ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಿ

ಕೋವಿಡ್ ಲಸಿಕಾಕರಣ ಕಾರ್ಯಕ್ರಮಕ್ಕೆ ಸಚಿವ ಸಿ.ಸಿ.ಪಾಟೀಲ ಚಾಲನೆ
Last Updated 4 ಜನವರಿ 2022, 5:46 IST
ಅಕ್ಷರ ಗಾತ್ರ

ಗದಗ: ‘ಕೋವಿಡ್‌–19 ಲಸಿಕೆ ವಿಶ್ವಾಸಾರ್ಹವಾಗಿದ್ದು, ಯಾರೂ ಅಪಪ್ರಚಾರಕ್ಕೆ ಕಿವಿಗೊಡಬಾರದು. ಜಿಲ್ಲೆಯಲ್ಲಿರುವ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. ಮೊದಲನೇ ಡೋಸ್ ಪಡೆದ 28 ದಿನಗಳ ನಂತರ ಎರಡನೇ ಡೋಸ್ ಲಸಿಕೆ ಪಡೆಯಬೇಕು. ಈ ಅಭಿಯಾನಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿದರು.

ನಗರದ ಎಎಸ್‌ಎಸ್ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸೋಮವಾರ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ನಡೆದ ಕೋವಿಡ್ ಲಸಿಕಾಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೊರೊನಾ ಸೋಂಕಿನ ಎರಡು ಅಲೆಗಳನ್ನು ಜಿಲ್ಲೆಯಲ್ಲಿ ಸಮರ್ಥವಾಗಿ ಎದುರಿಸಲಾಗಿದೆ. ಈ ಪ್ರಯತ್ನಕ್ಕೆ ಎಲ್ಲ ಜನಪ್ರತಿನಿಧಿಗಳು ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಿದ್ದಾರೆ. ಈಗ ಮತ್ತೇ ಸೋಂಕು ಪ್ರಕರಣಗಳ ಸಂಖ್ಯೆ ಅಧಿಕಗೊಳ್ಳುತ್ತಿದ್ದು, ಓಮೈಕ್ರಾನ್ ಹರಡುವಿಕೆ ತಡೆಗಟ್ಟಲು ಕೋವಿಡ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಸಲಹೆ ನೀಡಿದರು.

‘ಮಹಾರಾಷ್ಟ್ರದಲ್ಲಿ ಸಚಿವ ಸಂಪುಟದ ಸದಸ್ಯರು, ಶಾಸಕರಿಗೆ ಕೋವಿಡ್–19 ದೃಢಪಟ್ಟಿದೆ. ಇದನ್ನು ಗಮನದಲ್ಲಿರಿಸಿಕೊಂಡು ಜಿಲ್ಲೆಯಲ್ಲಿ ಸಾಧ್ಯವಾದಷ್ಟು ಒಳಾಂಗಣದಲ್ಲಿ ನಡೆಯುವ ಸಭೆ ಸಮಾರಂಭಗಳನ್ನು ಕಡಿಮೆಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು ಅವರಿಗೆ ಸೂಚಿಸಿದರು.

ಶಾಸಕ ಎಚ್.ಕೆ.ಪಾಟೀಲ ಮಾತನಾಡಿ, ‘ಲಸಿಕಾಕರಣದಲ್ಲಿ ಜಿಲ್ಲೆಯು ಉತ್ತಮ ಸಾಧನೆ ಮಾಡಿದೆ. ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ಶೇ 100ರಷ್ಟು ಸಾಧನೆ ಮಾಡಿದೆ. ಎರಡನೇ ಡೋಸ್ ಲಸಿಕೆ ನೀಡುವಲ್ಲಿ ಈಗಾಗಲೇ ಶೇ 80ರಷ್ಟು ಪ್ರಗತಿ ಸಾಧಿಸಲಾಗಿದೆ. ಅದನ್ನೂ ಶೀಘ್ರವಾಗಿ ಪೂರ್ಣಗೊಳಿಸಬೇಕು’ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಆದರ್ಶ ಶಿಕ್ಷಣ ಸಮಿತಿಯ ಅಧ್ಯಕ್ಷ ಆನಂದ ಪೊತ್ನೀಸ್, ಅಧ್ಯಕ್ಷ ಕೆ.ವಿ.ಕುಷ್ಟಗಿ, ಪ್ರಾಚಾರ್ಯರಾದ ಅಕ್ಷತಾ ಏಳೂರ, ನಗರಸಭಾ ಸದಸ್ಯ ಸುರೇಶ್ ಕಟ್ಟಿಮನಿ, ಡಿಡಿಪಿಐ ಬಸವಲಿಂಗಪ್ಪ ಜಿ.ಎಂ., ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಂ.ಕಾಂಬಳೆ ಇದ್ದರು.

ಎರಡು ಅಲೆಗಳಲ್ಲಿನ ಅನುಭವ ಹಾಗೂ ವೈಫಲ್ಯಗಳನ್ನು ಗಮನದಲ್ಲಿಟ್ಟುಕೊಂಡು ಮೂರನೇ ಅಲೆಯ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಸಿದ್ಧವಾಗಿಟ್ಟುಕೊಂಡು ಜೀವಹಾನಿ ತಪ್ಪಿಸಬೇಕು

ಎಚ್‌.ಕೆ.ಪಾಟೀಲ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT