ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲಸಿಗರ ಮೇಲೆ ನಿಗಾ ಇಡಿ

ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಸಭೆ: ಸಚಿವ ಸಿ.ಸಿ. ಪಾಟೀಲ
Last Updated 9 ಮೇ 2021, 4:30 IST
ಅಕ್ಷರ ಗಾತ್ರ

ಗದಗ: ‘ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಸರ್ಕಾರ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅವುಗಳ ಅನುಷ್ಠಾನಕ್ಕೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶನಿವಾರ ನಡೆದ ಕೋವಿಡ್ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜನತಾ ಕರ್ಫ್ಯೂದಿಂದ ನಿರೀಕ್ಷಿತ ಫಲಿತಾಂಶ ಸಾಧ್ಯವಾಗದ ಹಿನ್ನೆಲೆಯಲ್ಲಿ ಪರಿಷ್ಕೃತ ಕಠಿಣ ಮಾರ್ಗಸೂಚಿಗಳನ್ನು ಮೇ 10ರ ಬೆಳಿಗ್ಗೆ 6ರಿಂದ ಮೇ 24ರ ಬೆಳಿಗ್ಗೆ 6 ಗಂಟೆವರೆಗೆ ಜಾರಿಗೊಳಿಸಲಾಗಿದೆ’ ಎಂದು ತಿಳಿಸಿದರು.

‘ಈ ಸಂದರ್ಭದಲ್ಲಿ ಅಂತರ ಜಿಲ್ಲೆ ಪ್ರಯಾಣಕ್ಕೆ ನಿರ್ಬಂಧ ಇರುವುದರಿಂದ ವಿವಿಧೆಡೆ ಇರುವ ಜನರು ತಮ್ಮ ಸ್ವಂತ ಊರುಗಳಿಗೆ ವಾಪಸಾಗಲಿದ್ದಾರೆ. ಅಂತಹವರ ಮೇಲೆ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು. ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಪಾಸಣೆಗೆ ಒಳಪಡಿಸಬೇಕು. ಸೋಂಕು ದೃಢಪಟ್ಟಲ್ಲಿ ಕೋವಿಡ್ ಕೇರ್ ಸೆಂಟರ್, ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸುವ ಕೆಲಸವನ್ನು ಆಯಾ ಸ್ಥಳೀಯ ಅಧಿಕಾರಿಗಳು, ಆಶಾ ಕಾರ್ಯಕರ್ತರು ಅಚ್ಚುಕಟ್ಟಾಗಿ ನಿರ್ವಹಿಸಬೇಕು’ ಎಂದರು.

‘ಲಾಕ್‌ಡೌನ್‌ ನಿಯಮ ಉಲ್ಲಂಘಿಸುವವರ ಮೇಲೆ ತಾಲ್ಲೂಕು ದಂಡಾಧಿಕಾರಿಗಳು ಕ್ರಮ ಕೈಗೊಂಡು ಸೋಂಕು ನಿಯಂತ್ರಣಕ್ಕೆ ಕ್ರಮವಹಿಸಬೇಕು. ತಾಲ್ಲೂಕು ಆಸ್ಪತ್ರೆಗಳಿಗೆ ನಿಯಮಿತವಾಗಿ ಭೇಟಿ ನೀಡುವ ಮೂಲಕ ಸೋಂಕಿತರಿಗೆ ನೀಡುವ ಚಿಕಿತ್ಸೆ ಹಾಗೂ ಆಸ್ಪತ್ರೆಯ ವ್ಯವಸ್ಥೆ ಕುರಿತು ಪರಿಶೀಲಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್. ಮಾತನಾಡಿ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯ್ತಿ ಪಿಡಿಒ ಹಾಗೂ ಕಾರ್ಯದರ್ಶಿಗಳು ಸಹ ಕಾರ್ಯಸ್ಥಾನದಲ್ಲಿದ್ದು ಕೆಲಸ ಮಾಡಬೇಕು. ಒಂದು ವೇಳೆ ಅನಿವಾರ್ಯ ಪರಿಸ್ಥಿತಿ ಇದ್ದಲ್ಲಿ ಮಾತ್ರ ಮೇಲಾಧಿಕಾರಿಗಳ ಅನುಮತಿ ಪಡೆದು ತೆರಳಬೇಕು’ ಎಂದು ಸೂಚಿಸಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ಎನ್., ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಮ್ಸ್ ನಿರ್ದೇಶಕ ಡಾ. ಪಿ.ಎಸ್.ಭೂಸರೆಡ್ಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ ಬಸರಿಗಿಡದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪಲ್ಲೇದ, ಆರ್.ಸಿ.ಎಚ್. ಅಧಿಕಾರಿ ಡಾ.ಬಿ.ಎಂ.ಗೊಜನೂರ ಇದ್ದರು.

ಪರಿಶೀಲನೆಗೆ ತಂಡ ರಚನೆ

‘ಖಾಸಗಿ ಆಸ್ಪತ್ರೆಯಲ್ಲಿನ ಸೋಂಕಿತರಿಗೆ ಹಾಸಿಗೆ, ಆಮ್ಲಜನಕ, ರೆಮ್‌ಡಿಸಿವರ್ ಲಭ್ಯತೆ ಪರಿಶೀಲನೆಗೆ ತಂಡ ರಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದರು.

‘ಆಮ್ಲಜನಕ ಸರಬರಾಜು ಕುರಿತು ಮೇಲ್ವಿಚಾರಣೆಗಾಗಿ ಕ್ಯಾಂಪ್ ಆಫೀಸರ್ ನೇಮಕ, ಕೋವಿಡ್ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯತೆ ಪರಿಶೀಲನೆಗೆ ಸಮಿತಿ ರಚನೆ, ಜಿಲ್ಲಾ ಮಟ್ಟದಲ್ಲಿ ಆಕ್ಸಿಜನ್ ಕೋಶ ಸ್ಥಾಪಿಸಿ ನಿರ್ವಹಣೆಗಾಗಿ ನೋಡಲ್ ಅಧಿಕಾರಿ ನಿಯೋಜಿಸಲಾಗಿದೆ. ಈ ಎಲ್ಲ ಅಧಿಕಾರಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT