ಸ್ವಂತ ಬಲದ ನಂಬಿಕೆ ಕಳೆದುಕೊಂಡ ಬಿಜೆಪಿ: ಕುಮಾರಸ್ವಾಮಿ ಟೀಕೆ

ಮಂಗಳವಾರ, ಏಪ್ರಿಲ್ 23, 2019
31 °C
ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರ ಪ್ರಚಾರ ರ್‍ಯಾಲಿ

ಸ್ವಂತ ಬಲದ ನಂಬಿಕೆ ಕಳೆದುಕೊಂಡ ಬಿಜೆಪಿ: ಕುಮಾರಸ್ವಾಮಿ ಟೀಕೆ

Published:
Updated:
Prajavani

ಶಿವಮೊಗ್ಗ: ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ನಂಬಿಕೆ ಬಿಜೆಪಿ ಕಳೆದುಕೊಂಡಿದೆ. ಅದಕ್ಕಾಗಿ ಹಲವು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಜತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕುಟುಕಿದರು.

ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಎಸ್‌.ಮಧು ಬಂಗಾರಪ್ಪ ಬುಧವಾರ ನಾಮಪತ್ರ ಸಲ್ಲಿಸುವ ಮೊದಲು ನಡೆದ ರ್‍ಯಾಲಿಯಲ್ಲಿ ಅವರು ಮಾತನಾಡಿದರು.

ಬಿಜೆಪಿಯೇತರ ಪಕ್ಷಗಳ ವಿರುದ್ಧ ಲಘುವಾಗಿ ಮಾತನಾಡುವ ಪ್ರಧಾನಿ ನರೇಂದ್ರಮೋದಿ ಚುನಾವಣೆ ಹತ್ತಿರ ಬಂದ ಮೇಲೆ ಇತರೆ ಪಕ್ಷಗಳ ಜತೆ ಸೀಟು ಹಂಚಿಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ಎಷ್ಟೇ ಪ್ರಯತ್ನಪಟ್ಟರೂ ಮತ್ತೆ ಈ ದೇಶದ ಪ್ರಧಾನಿಯಾಗುವುದಿಲ್ಲ. ಶಿವಮೊಗ್ಗದಿಂದಲೇ ಬದಲಾವಣೆ ಯುಗ ಆರಂಭವಾಗುತ್ತದೆ ಎಂದು ಭವಿಷ್ಯ ನುಡಿದರು.

ಪ್ರಾದೇಶಿಕ ಪಕ್ಷಗಳಿಗೆ ರಾಷ್ಟ್ರೀಯ ಹಿತಾಸಕ್ತಿ ಇಲ್ಲ ಎನ್ನುವ ಬಿಜೆಪಿ ಹಾಗೂ ಪ್ರಧಾನಿ ಮೋದಿ ಅವರಿಗೆ ಯಾವ ರಾಷ್ಟ್ರೀಯ ಹಿತಾಸಕ್ತಿ ಇದೆ? ಹಿಂದೆ ಆಡಳಿತ ನಡೆಸಿದ ನಾಯಕರು ಮೋದಿಗಿಂತ ಹತ್ತುಪಟ್ಟು ಹೆಚ್ಚು ಕೆಲಸ ಮಾಡಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿ ಕಾಪಾಡಿದ್ದಾರೆ. ಬುರುಡೆ ಬಿಡುವುದನ್ನೇ ಬಿಜೆಪಿ ಮುಖಂಡರು ರಾಷ್ಟ್ರೀಯ ಹಿತಾಸಕ್ತಿ ಎಂದುಕೊಂಡಿದ್ದಾರೆ ಎಂದು ಛೇಡಿಸಿದರು.

ಮೈತ್ರಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿದರೆ ಅರಣ್ಯವಾಸಿಗಳ ಸಂರಕ್ಷಣೆಗೆ ಪಾರ್ಲಿಮೆಂಟ್‌ನಲ್ಲಿ ತಿದ್ದುಪಡಿ ತರಲಾಗುವುದು ಎಂದು ಭರವಸೆ ನೀಡಿದರು.

ಚುನಾವಣೆಯ ನಂತರ ಕುಮಾರಸ್ವಾಮಿ ನೆಗೆದು ಬೀಳುತ್ತಾರೆ ಎಂಬ ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ರಾಜ್ಯದ 44 ಲಕ್ಷ ರೈತರ ಸಾಲ ಮನ್ನಾ ಮಾಡಿದ ಕಾರಣಕ್ಕೆ ನೆಗೆದು ಬೀಳಬೇಕೇ?. ಈ ಚುನಾವಣೆಯ ಮೂಲಕ ಜನರು ಈಶ್ವರಪ್ಪ ಅವರಿಗೆ ಉತ್ತರ ನೀಡುತ್ತಾರೆ ಎಂದರು.

ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್, ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಬುಧವಾರ ಮಧ್ಯಾಹ್ನ 2.30ಕ್ಕೆ ನಾಲ್ಕು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಸಿದರು.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಸಚಿವ ಡಿ.ಕೆ. ಶಿವಕುಮಾರ್, ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೂ ಮೊದಲು ಸೊರಬದ ಕುಬಟೂರಿನ ದ್ಯಾವಮ್ಮ ದೇವಾಲಯ, ತಂದೆ–ತಾಯಿ ಸಮಾಧಿ ಸ್ಥಳ ಬಂಗಾರಧಾಮದಲ್ಲಿ ನಾಮಪತ್ರ ಇಟ್ಟು ಪೂಜೆ ಸಲ್ಲಿಸಿದರು. ನಂತರ ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್‌ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ತೆರೆದ ವಾಹನದಲ್ಲಿ ಕುಮಾರಸ್ವಾಮಿ, ಶಿವಕುಮಾರ್, ಕಾಗೋಡು ಜತೆ ರ‍್ಯಾಲಿ ನಡೆಸಿದರು. ಭಾರಿ ಸಂಖ್ಯೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಜಮಾಯಿಸಿದ್ದರು. ಎಲ್ಲೆಡೆ ಕಾಂಗ್ರೆಸ್, ಜೆಡಿಎಸ್ ಬಾವುಟಗಳು ರಾರಾಜಿಸಿದವು.

 

 

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !