರೀದಿಸಿ, ಬೇಡಿಕೆಗೆ ಅನುಸಾರವಾಗಿ ಗ್ರಾಹಕರಿಗೆ ತಲುಪಿಸಲಾಗುತ್ತದೆ. ಕಂಪನಿಯಿಂದ ರೈತರು ಹಾಗೂ ಗ್ರಾಹಕರಿಗೆ ಶೋಷಣೆಯಾಗದಂತೆ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ’ ಎಂದರು.

‘ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ರೈತರು ನೇರವಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅನುಕೂಲವಾಗುವಂತೆ ರೈತ ಸಂತೆಗಳನ್ನು ಆಯೋಜಿಸಲಾಗುವುದು’ ಎಂದು ಹೇಳಿದರು.

ವಿ ಬಾಸ್ಕೆಟ್‌ ಕಂಪನಿಯ ಆನಂದ ಜಾಧವ್, ‘ಮುಂದಿನ ಸೋಮವಾರದಿಂದ ತರಕಾರಿ ಮತ್ತು ಹಣ್ಣುಗಳನ್ನು ಮಾರುಕಟ್ಟೆಗಿಂತ ಶೇ 30ರಿಂದ 40ರಷ್ಟು ಕಡಿಮೆ ದರದಲ್ಲಿ ಮಾರಾಟ ಮಾಡಲಾಗುವುದು. ಸದ್ಯ 7 ವಾಹನಗಳಿಗೆ ಚಾಲನೆ ನೀಡಲಾಗಿದೆ. ಮುಂದೆ ಇನ್ನೂ 8 ವಾಹನಗಳಲ್ಲಿ ಮಾರಾಟ ಆರಂಭಿಸಲಾಗುವುದು. ಸಿಬ್ಬಂದಿ ಮಾಸ್ಕ್, ಗ್ಲೌಸ್ ಹಾಗೂ ಫೇಸ್‌ಶೀಲ್ಡ್‌ಗಳನ್ನು ಧರಿಸಿರುತ್ತಾರೆ. ಗ್ರಾಹಕರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು’ ಎಂದರು.

*
ಧಾರವಾಡ ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರಿಸಬೇಕೇ, ಬೇಡವೇ ಎಂಬುದನ್ನು ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳು ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು.
– ಜಗದೀಶ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT