ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ತಡೆಗೆ ಜನಜಾಗೃತಿ ಮೂಡಿಸಿ

ಜಿಲ್ಲಾ ಮಟ್ಟದ ವಿಡಿಯೊ ಕಾನ್ಛರೆನ್ಸ್‌ನಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಸೂಚನೆ
Last Updated 6 ನವೆಂಬರ್ 2020, 16:30 IST
ಅಕ್ಷರ ಗಾತ್ರ

ಗದಗ: ‘ಕೋವಿಡ್ ನಿಯಂತ್ರಣ ಕುರಿತು ಜನಜಾಗೃತಿ ಮೂಡಿಸುವ ಮೂಲಕ ಸೋಂಕು ಹರಡುವಿಕೆ ಪ್ರಮಾಣ ತಡೆಯಲು ಅಧಿಕಾರಿಗಳು ಕ್ರಮವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಎಲ್ಲ ತಾಲ್ಲೂಕುಗಳ ತಹಶೀಲ್ದಾರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಕೃಷಿ, ಆರೋಗ್ಯ ಇಲಾಖೆ ಅಧಿಕಾರಿಗಳ ಜತೆಗಿನ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಅವರು ಮಾತನಾಡಿದರು.

‘ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ನಿಯಂತ್ರಣ ಮಾರ್ಗಸೂಚಿಗಳನ್ವಯ ಪ್ರತಿಯೊಬ್ಬರೂ ಮಾಸ್ಕ್‌ ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಬೇಕು. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಬೇಕು. ಆರೋಗ್ಯ ಇಲಾಖೆ ಇತರೆ ಇಲಾಖೆಗಳ ಜತೆಗೂಡಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಐಇಸಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ಜನರಿಗೆ ತಿಳಿವಳಿಕೆ ನೀಡಬೇಕು’ ಎಂದು ಹೇಳಿದರು.

‘ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಮಾಡಿ ಪರೀಕ್ಷಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ಹೋಂ ಕ್ವಾರಂಟೈನ್‌ನಲ್ಲಿ ಇರುವವರ ಮನೆಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ನಿಗಾವಹಿಸಬೇಕು. ಜಿಲ್ಲೆಯ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ 50 ಆಕ್ಸಿಜನ್ ಸಂಪರ್ಕದ ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು, ಸೋಂಕಿತರಿಗೆ ಅಲ್ಲಿಯೇ ಚಿಕಿತ್ಸೆ ನೀಡಬೇಕು’ ಎಂದು ತಿಳಿಸಿದರು.

‘ಕೃಷಿ, ತೋಟಗಾರಿಕೆ ಇಲಾಖೆಗಳು ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನಿಗಾವಹಿಸಬೇಕು. ರೈತರು ನಿಗದಿತ ಅವಧಿಯೊಳಗೆ ವಿಮೆ ಪಾವತಿಸಲು ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದು ಸೂಚಿಸಿದರು.

‘ಪ್ರಸಕ್ತ ಸಾಲಿನಲ್ಲಿ ಪ್ರವಾಹದಿಂದಾಗಿ ಹಾನಿಗೊಳಗಾದ ಮನೆ ಹಾಗೂ ಜನ, ಜಾನುವಾರುಗಳ ಸಮೀಕ್ಷೆ ಮಾಡುವುದರೊಂದಿಗೆ ಶೀಘ್ರ ಪರಿಹಾರ ಒದಗಿಸಲು ಕ್ರಮ ವಹಿಸಬೇಕು. ಕೃಷಿ ಇಲಾಖೆಯಿಂದ ನಡೆಯುತ್ತಿರುವ ಬೆಳೆ ಸಮೀಕ್ಷೆ ಕಾರ್ಯದಿಂದ ಜಿಲ್ಲೆಯ ಯಾವೊಬ್ಬ ರೈತರು ವಂಚಿತರಾಗದಂತೆ ನಿಗಾವಹಿಸಬೇಕು. ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಜಂಟಿ ಸಮೀಕ್ಷೆಯನ್ನು ನಿಗದಿತ ಅವಧಿಯೊಳಗೆ ಪರಿಹಾರ ಪೋರ್ಟಲ್‌ನಲ್ಲಿ ನೋಂದಾಯಿಸಬೇಕು’ ಎಂದು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್‌ ಕುಮಾರ ಎಂ., ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಸಭೆ ಪೌರಾಯುಕ್ತ ರಮೇಶ್ ಜಾಧವ, ಡಿಎಚ್‍ಒ ಡಾ.ಸತೀಶ ಬಸರೀಗಿಡದ ಇದ್ದರು.

ಮಾಹಿತಿ ಸಂಗ್ರಹಕ್ಕೆ ಸೂಚನೆ

‘ಕೋವಿಡ್-19ಗೆ ಲಸಿಕೆ ಬರುವುದರೊಳಗಾಗಿ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕೊರೊನಾ ವಾರಿಯರ್ಸ್‍, ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳ ಮಾಹಿತಿಯನ್ನು ಶೇಖರಿಸಲು ಜಿಲ್ಲಾ ಸಮೀಕ್ಷಣಾಧಿಕಾರಿಗಳಿಗೆ (ಆರ್‌ಸಿಎಚ್) ಸೂಚಿಸಲಾಗಿದೆ. ಈ ಕೆಲಸವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT