ಶುಕ್ರವಾರ, ಅಕ್ಟೋಬರ್ 30, 2020
27 °C

ಮೀಸಲಾತಿ ಹೆಚ್ಚಳಕ್ಕೆ ಆಗ್ರಹ: ವಾಲ್ಮೀಕಿ ನಾಯಕ ಸಂಘದಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಪರಿಶಿಷ್ಟ ಪಂಗಡದ ವಾಲ್ಮೀಕಿ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಶೇ 7.5 ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ, ಧಾರವಾಡ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ವತಿಯಿಂದ ಶನಿವಾರ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.

ರಾಜ್ಯದಲ್ಲಿ ಸಮುದಾಯದ ಜನಸಂಖ್ಯೆ 70 ಲಕ್ಷಕ್ಕೂ ಅಧಿಕವಿದೆ. ಹಾಗಾಗಿ, ಈಗಿರುವ ಶೇ 3 ಮೀಸಲಾತಿಯನ್ನು ಪರಿಷ್ಕರಿಸಬೇಕು. ಈ ಕುರಿತು, ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗ ನೀಡಿರುವ ವರದಿಯಂತೆ, ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕೆಂದು ಸಮುದಾಯದ ಜನಪ್ರತಿನಿಧಿಗಳು ಹಾಗೂ ಮುಖಂಡರು 40 ವರ್ಷಗಳಿಂದ ಒತ್ತಾಯಿಸುತ್ತಾ ಬಂದಿದ್ದಾರೆ. ಇದಕ್ಕಾಗಿ, ರಾಜನಹಳ್ಳಿ ಮಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಿ ಗಮನ ಸೆಳೆದಿದ್ದಾರೆ. ಆಗ ರಚನೆಯಾಗಿದ್ದ ದಾಸ್ ಆಯೋಗದ ಶಿಫಾರಸನ್ನು ಜಾರಿಗೊಳಿಸಬೇಕು. ಇಲ್ಲದಿದ್ದರೆ, ಉಗ್ರವಾಗಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಳಿಕ, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಹುಡೇದ, ಗೌರವಾಧ್ಯಕ್ಷ ಸಂತೋಷ ಗುಂಜಳ, ಪ್ರಧಾನ ಕಾರ್ಯದರ್ಶಿ ಭೀಮಪ್ಪ ದೊಡ್ಡಶಂಕರ, ಶಿವಪ್ಪ ಪೂಜಾರ, ಗುರುನಾಥ ಯಾವಗಲ್ಲ, ಹನುಮಂತಪ್ಪ ನಾಯ್ಕ, ಕವಿತಾ ನಾಯ್ಕರ, ಯಲ್ಲಪ್ಪ ದಾಸರ, ಶಿವಾನಂದ ಕೋನಸಾಗರ, ಗದಿಗೆಪ್ಪ ಶಿರೂರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು