ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಾಯ ಗ್ರಾಮಗಳ ರಚನೆ ಚುರುಕುಗೊಳಿಸಿ

Last Updated 7 ಮಾರ್ಚ್ 2020, 13:11 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ 1,436 ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಕಂದಾಯ ಗ್ರಾಮ ರಚನಾ ಕೋಶದ ನಿರ್ದೇಶಕ ಬಿ.ಹೀರಾನಾಯ್ಕ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಕಂದಾಯ ಗ್ರಾಮಗಳ ರಚನೆ ಪ್ರಕ್ರಿಯೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 4,800 ಜನವಸತಿ ಕೇಂದ್ರಗಳು ಇದ್ದು, ಪ್ರಸ್ತುತ 1,436 ಜನವಸತಿ ಕೇಂದ್ರಗಳಿಗೆ ಸೂಕ್ತ ದಾಖಲೆಗಳಿಲ್ಲ. ಇಂತಹ ಜನವಸತಿ ಕೇಂದ್ರಗಳಿಗೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಸಂಪರ್ಕದಂತಹ ಮೂಲ ಸೌಲಭ್ಯಗಳನ್ನು ಕಲ್ಪಿಸುವುದು ಕಷ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿ ಸಿದ್ಧಪಡಿಸಿದೆ. ಮಾರ್ಗಸೂಚಿಗೆ ಒಳಪಡುವ ಜನವಸತಿ ಕೇಂದ್ರಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸೂಚನೆ ನೀಡಿದರು.

ಕನಿಷ್ಠ 10 ಮನೆಗಳಿರುವ ಜನವಸತಿ ಕೇಂದ್ರಗಳನ್ನು ಗ್ರಾಮ ಗುಚ್ಛವೆಂದು ಪರಿಗಣಿಸಬಹುದಾಗಿದೆ. ಇದೇ ರೀತಿ ಕನಿಷ್ಠ 50 ಜನಸಂಖ್ಯೆಯನ್ನು ಜನವಸತಿ ಕೇಂದ್ರ ಒಳಗೊಂಡಿದ್ದರೆ ಅದನ್ನು ಕಂದಾಯ ಗ್ರಾಮವಾಗಿ ಪರಿಗಣಿಸಬಹುದಾಗಿದೆ. ಕಂದಾಯ ಗ್ರಾಮಗಳಾಗಿ ಪರಿವರ್ತಿಸಿದ ಬಳಿಕ ಕಲಂ 94 ಅಡಿಯಲ್ಲಿ ನಿವಾಸಿಗಳಿಗೆ ಹಕ್ಕು ದಾಖಲೆಗಳನ್ನು ಒದಗಿಸಬೇಕು ಹೇಳಿದರು.

ಸರ್ಕಾರದ ಬಳಿ 2,800 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಸ್ತಾಪಗಳಿದ್ದು, 1,400 ಪ್ರಕರಣಗಳಲ್ಲಿ ಅಧಿಸೂಚನೆ ಸಿದ್ಧಪಡಿಸಲಾಗಿದೆ. 800 ಪ್ರಕರಣಗಳು ಬಹುತೇಕ ಅಂತಿಮಗೊಂಡಿದ್ದು, ಹಕ್ಕುಪತ್ರ ನೀಡುವ ಹಂತದಲ್ಲಿದೆ. ಶಿವಮೊಗ್ಗ ಜಿಲ್ಲೆಯಿಂದ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕುರಿತು 34 ಪ್ರಸ್ತಾವನೆಗಳು ಸರ್ಕಾರದ ಹಂತದಲ್ಲಿವೆ ಎಂದು ತಿಳಿಸಿದರು.

ಅರಣ್ಯ ಭೂಮಿಯಲ್ಲಿ ನೆಲೆಗೊಂಡಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಬಗ್ಗೆ ಸರ್ಕಾರದಿಂದ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ತಕ್ಷಣ, ಅಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಪ್ರಕ್ರಿಯೆಯನ್ನು ಆರಂಭಿಸಬೇಕು. ಇದಕ್ಕಾಗಿ ಸಂಬಂಧಿಸಿದ ಜನವಸತಿಯಲ್ಲಿ ಗ್ರಾಮಸಭೆಯನ್ನು ಆಯೋಜಿಸಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧ, ಶಿವಮೊಗ್ಗ ಉಪ ವಿಭಾಗಾಧಿಕಾರಿ ಪ್ರಕಾಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT