ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜವಾಬ್ದಾರಿ ಹಂಚಿಕೆಗೆ ಕ್ರಮವಹಿಸಿ: ಸಚಿವ

ಅಪೌಷ್ಟಿಕ ಮಕ್ಕಳ ವಿಶೇಷ ಕಾಳಜಿಗೆ ಸಚಿವ ಸಿ.ಸಿ.ಪಾಟೀಲ ಸೂಚನೆ
Last Updated 15 ಜೂನ್ 2021, 4:54 IST
ಅಕ್ಷರ ಗಾತ್ರ

ಗದಗ: ‘ತಜ್ಞರ ವರದಿಯಂತೆ ಕೋವಿಡ್‌ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳಿಗೆ ಸೋಂಕು ತಗುಲುವ ಸಂಭವ ಜಾಸ್ತಿ ಇದ್ದು. ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಕಾಳಜಿಗೆ ವಿಶೇಷ ಒತ್ತು ನೀಡಬೇಕು’ ಎಂದು ಸಚಿವ ಸಿ.ಸಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಂಭಾವ್ಯ ಕೋವಿಡ್‌–19 ಮೂರನೇ ಅಲೆ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲಾ ಪಂಚಾಯ್ತಿ ಸಿಇಒ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಅಧಿಕಾರಿಗಳ ಸಭೆ ನಡೆಸಿ ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ಹಂಚಿಕೆ ಮಾಡಬೇಕು. ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಜಿಲ್ಲೆಯ 243 ಮಕ್ಕಳ ಆರೋಗ್ಯದ ಬಗ್ಗೆ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ನಿಗಾ ವಹಿಸಬೇಕು. ಸಂಭವನೀಯ ಮೂರನೇ ಅಲೆ ಎದುರಾದಲ್ಲಿ ನಿಯಂತ್ರಣ ಹಾಗೂ ಚಿಕಿತ್ಸೆಗೆ ಅಗತ್ಯದ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಡಿಎಚ್‌ಒ ಡಾ.ಸತೀಶ ಬಸರಿಗಿಡದ ಮಾತನಾಡಿ, ‘ಈವರೆಗೆ ಜಿಲ್ಲೆಯ 2,402 ಮಕ್ಕಳಿಗೆ ಸೋಂಕು ದೃಢಪಟ್ಟಿದ್ದು, ಸದ್ಯ 51 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. 2020ರಲ್ಲಿ 18 ವರ್ಷದೊಳಗಿನ ಮಕ್ಕಳಲ್ಲಿ ಶೇ 3.4ರಷ್ಟಿದ್ದ ಸೋಂಕಿನ ಪ್ರಮಾಣ, 2021ರಲ್ಲಿ ಶೇ 2.9ರಷ್ಟಿದೆ. ಸೋಂಕಿನಿಂದ ಯಾವೊಬ್ಬ ಮಗು ಕೂಡ ಮೃತಪಟ್ಟಿಲ್ಲ. ಜಿಲ್ಲೆಯ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ 10 ಬೆಡ್‌ಗಳನ್ನು ಮಕ್ಕಳ ಚಿಕಿತ್ಸೆಗಾಗಿ ಮೀಸಲಿಡಿಸಲಾಗಿದೆ. ಸದ್ಯ ಮೂವರು ಮಕ್ಕಳ ತಜ್ಞ ವೈದ್ಯರು ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಭರತ್‌ ಎಸ್., ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್., ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ., ತಹಶೀಲ್ದಾರರು, ತಾಲ್ಲೂಕು ಪಂಚಾಯ್ತಿ ಇಒಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಇದ್ದರು.

ಆರೈಕೆ ಕೇಂದ್ರದಲ್ಲೇ ಚಿಕಿತ್ಸೆ

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಜಗದೀಶ ನುಚ್ಚಿನ ಮಾತನಾಡಿ, ‘ಮೂರನೇ ಅಲೆಯ ಸಂದರ್ಭದಲ್ಲಿ ಸೋಂಕಿತರನ್ನು ಕಡ್ಡಾಯವಾಗಿ ಆರೈಕೆ ಕೇಂದ್ರ ಇಲ್ಲವೇ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಬೇಕು. ಇದಕ್ಕೆ ವಿವಿಧ ಇಲಾಖೆಗಳ ಸಹಕಾರ ಅಗತ್ಯ. ಜಿಲ್ಲೆಯಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಿಸುವ 12 ಸಂಚಾರಿ ತಂಡ ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಹೆಚ್ಚಿನ ತಂಡಗಳ ಅಗತ್ಯ ಇದೆ’ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ 8 ಲಕ್ಷ ಜನರಿದ್ದು, ಈ ಪೈಕಿ 2 ಲಕ್ಷ ಮಂದಿಗೆ ಲಸಿಕೆ ಹಾಕಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಶೇ 25ರಷ್ಟು ಜನರಿಗೆ ಲಸಿಕೆ ಗುರಿ ಸಾಧಿಸಿದಂತಾಗಿದೆ.
ಎಂ.ಸುಂದರೇಶ ಬಾಬು, ಜಿಲ್ಲಾಧಿಕಾರಿ

ಜಿಮ್ಸ್‌ನಲ್ಲಿ 110 ವೆಂಟಿಲೇಟರ್‌ಗಳು ಲಭ್ಯ ಇವೆ. ಮಕ್ಕಳ ಚಿಕಿತ್ಸೆಗಾಗಿ 30 ಐಸಿಯು ವೆಂಟಿಲೇಟರ್ ಬೆಡ್‌ಗಳನ್ನು ಮೀಸಲಿರಿಸಿದ್ದು, ವಿವಿಧ ಹಂತಗಳಲ್ಲಿ ಇದನ್ನು 100ಕ್ಕೆ ವಿಸ್ತರಿಸುವ ಗುರಿ ಇದೆ.
ಡಾ.ಪಿ.ಎಸ್.ಭೂಸರೆಡ್ಡಿ, ಜಿಮ್ಸ್‌ ನಿರ್ದೇಶಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT