ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಕಾಮಗಾರಿಗೆ ನಿಗಾವಹಿಸಿ

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್. ಸೂಚನೆ
Last Updated 27 ಆಗಸ್ಟ್ 2021, 16:27 IST
ಅಕ್ಷರ ಗಾತ್ರ

ಗದಗ: ‘ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್. ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪಿಡಿಒಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ಎಲ್ಲ ಕಾಮಗಾರಿಗಳ ಪೂರ್ಣ ಮಾಹಿತಿ ಹೊಂದಿರಬೇಕು. ಕಾಮಗಾರಿ ಆರಂಭಕ್ಕೂ ಮೊದಲೇ ಕಾಲಾವಧಿ ನಿಗದಿಪಡಿಸಲಾಗಿರುತ್ತದೆ. ಅದರಂತೆ ನಿಗದಿಪಡಿಸಿದ ಕಾಲಾವಧಿಯಲ್ಲಿಯೇ ಗುಣಮಟ್ಟದ ಕಾಮಗಾರಿ ಆಗುವಂತೆ ನಿಗಾ ವಹಿಸಬೇಕು. ಕಾಮಗಾರಿ ನಿಧಾನಗತಿಯಾದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು’ ಎಂದು ನಿರ್ದೇಶನ ನೀಡಿದರು.

‌‘ಕಾಮಗಾರಿಗಳ ನಿಯಮಿತ ಪರಿಶೀಲನೆ ನಡೆಸಿ ಮೇಲಾಧಿಕಾರಿಗಳಿಗೆ ವರದಿ ಒಪ್ಪಿಸುವುದರ ಜತೆಗೆ ಕಾಮಗಾರಿಗಳನ್ನು ಆಯಾ ಆರ್ಥಿಕ ವರ್ಷದ ಅಂತ್ಯದೊಳಗೆ ಪೂರ್ಣಗೊಳಿಸಲು ಶ್ರಮಿಸಬೇಕು’ ಎಂದು ಸೂಚಿಸಿದರು.

‘ಕೋವಿಡ್‌ನಿಂದಾಗಿ ಎಲ್ಲ ವರ್ಗದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನರೇಗಾ ಯೋಜನೆಯಲ್ಲಿ ಜನರನ್ನು ಅಧಿಕವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು. ನರೇಗಾದಲ್ಲಿ ದುಡಿದ ಜನರಿಗೆ ಸಂಬಳವನ್ನು ಕಾಲಕಾಲಕ್ಕೆ ಪಾವತಿಸಬೇಕು’ ಎಂದರು.

‘ಗ್ರಾಮ ಪಂಚಾಯ್ತಿಗಳು ನರೇಗಾ ಯೋಜನೆ ಅಡಿಯಲ್ಲಿ ಶಾಲಾ ಕಾಂಪೌಂಡ್, ಪಿಂಕ್ ಶೌಚಾಲಯ, ಕೆರೆಗಳ ಹೂಳೆತ್ತುವಿಕೆ, ಕಲ್ಯಾಣಿಗಳ ಸ್ವಚ್ಛತಾ ಕಾರ್ಯ, ಶಾಲಾ ಆಟದ ಮೈದಾನ ನಿರ್ಮಾಣ ಕೆಲಸಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ತೊಡಗಿಸಬೇಕು. ಜತೆಗೆ ಈ ಯೋಜನೆ ಅಡಿ ಮಹಿಳಾ ಪಾಲುದಾರಿಕೆಯ ಪ್ರಮಾಣ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರ ಪಾಲುದಾರಿಕೆ ಹೆಚ್ಚಿಸುವಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಬಿ.ಕಲ್ಲೇಶ ಮಾತನಾಡಿ, ‘ಗ್ರಾಮ ಪಂಚಾಯ್ತಿಗಳಲ್ಲಿ ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು. ವಿನಾಕಾರಣ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು ಹಾಗೂ ಸ್ವೀಕರಿಸಿದ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು’ ಎಂದರು.
ಇದೇ ಸಂದರ್ಭದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ರಾಜ್ಯ ಹಾಗೂ ಜಿಲ್ಲಾ ಸಹಾಯವಾಣಿ (9916289100) ಸಂಖ್ಯೆಗಳ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ತಾಲ್ಲೂಕು ಪಂಚಾಯ್ತಿ ಇಒಗಳು ಮತ್ತು ಗ್ರಾಮ ಪಂಚಾಯ್ತಿಗಳ ಪಿಡಿಒಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT