ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಕೆಗೆ ಶಿಕ್ಷಕರ ಧರಣಿ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೃಹತ್ ಪ್ರತಿಭಟನೆ
Last Updated 9 ಜುಲೈ 2019, 11:09 IST
ಅಕ್ಷರ ಗಾತ್ರ

ಧಾರವಾಡ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಒಕ್ಕೂಟ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ನೂರಾರು ಶಿಕ್ಷಕರು ಪಲ್ಗೊಂಡು ತಮ್ಮ ಹಕ್ಕೊತ್ತಾಯ ಮಂಡಿಸಿದರು.

ರಜೆ ಹಾಕಿದ್ದ ಶಿಕ್ಷಕರು ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಂಡರು. ಬಹಳಷ್ಟು ಶಿಕ್ಷಕರು ರಜೆ ಹಾಕಿರದ ಕಾರಣ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿಲ್ಲ. ಹೀಗಾಗಿ ಶಾಲೆಗಳು ಎಂದಿನಂತೆಯೇ ನಡೆದವು.

ಇತ್ತ ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ಮೂಲಕ ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸಿದ ಶಿಕ್ಷಕರು, ತಮ್ಮ ಬೇಡಿಕೆಗಾಗಿ ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಒಕ್ಕೂಟದ ಉಪಾಧ್ಯಕ್ಷ ಬಸವರಾಜ ಗುರಿಕಾರ, ‘ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ವೇತನ ಶ್ರೇಣಿ ನಿಗದಿಪಡಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ಧುಪಡಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮುಂದುವರೆಸಬೇಕು. 3 ವರ್ಷದ ಒಟ್ಟು ಶೇಕಡಾವಾರು ಪರಿಗಣಿಸಿ ವರ್ಗಾವಣೆ ಪ್ರಕ್ರಿಯೆ ತಕ್ಷಣ ಪ್ರಾರಂಭಿಸಬೇಕು' ಎಂದು ಒತ್ತಾಯಿಸಿದರು.

‘ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಬಹುಭಾಷೆಯಲ್ಲಿ ಪ್ರಾರಂಭಿಸಬೇಕು. ಹೆಚ್ಚುವರಿ ಶಿಕ್ಷಕರ ನ್ಯೂನ್ಯತೆ ಸರಿಪಡಿಸಬೇಕು. 6ನೇ ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ವರ್ಷದ ಆರ್ಥಿಕ ಬಡ್ತಿ ನೀಡಬೇಕು. ಹಾಗೂ ಗ್ರಾಮೀಣ ಕೃಪಾಂಕ ಶಿಕ್ಷಕರ ಹಾಗೂ ನೌಕರರ ಸಮಸ್ಯೆಗಳನ್ನು ನಿವಾರಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.

ಕರ್ನಾಟಕ ಕಾಲೇಜು ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ತೆರಳಿದ ಮೆರವಣಿಗೆ, ಅಲ್ಲಿ ಸಭೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ವೈ.ಎಚ್. ಬಣವಿ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಹೊನ್ನಪ್ಪನವರ, ಕಾಂಚನಾ ರಾಯ್ಕರ, ಎಸ್.ಎನ್.ಅರಳಿಕಟ್ಟಿ, ಶಕುಂತಲಾ ನವಲಗುಂದ, ಎಸ್.ಬಿ. ಕೇಸರಿ, ಆರ್.ಬಿ.ಲಿಂಗದಾಳ, ಎ.ಆರ್. ದೇಸಾಯಿ ಇದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ, ‘ಪ್ರತಿಭಟನೆಯಿಂದ ಶಾಲೆಯ ಕಾರ್ಯಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗಿಲ್ಲ. ಒಕ್ಕೂಟದಲ್ಲಿರುವ ಕೆಲ ಶಿಕ್ಷಕರು ರಜೆ ಹಾಕಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹೀಗಾಗಿ ಶಾಲೆಗಳು ಸಹಜವಾಗಿ ನಡೆದವು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT