ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಳ: ಪ್ರಯಾಣಿಕರ ಮೇಲೆ ನಿಗಾ ವಹಿಸಿ -ಡಿಸಿ ಸೂಚನೆ

Last Updated 30 ಜುಲೈ 2021, 16:07 IST
ಅಕ್ಷರ ಗಾತ್ರ

ಗದಗ: ‘ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪಕ್ಕದ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಜಿಲ್ಲೆಗೆ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸೋಂಕು ನಿಯಂತ್ರಣಕ್ಕೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಎಲ್ಲರೂ ಅನುಸರಿಸುವಂತೆ ಕ್ರಮ ಕೈಗೊಳ್ಳಬೇಕು. ಸಂಭವನೀಯ ಮೂರನೇ ಅಲೆ ಎದುರಾದಲ್ಲಿ ನಿರ್ವಹಣೆಗೆ ಅಗತ್ಯವಿರುವ ವೈದ್ಯಕೀಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಬೇಕು’ ಎಂದರು.

‘ಜಿಲ್ಲೆಯಲ್ಲಿ ವೈದ್ಯರ ಲಭ್ಯತೆ ಸಾಕಷ್ಟಿದ್ದು, ವೈದ್ಯಕೀಯ ಸಿಬ್ಬಂದಿಗೆ ಉತ್ತಮ ತರಬೇತಿ ನೀಡಿ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲು ಸನ್ನದ್ಧಗೊಳಿಸಬೇಕು. ತಾಲ್ಲೂಕು ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಮೂಲಸೌಕರ್ಯಗಳು ಲಭ್ಯವಿರುವಂತೆ ಕ್ರಮ ವಹಿಸಬೇಕು. ಈಗಾಗಲೇ ಪ್ರತಿ ತಾಲ್ಲೂಕು ಆಸ್ಪತ್ರೆಗಳಿಗೆ ಕನಿಷ್ಠ ಹತ್ತಕ್ಕೂ ಅಧಿಕ ಆಮ್ಲಜನಕ ಸಾಂದ್ರಕಗಳನ್ನು ವಿತರಿಸಲಾಗಿದೆ. ಜೊತೆಗೆ ಆಮ್ಲಜನಕ ಸಂಗ್ರಹಕ್ಕಾಗಿ ಸಿಲಿಂಡರ್‌ಗಳನ್ನು ಹಂಚಿಕೆ ಮಾಡಲಾಗಿದೆ’ ಎಂದು ತಿಳಿಸಿದರು.

ತಾಲ್ಲೂಕು ಆಸ್ಪತ್ರೆಗಳಲ್ಲಿನ ಆಮ್ಲಜನಕ ಸಿಲಿಂಡರ್‌ಗಳ ಮರುಭರ್ತಿ ಕುರಿತಂತೆ ಈಗಲೇ ಏಜೆನ್ಸಿಗಳನ್ನು ನೇಮಿಸಿಕೊಂಡು, ಒಪ್ಪಂದ ಮಾಡಿಟ್ಟುಕೊಳ್ಳಬೇಕು. ನರಗುಂದ ಹಾಗೂ ಜಿಮ್ಸ್‌ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಕಾರ್ಯಾರಂಭ ಮಾಡಲಿವೆ ಎಂದು ತಿಳಿಸಿದರು.

ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಎರಡು ಕೋವಿಡ್ ಆರೈಕೆ ಕೇಂದ್ರಗಳನ್ನು ಗುರುತಿಸಿಟ್ಟುಕೊಳ್ಳಬೇಕು. ಒಂದರಲ್ಲಿ ಕನಿಷ್ಠ 200 ಮಂದಿ ಸೋಂಕಿತರಿಗೆ ಹಾಗೂ ಮತ್ತೊಂದರಲ್ಲಿ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ಒದಗಿಸಲು ಅಗತ್ಯದ ಸಿದ್ಧತೆ ಮಾಡಿಟ್ಟುಕೊಳ್ಳಬೇಕು. ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ ಹತ್ತು ಬೆಡ್‌ಗಳನ್ನು ಸೋಂಕಿತ ಮಕ್ಕಳ ಚಿಕಿತ್ಸೆಗೆ ಮೀಸಲಿಡಬೇಕು. ಸೋಂಕಿತರಿಗೆ ಜಿಲ್ಲೆಯಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ಲಭ್ಯವಾಗುವಂತೆ ತಹಶೀಲ್ದಾರರು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗುರುಪ್ರಸಾದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ ಎ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಉಪನಿರ್ದೇಶಕ ಬಿರಾದಾರ, ನಗರಸಭೆ ಪೌರಾಯುಕ್ತ ರಮೇಶ ಜಾಧವ ಸೇರಿದಂತೆ ಆಯಾ ತಾಲ್ಲೂಕಿನ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

*
ಜಿಲ್ಲೆಯಲ್ಲಿ ಶೇ 40ರಷ್ಟು ಲಸಿಕಾಕರಣ ಪೂರ್ಣಗೊಳಿಸಲಾಗಿದ್ದು, ಎರಡನೇ ಡೋಸ್ ಲಸಿಕೆಯನ್ನು ಅರ್ಹರರಿಗೆ ಆದ್ಯತೆ ಮೇರೆಗೆ ನೀಡಲಾಗುತ್ತಿದೆ.
-ಡಾ.ಸತೀಶ್‌ ಬಸರಿಗಿಡದ, ಡಿಎಚ್‌ಒ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT