ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಎಸ್‌ಪಿ ಬಿ.ಎಸ್‌.ನೇಮಗೌಡ ಸೂಚನೆ

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆಯಲ್ಲಿ ಎಸ್‌ಪಿ ಬಿ.ಎಸ್‌.ನೇಮಗೌಡ ಸೂಚನೆ
Published 30 ಜೂನ್ 2024, 15:51 IST
Last Updated 30 ಜೂನ್ 2024, 15:51 IST
ಅಕ್ಷರ ಗಾತ್ರ

ಗದಗ: ‘ಜನಸಾಮಾನ್ಯರ ದೈನಂದಿನ ಸಂಚಾರಕ್ಕೆ ಯಾವುದೇ ಅಡೆತಡೆಯಾಗದಂತೆ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಸಾಧ್ಯವಾದಷ್ಟು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಭೆಯಲ್ಲಿ ಮಾತನಾಡಿದರು.

‘ನಿಗದಿಪಡಿಸಿದ ಅಭಿವೃದ್ಧಿ ಕಾಮಗಾರಿಗಳಾದ ರಸ್ತೆ ನಿರ್ಮಾಣ, ಸೇತುವೆ ಹಾಗೂ ಚರಂಡಿ ನಿರ್ಮಾಣ, ಬೀದಿದೀಪ ಕಾಮಗಾರಿಗಳನ್ನು ಇಲಾಖೆಯ ನಿರ್ದಿಷ್ಟಪಡಿಸಿದ ಅವಧಿಯೊಳಗೆ ಗುತ್ತಿಗೆದಾರರು ಪೂರ್ಣಗೊಳಿಸಬೇಕು. ಈ ಬಗ್ಗೆ ಅನುಷ್ಟಾನ ಇಲಾಖೆಗಳು ನಿರಂತರ ನಿಗಾ ವಹಿಸುವ ಮೂಲಕ ಕಾಮಗಾರಿ ಪೂರ್ಣಗೊಳಿಸುವಲ್ಲಿ ಗಮನ ಹರಿಸಬೇಕು’ ಎಂದು ತಿಳಿಸಿದರು.

'ಸಂಚಾರ ವ್ಯವಸ್ಥೆಗೆ ಅಭಿವೃದ್ಧಿ ಕಾಮಗಾರಿಗಳು ಅಡೆತಡೆಯಾಗಬಾರದು. ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಾಗ ವಿನಾಕಾರಣ ವಿಳಂಬ ಧೋರಣೆ ಅನುಸರಿಸಬಾರದು. ಕಾಮಗಾರಿ ಸ್ಥಳದಲ್ಲಿ ಸಾರ್ವಜನಿಕರ ಓಡಾಟಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವ ಮೂಲಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಇದಾವುದನ್ನೂ ಮಾಡದೇ ಕಾಮಗಾರಿ ಕೈಗೊಂಡರೆ ಅಪಘಾತವಾದಲ್ಲಿ ಅಥವಾ ಜನ–ಜಾನುವಾರುಗಳ ಜೀವಹಾನಿಯಾದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸುವ ಮೂಲಕ ಪ್ರಕರಣ ದಾಖಲಿಸಲಾಗುವುದು’ ಎಂದು ಎಚ್ಚರಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮಾತನಾಡಿ, ‘ಸಂಚಾರ ನಿಯಮಗಳ ಪಾಲನೆ ಮಾಡಲು ಸಾರ್ವಜನಿಕರಿಗೆ ನಿಗದಿತ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ರಸ್ತೆ ತಿರುವುಗಳಲ್ಲಿ, ಶಾಲಾ ಕಾಲೇಜುಗಳ ಹತ್ತಿರದ ರಸ್ತೆಗಳಲ್ಲಿ ವಾಹನಗಳು ನಿಧಾನಗತಿಯಿಂದ ಚಲಿಸುವಂತೆ ಮಾಡಲು ರಸ್ತೆ ತಡೆಗಳನ್ನು ಮಾರ್ಗಸೂಚಿಯನ್ವಯ ಮಾಡಬೇಕು. ಅವೈಜ್ಞಾನಿಕ ರಸ್ತೆ ತಡೆಗಳ ನಿರ್ಮಾಣ ಬೇಡ’ ಎಂದು ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಕಳಸಾಪುರ ಕ್ರಾಸ್‍ನಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಆ ಪ್ರದೇಶದಲ್ಲಿ ಸೂಕ್ತ ವ್ಯವಸ್ಥೆ ಮಾಡುವ ಮೂಲಕ ಅಪಘಾತಗಳನ್ನು ತಡೆಯಲು ಮುಂದಾಗಬೇಕು. ಈ ಕ್ರಮ ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲೆಯ ಸೊರಟೂರು ಹತ್ತಿರ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ ಒಂದು ತಿಂಗಳೊಳಗಾಗಿ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಅಲ್ಲದೇ ಕೆ–ಶಿಪ್ ಸಂಸ್ಥೆಯಿಂದ ಕೈಗೊಂಡಿರುವ ಗದಗ-ಹೊನ್ನಾಳಿ ರಸ್ತೆ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ರಮೇಶ ಪಾಟೀಲ, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಮಂಜುನಾಥ ಶಿರೋಳ, ನಗರಸಭೆ ಪೌರಾಯುಕ್ತ ಪ್ರಶಾಂತ ವರಗಪ್ಪನವರ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೇವರಾಜ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT