ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತಂಕ ಬೇಡ ಡಾ.ರಾಜೇಶ್ ಸುರಗೀಹಳ್ಳಿ

Last Updated 6 ಮಾರ್ಚ್ 2020, 10:01 IST
ಅಕ್ಷರ ಗಾತ್ರ

ಶಿವಮೊಗ್ಗ: ಕೋವಿಡ್–19 ಜಿಲ್ಲೆಯಲ್ಲಿ ಹರಡದಂತೆ ಜಿಲ್ಲಾ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ, ಎಚ್ಚರಿಕೆ ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡುವ ಅಗತ್ಯವಿಲ್ಲ. ಜಿಲ್ಲೆಗೆ ವಿದೇಶಗಳಿಂದ ಬರುವ ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆ ಇದೆ. ಅಲ್ಲದೇ ಅಂತಹ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಅನುಸರಿಸಬೇಕಾದ ಕ್ರಮಗಳು: ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ವೈಯಕ್ತಿಕ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸೋಂಕಿತ ವ್ಯಕ್ತಿಯು ಸೀನಿದಾಗ ಮತ್ತು ಕೆಮ್ಮಿದಾಗ ಹರಡುತ್ತದೆ. ಸೋಂಕಿತ ವ್ಯಕ್ತಿಯ ಜತೆ ನಿಕಟ ಸಂಪರ್ಕದಲ್ಲಿರುವಾಗ, ಅಂತಹ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೇ ಮತ್ತೆ ಬಳಸಿದಾಗ, ಸ್ವಚ್ಛಗೊಳಿಸದ, ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು, ಬಾಯಿಯನ್ನು ಮುಟ್ಟುವುದರಿಂದ ಈ ಕಾಯಿಲೆ ಹರಡುತ್ತದೆ. ಆದ್ದರಿಂದ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು.

ಈ ಕಾಯಿಲೆ ಪ್ರಾಣಿ ಮತ್ತು ಮನುಷ್ಯರಲ್ಲಿ ಮುಖ್ಯವಾಗಿ ಶ್ವಾಸಕೋಶ ಹಾಗೂ ಉಸಿರಾಟಕ್ಕೆ ತೊಂದರೆ ಉಂಟು ಮಾಡುತ್ತದೆ. ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯೂಮೋನಿಯ ಮತ್ತು ಭೇದಿ ಮುಂತಾದವು ಸೋಂಕಿನ ಲಕ್ಷಣಗಳು. ಇದರ ಪತ್ತೆಗೆ ಸೋಂಕಿನ ಲಕ್ಷಣ ಕಂಡು ಬಂದ ವ್ಯಕ್ತಿಯ ಮೂಗು, ಗಂಟಲಿನ ಸ್ರಾವದ ಲೇಪನ ಮತ್ತು ರಕ್ತದ ಮಾದರಿಯನ್ನು ಪ್ರಯೋಗಶಾಲೆಯಲ್ಲಿ ಪರೀಕ್ಷೆಗೆ ಒಳಪಡಿಸಿ, ಸೋಂಕನ್ನು ದೃಢಪಡಿಸಿಕೊಳ್ಳಲಾಗುವುದು.

ಜಿಲ್ಲೆಯಲ್ಲಿ ಈವರೆಗೆ ಸೋಂಕಿನ ಯಾವುದೇ ಪ್ರಕರಣಗಳು ದೃಢಪಟ್ಟಿಲ್ಲ. ಆದರೆ, ಸಾರ್ವಜನಿಕರು ವಿದೇಶ ಪ್ರಯಾಣವನ್ನು ನಿರ್ಬಂಧಿಸುವುದು ಕ್ಷೇಮ. ಸೋಂಕು ಪೀಡಿತರ ಸಂಪರ್ಕದಿಂದ ದೂರವಿರುವುದು, ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಮತ್ತು ಟ್ರಿಪಲ್ ಲೇಯರ್ ಮಾಸ್ಕ್ ಬಳಸುವುದು, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು, ವಿಶೇಷವಾಗಿ ಆಗಾಗ ಸಾಬೂನಿನಿಂದ ಕೈತೊಳೆದುಕೊಳ್ಳುವುದು, ಕೆಮ್ಮುವಾಗ, ಸೀನುವಾಗ ಮಾಸ್ಕ್, ಕರವಸ್ತ್ರ ಉಪಯೋಗಿಸುವುದು ಸೂಕ್ತ.

ಉಸಿರಾಟದ ತೊಂದರೆ ಕಂಡುಬಂದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯಬೇಕು. ಮಾಂಸ, ಮೊಟ್ಟೆ ಇತ್ಯಾದಿಗಳನ್ನು ಚೆನ್ನಾಗಿ ಬೇಯಿಸಿ ಉಪಯೋಗಿಸಬೇಕು. ಅಸುರಕ್ಷಿತವಲ್ಲದ ಕಾಡುಪ್ರಾಣಿ ಅಥವಾ ಸಾಕುಪ್ರಾಣಿಗಳನ್ನು ಮುಟ್ಟಬಾರದು ಎಂದು ಅವರು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT