ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರದಿ ಬಂದ ತಕ್ಷಣ ಕ್ರಮ: ಸಚಿವ ಸಿ.ಸಿ.ಪಾಟೀಲ

₹6 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಚಿವರಿಂದ ಭೂಮಿಪೂಜೆ, ಉದ್ಘಾಟನೆ
Last Updated 8 ಫೆಬ್ರುವರಿ 2021, 3:36 IST
ಅಕ್ಷರ ಗಾತ್ರ

ಗದಗ: ‘ಪಂಚಮಸಾಲಿ ಸಮುದಾಯವನ್ನು 2ಎ ವರ್ಗಕ್ಕೆ ಸೇರಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಹಿಂದುಳಿದ ವರ್ಗಗಳ ನಿಗಮಕ್ಕೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ಸೂಚಿಸಿದ್ದಾರೆ’ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಸಮುದಾಯವನ್ನು 3ಬಿಗೆ ಸೇರ್ಪಡೆಗೊಳಿಸಿದ್ದರು. ಈಗ ಪಂಚಮಸಾಲಿ ಸಮುದಾಯದವರು ಶಿಕ್ಷಣ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ಅಧ್ಯಯನ ವರದಿ ಬಂದ ತಕ್ಷಣ ಕ್ರಮ ವಹಿಸಲಾಗುವುದು’ ಎಂದು ಹೇಳಿದರು.

‘ಕೋವಿಡ್‌–19ನಿಂದಾಗಿ ಈವರೆಗೆ ಅಭಿವೃದ್ಧಿ ಕಾರ್ಯಗಳಿಗೆ ತಡೆಯುಂಟಾಗಿತ್ತು. ಸದ್ಯ ಪರಿಸ್ಥಿತಿ ಹತೋಟೆಗೆ ಬಂದಿದ್ದು, ಆರ್ಥಿಕತೆ ಚೇತರಿಕೆಯಾಗುತ್ತಿದೆ. ಗದಗ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅಂದಾಜು ₹6 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದೆ’ ಎಂದು ಹೇಳಿದರು.

ಗದಗ ತಾಲ್ಲೂಕಿನ ಎಚ್.ಎಸ್.ವೆಂಕಟಾಪುರ, ಹೊಂಬಳ, ಸಂಭಾಪುರ, ನರಸಾಪುರ ಗ್ರಾಮಗಳಲ್ಲಿ ಜಲಜೀವನ ಮಿಷನ್ ಪ್ರತಿ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸಿ ಶುದ್ಧ ಕುಡಿಯುವ ನೀರು ಪೂರೈಕೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.

‘ಹೊಂಬಳ ಗ್ರಾಮದಲ್ಲಿ ಹರಣಿಶಿಕಾರ ಜನಾಂಗದವರಿಗಾಗಿ ಸಮುದಾಯ ಭವನದ ಕಟ್ಟಡಕ್ಕೆ ಶಾಸಕರ ಅನುದಾನದಡಿ ₹5 ಲಕ್ಷ ನೀಡಲಾಗಿದ್ದು, ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಲಾಯಿತು. ಹೊಂಬಳದಲ್ಲಿ ₹5 ಲಕ್ಷ ರೂ ಅನುದಾನದಡಿ ನಿರ್ಮಿಸಿದ ಬಸ್ ಶೆಲ್ಟರ್‌ ಅನ್ನು ಭಾನುವಾರ ಲೋಕಾರ್ಪಣೆಗೊಳಿಸಲಾಗಿದೆ. ಐಟಿಐ ಕಾಲೇಜು ಕಟ್ಟಡ ಕಾಮಗಾರಿ ಆರಂಭಕ್ಕೆ ಚಾಲನೆ ನೀಡಲಾಗಿದೆ’ ಎಂದು ಹೇಳಿದರು.

ಸಂಭಾಪುರ ಗ್ರಾಮದಲ್ಲಿ ಅಂದಾಜು ₹12 ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡವನ್ನು ಲೋಕಾರ್ಪಣೆಗೊಳಿಸಲಾಯಿತು. ಹೊಂಬಳ ಹಾಗೂ ನರಸಾಪುರ ಗ್ರಾಮಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಈ ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ಗ್ರಾಮಸ್ಥರು ನಿಗಾ ವಹಿಸಬೇಕು ಎಂದು ಹೇಳಿದರು.

‘ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ’

‘ಮಹಾರಾಷ್ಟ್ರದಲ್ಲಿ ಸಣ್ಣ ಕೈಗಾರಿಕೆ, ಉದ್ಯಮಗಳು ಉತ್ತಮ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮಹಾರಾಷ್ಟ್ರ ರಾಜ್ಯದ ಪ್ರವಾಸ ಮಾಡಿ ಸಣ್ಣ ಕೈಗಾರಿಕೆಗಳ ಕುರಿತು ಅಧ್ಯಯನ ನಡೆಸಲಾಗುವುದು’ ಎಂದು ಸಚಿವ ಸಿ.ಸಿ.ಪಾಟೀಲ ಹೇಳಿದರು.

‘ರಾಜ್ಯದ ಸಣ್ಣ ಕೈಗಾರಿಕೆಗಳಿಗೆ ಹಾಗೂ ಯುವಕರಿಗೆ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಇಲಾಖೆಯಿಂದ ಅಗತ್ಯ ಸಹಕಾರ ನೀಡುವ ಮೂಲಕ ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದು. ಅವಶ್ಯಕತೆ ಇರುವಲ್ಲಿ ಸಣ್ಣ ಕೈಗಾರಿಕೆಗಳಿಗೆ ಜಾಗ ಖರೀದಿಸಿ ಕೈಗಾರಿಕೆ ಸ್ಥಾಪನೆಗೆ ಕ್ರಮ ವಹಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT