ಮಂಗಳವಾರ, ಸೆಪ್ಟೆಂಬರ್ 21, 2021
27 °C

ಶಿಕ್ಷಕರು ರಾಷ್ಟ್ರದ ನಿರ್ಮಾತೃಗಳು: ವಿಜಯಲಕ್ಷ್ಮಿ ಕೆಂಪೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ‘ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯ ರೂಪಿಸಿ ಅವರ ಮುಂದಿನ ಜೀವನಕ್ಕೆ ಉಜ್ವಲ ಮಾರ್ಗ ನೀಡುವ ಗುರುವೃಂದಕ್ಕೆ ಸಮಾಜ ಮತ್ತು ವಿದ್ಯಾರ್ಥಿಗಳಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆ. ರಾಷ್ಟ್ರದ ನಿರ್ಮಾಪಕರಾದ ಶಿಕ್ಷಕರ ಸೇವೆ ಪವಿತ್ರವಾದದ್ದು’ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ವಿಜಯಲಕ್ಷ್ಮಿ ಕೆಂಪೇಗೌಡ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯ್ತಿ ಆಶ್ರಯದಲ್ಲಿ ಡಾ.ಎಸ್.ರಾಧಾಕೃಷ್ಣನ್ ಅವರ ಜಯಂತಿ ಅಂಗವಾಗಿ ಶನಿವಾರ ಜರುಗಿದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಶಿಕ್ಷಕರು ತಮ್ಮ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಇಟ್ಟುಕೊಂಡು ಪಾಠ, ಮಾರ್ಗದರ್ಶನ ಮಾಡುತ್ತಿರುವುದು ಶ್ಲಾಘನೀಯ’ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ‘ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಶಿಕ್ಷಕರು ಪ್ರಮುಖ ಆಧಾರ ಸ್ತಂಭಗಳಾಗಿದ್ದಾರೆ. ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದಾರೆ. ಭಾರತವು ಜಗತ್ತಿನಲ್ಲೇ ಅತ್ಯಂತ ಹೆಚ್ಚು ಯುವ ಮಾನವ ಸಂಪನ್ಮೂಲವನ್ನು ಹೊಂದಿದೆ. ಅವರ ಜ್ಞಾನವೃದ್ಧಿಗೆ ಗುರುಗಳ ಪಾತ್ರ ಮುಖ್ಯವಾಗಿದೆ. ಇಂದು ನಾನು ಐಎಎಸ್ ಅಧಿಕಾರಿಯಾಗಲು ನನಗೆ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಕಲಿಸಿದ ಗುರುಗಳ ಪಾತ್ರ ಮಹತ್ವದ್ದು. ಶಿಕ್ಷಣ ವ್ಯವಸ್ಥೆ ಕೇವಲ ಅಂಕಗಳನ್ನು ಆಧರಿಸಿರಬಾರದು. ಸ್ವಯಂ ವಿವೇಚನೆ, ಆತ್ಮವಿಶ್ವಾಸ ಬೆಳೆಸುವ ಶಿಕ್ಷಣ ನೀಡಬೇಕು. ಪಾಲಕರು ಮಕ್ಕಳಿಗೆ ಜನ್ಮ ನೀಡಿದರೆ ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುತ್ತಾರೆ’ ಎಂದರು.

ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಶಿವಾನಂದ ಕರಿಗಾರ ಮಾತನಾಡಿ, ‘ಗುರುವಿನ ವೃತ್ತಿ ಪೂಜ್ಯನೀಯವಾಗಿದೆ. ಸಮಾಜ ಶಿಕ್ಷಕರನ್ನು ಗೌರವದಿಂದ ಕಾಣಬೇಕು’ ಎಂದರು.

ಇದೇ ಸಂದರ್ಭದಲ್ಲಿ ಐವರು ನಿವೃತ್ತ ಶಿಕ್ಷಕರು, 2019–20ನೇ ಸಾಲಿನ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು ಹಾಗೂ ಪ್ರಸ್ತಕ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ಗೌರವ ಸಲ್ಲಿಸಿ, ಸತ್ಕರಿಸಲಾಯಿತು. ಜಿಲ್ಲಾ ಪಂಚಾಯ್ತಿ ಸದಸ್ಯ ಉಮೇಶ ಹೆಬಸೂರು, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸಿದ್ಧನಗೌಡ ಪಾಟೀಲ ಇದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನಕುಮಾರ್ ಹಂಚಾಟೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಯೋಜನಾ ಸಮನ್ವಯಾಧಿಕಾರಿ ಪ್ರಕಾಶ ಭೂತಾಳಿ ನಿರೂಪಿಸಿದರು. ಇತ್ತೀಚೆಗೆ ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಕಾರ್ಯಕ್ರಮದ ಆರಂಭದಲ್ಲಿ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು