ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಿ

ತಾಲ್ಲೂಕುವಾರು ತಂಡ ರಚಿಸಿ ಕಾರ್ಯಾಚರಣೆ ಕೈಗೊಳ್ಳಲು ಡಿಸಿ ಸೂಚನೆ
Last Updated 21 ಏಪ್ರಿಲ್ 2021, 5:01 IST
ಅಕ್ಷರ ಗಾತ್ರ

ಗದಗ: ‘ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಬೇಕು. ಕೋವಿಡ್‌ ನಿಯಮಗಳನ್ನು ಉಲ್ಲಂಘಿಸುವ ಸಂಸ್ಥೆಗಳು, ವ್ಯಾಪಾರಸ್ಥರು, ಸಾರ್ವಜನಿಕರ ಮೇಲೆ ನಿರ್ದಾಕ್ಷಿಣ್ಯ ಕ್ರಮ
ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಪೊಲೀಸ್‌ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯ್ತಿ ಇಒಗಳ ಜತೆಗೆ ಮಂಗಳವಾರ ನಡೆಸಿದ ವಿಡಿಯೊ ಸಂವಾದದಲ್ಲಿ ಮಾತನಾಡಿದರು.

‘ತಾಲ್ಲೂಕುವಾರು ತಂಡಗಳನ್ನು ರಚಿಸಿ ಸೋಂಕು ನಿಯಂತ್ರಣಕ್ಕೆ ನಿಗಾ ವಹಿಸಬೇಕು. ತಹಶೀಲ್ದಾರರು, ಇಒ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೊಲೀಸ್‌ ಅಧಿಕಾರಿಗಳನ್ನು ಒಳಗೊಂಡ ತಂಡ ಕಾರ್ಯಾಚರಣೆ ಕೈಗೊಳ್ಳಬೇಕು. ಈ ವಿಷಯದಲ್ಲಿ ನಿಧಾನಗತಿ ಸಹಿಸಲಾಗುವುದಿಲ್ಲ. ಕೋವಿಡ್ ಕಾರ್ಯನಿರ್ವಹಣೆಯಲ್ಲಿ ಬೇಜವಾಬ್ದಾರಿ ಪ್ರದರ್ಶಿಸುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಹೆಚ್ಚು ಜನ ಸೇರುವ ಸ್ಥಳ ಹಾಗೂ ಮಾರುಕಟ್ಟೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘಿಸುವವರ ಮೇಲೆ ಪ್ರಕರಣ ದಾಖಲಿಸಿ, ದಂಡ ವಿಧಿಸಬೇಕು. ಜಿಲ್ಲೆಯಲ್ಲಿ ಜಾತ್ರೆ, ಉತ್ಸವ ನಡೆಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಡೆದಲ್ಲಿ ಆಯೋಜಕರ ಮೇಲೆ ಪ್ರಕರಣ ದಾಖಲಿಸಿ ದಂಡ ವಿಧಿಸಬೇಕು. ಮದುವೆ, ಜನ್ಮದಿನಾಚರಣೆ, ಅಂತ್ಯಕ್ರಿಯೆ ನಡೆಸಲು ನಿಯಮಾನುಸಾರ ಅವಕಾಶ ಒದಗಿಸಲಾಗಿದೆ. ಸರ್ಕಾರ ನಿಗದಿಗೊಳಿಸಿದ ಜನರ ಮಿತಿಗಿಂತ ಅಧಿಕ ಜನ ಸೇರಿದಲ್ಲಿ ಪ್ರಕರಣ ದಾಖಲಿಸಿ ದಂಡ ವಿಧಿಸುವುದು ಅನಿವಾರ್ಯ’ ಎಂದರು.

ವ್ಯಾಪಾರಸ್ಥರು ವ್ಯವಹರಿಸುವಾಗ ಗ್ರಾಹಕರಿಗೆ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಬೇಕು. ಅಂಗಡಿಯ ಮುಂಬಾಗಿಲಿಗೆ ‘ಮಾಸ್ಕ್ ಧರಿಸುವುದು ಕಡ್ಡಾಯ’ ಎಂಬ ಸೂಚನಾಫಲಕ ಅಳವಡಿಸಬೇಕು. ವಾಣಿಜ್ಯ ಸಂಕೀರ್ಣಗಳು, ಮಾರ್ಟ್‌ ಹಾಗೂ ಮಾರುಕಟ್ಟೆಗಳಲ್ಲಿ ವ್ಯಾಪಾರಸ್ಥರು ನಿಯಮ ಉಲ್ಲಂಘನೆ ಮಾಡಿದ್ದು ಕಂಡು ಬಂದಲ್ಲಿ ಶಿಕ್ಷೆಗೆ ಒಳಪಡಿಸಬೇಕು ಎಂದರು.

ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಪೌರಾಯುಕ್ತ ರಮೇಶ ಜಾಧವ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಪೊಲೀಸ್ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ್‌ ರೇವಣಕರ್‌ ಇದ್ದರು.

‘ಠಾಣೆಗೆ ಮಾಹಿತಿ ನೀಡಿ’

‘ತಹಶೀಲ್ದಾರ್‌ರು ಮದುವೆ ಸಮಾರಂಭಗಳಿಗೆ ಪರವಾನಗಿ ನೀಡಿದಲ್ಲಿ ಮಾಹಿತಿಯನ್ನು ಸಂಬಂಧಿಸಿದ ವ್ಯಾಪ್ತಿಯ ಪೊಲೀಸ್‌ ಠಾಣೆಗೆ ನೀಡಬೇಕು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದರು.

‘ಮದುವೆ ಸಮಾರಂಭಗಳು ನಡೆಯುವ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಕೋವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ನಿಗಾ ವಹಿಸಬೇಕು. ಸರ್ಕಾರಿ ನೌಕರರು ಹಾಗೂ ಪೊಲೀಸ್‌ ಅಧಿಕಾರಿಗಳು ಕಡ್ಡಾಯವಾಗಿ ನಿಯಮಾನುಸಾರ ಮಾಸ್ಕ್ ಧರಿಸಿ ಕರ್ತವ್ಯ ನಿರ್ವಹಿಸಬೇಕು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT