ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ. 100 ಗುರಿ ಸಾಧನೆಗೆ ಸಹಕಾರ ಅಗತ್ಯ: ಸಂಕನೂರ

'ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಬೇಕು'
Last Updated 6 ಮೇ 2021, 4:47 IST
ಅಕ್ಷರ ಗಾತ್ರ

ಗದಗ: ‘ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೋವಿಡ್‌ ಲಸಿಕೆ ಹಾಕಿಸುವ ಮೂಲಕ ಜಿಲ್ಲಾ ಸರ್ಕಾರಿ ನೌಕರರ ಸಂಘವು ಶೇ 100ರಷ್ಟು ಗುರಿ ಸಾಧನೆಯ ಇಚ್ಛೆ ಹೊಂದಿದೆ., ಇದಕ್ಕೆ ಜಿಲ್ಲಾಡಳಿತದ ಸಹಕಾರ ಅಗತ್ಯ’ ಎಂದು ವಿಧಾನ ಪರಿಷತ್‌ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಎಲ್ಲ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಸಿಕಾಕರಣ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

‘ಪ್ರಸ್ತುತ ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಉಪನ್ಯಾಸಕರು ಸೇರಿ 7,559 ಮಂದಿ ಶಿಕ್ಷಕರಿದ್ದಾರೆ. ಅವರಲ್ಲಿ 4,486 ಮಂದಿ ಶಿಕ್ಷಕರು ಇನ್ನೂ ಲಸಿಕೆ ಪಡೆಯುವುದಿದೆ. ಈ ಕುರಿತು ಶಿಕ್ಷಕರಲ್ಲಿ ಜಾಗೃತಿ ಮೂಡಿಸಿ ಶೇ 100ರ ಗುರಿ ಸಾಧನೆಗೆ ಕ್ರಮವಹಿಸಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಮಾತನಾಡಿ, ‘ಸರ್ಕಾರದ ಮಾರ್ಗಸೂಚಿಗಳನ್ವಯ 60 ವರ್ಷ ಮೇಲ್ಪಟ್ಟವರಿಗೆ, ಕೋವಿಡ್ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸಿದ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 45 ವರ್ಷ ಮೇಲ್ಪಟ್ಟವರು ತಮ್ಮ ಸಮೀಪದ ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಪಡೆಯಬಹುದು’ ಎಂದರು.

‘ಈಗಾಗಲೇ ಮೊದಲನೇ ಹಂತದ ಲಸಿಕೆ ಪಡೆದ ಕೆಲವು ನೌಕರರು ಎರಡನೇ ಡೋಸ್ ಪಡೆಯಲು ಹಿಂಜರಿಯುತ್ತಿದ್ದಾರೆ. ಅಂತವರ ಮನವೊಲಿಸಿ ಎರಡನೇ ಡೋಸ್ ಲಸಿಕೆ ಪಡೆಯಲು ಮುಂದಾಗುವಂತೆ ಜಾಗೃತಿ ಮೂಡಿಸಬೇಕು. ಮುಂದಿನ ದಿನಗಳಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ಸೂಚನೆ ನೀಡಲಾಗುವುದು’ ಎಂದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವಿ ಗುಂಜೀಕರ ಮಾತನಾಡಿ, ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಗಳ ಪೈಕಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿದ ಕೆಲವು ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಬಾಕಿ ಇಲಾಖೆಗಳ ಸಿಬ್ಬಂದಿ ಮಾರ್ಗಸೂಚಿಗಳನ್ವಯ ಅರ್ಹರಿದ್ದು, ಲಸಿಕೆ ಪಡೆದಿಲ್ಲ. ಅಂತಹವರನ್ನು ಗುರುತಿಸುವುದರ ಜೊತೆಗೆ ಜಿಲ್ಲೆಯ ಅಂದಾಜು 11 ಸಾವಿರ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕಟುಂಬಸ್ಥರಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT