ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೆಲುವಿನಲ್ಲಿ ಕೆಎಲ್‌ಇ ಸಿಬ್ಬಂದಿ ಪಾತ್ರ ಮುಖ್ಯ

ಸಂಕನೂರ ಪರ ಬಿಜೆಪಿ ನಾಯಕರ ಚುರುಕಿನ ಪ್ರಚಾರ: ಶೆಟ್ಟರ್‌ ಹೇಳಿಕೆ
Last Updated 24 ಅಕ್ಟೋಬರ್ 2020, 14:18 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕೆಎಲ್‌ಇ ಸಂಸ್ಥೆಯ ಮತದಾರರು ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಬಾರಿಯೂ ಅವರು ನಮ್ಮ ಅಭ್ಯರ್ಥಿ ಎಸ್‌.ವಿ. ಸಂಕನೂರ ಅವರಿಗೆ ಮತ ಹಾಕಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಮನವಿ ಮಾಡಿದರು.

ಬಿವಿಬಿ ಕಾಲೇಜಿನಲ್ಲಿ ಶನಿವಾರ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ‘ಪಶ್ಚಿಮ ಪದವೀಧರ ಕ್ಷೇತ್ರದ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 75 ಸಾವಿರ ಮತದಾರರು ಮಾತ್ರ ಇದ್ದಾರೆ. ಈ ಭಾಗದಲ್ಲಿ ಎಲ್ಲ ಕಡೆಯೂ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಕೆಎಲ್‌ಇ ಸಿಬ್ಬಂದಿಯ ಪಾತ್ರ ಬಹುಮುಖ್ಯವಾದದ್ದು’ ಎಂದರು.

‘ಸಂಕನೂರ ಅವರು ಹಿಂದಿನ ಅವಧಿಯಲ್ಲಿ ತಾವು ಮಾಡಿರುವ ಸಾಧನೆಗಳ ಪಟ್ಟಿಯನ್ನು ಈಗಾಗಲೇ ನಿಮ್ಮ ಮುಂದೆ ಇಟ್ಟಿದ್ದಾರೆ. ಮತದಾರರು ಕೂಡ ಕೋವಿಡ್‌ ನೆಪವೊಡ್ಡಿ ಮತದಾನದಿಂದ ದೂರವುಳಿಯದೆ ಸುರಕ್ಷತೆಯಿಂದ ತಮ್ಮ ಜವಾಬ್ದಾರಿ ನಿಭಾಯಿಸಬೇಕು’ ಎಂದರು.

ಮುಖ್ಯಮಂತ್ರಿ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ ಮಾತನಾಡಿ ‘ನರೇಂದ್ರ ಮೋದಿ ಮುಂದಾಳತ್ವದ ಕೇಂದ್ರ ಬಿಜೆಪಿ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದು ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ಮುನ್ನುಡಿ ಬರೆದಿದೆ. ಅವರ ಕೈ ಇನ್ನಷ್ಟು ಬಲಪಡಿಸಲು ಸಂಕನೂರ ಅವರನ್ನು ಗೆಲ್ಲಿಸಬೇಕು’ ಎಂದು ಕೋರಿದರು.

ಬೆಳಗಾವಿಯ ಕೆಎಲ್‌ಇ ಸಂಸ್ಥೆ ಅಧ್ಯಕ್ಷ ಪ್ರಭಾಕರ ಕೋರೆ ಮಾತನಾಡಿ ‘ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕರ್ನಾಟಕಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಈ ಅನ್ಯಾಯ ಸರಿಪಡಿಸಬೇಕಾದರೆ ಸಂಕನೂರ ಅವರಂಥ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಅವರು ತಮ್ಮ ಹಿಂದಿನ ಅವಧಿಯಲ್ಲಿ ಕೆಎಲ್‌ಇ ಸಂಸ್ಥೆ ಸಿಬ್ಬಂದಿಯ ಅನೇಕ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಅವರು ಮತ್ತೊಂದು ಅವಧಿಗೆ ಆಯ್ಕೆಯಾದರೆ ನಮ್ಮ ಸಂಸ್ಥೆಗೇ ಹೆಚ್ಚು ಲಾಭ’ ಎಂದರು.

ವಿಧಾನ ಪರಿಷತ್‌ ಸದಸ್ಯರಾದ ಮಹಾಂತೇಶ ಕವಟಗಿಮಠ, ಪ್ರದೀಪ ಶೆಟ್ಟರ್‌, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಎಸ್. ಶೆಟ್ಟರ್, ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಸಾವುಕಾರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT