ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ಸಾವಿರ ಲಸಿಕೆ ಹಾಕುವ ಗುರಿ

ಕೋವಿಡ್ ಲಸಿಕೆ ಬೃಹತ್ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಸೂಚನೆ
Last Updated 17 ಸೆಪ್ಟೆಂಬರ್ 2021, 1:58 IST
ಅಕ್ಷರ ಗಾತ್ರ

ಗದಗ: ಜಿಲ್ಲೆಯಾದ್ಯಂತ ಸೆ.17ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಆರೋಗ್ಯ ಇಲಾಖೆಯು ವಿವಿಧ ಇಲಾಖೆಗಳ ಅಧಿಕಾರಿಗಳ ಸಹಕಾರದೊಂದಿಗೆ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜತೆಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ರಾಜ್ಯದೆಲ್ಲೆಡೆ ನಡೆಯುವ ಬೃಹತ್ ಲಸಿಕೆ ಅಭಿಯಾನದಲ್ಲಿ 30 ಲಕ್ಷ ಲಸಿಕೆ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಅದರಂತೆ ಗದಗ ಜಿಲ್ಲೆಯಲ್ಲಿಯೂ ಅಗತ್ಯದ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 50 ಸಾವಿರ ಲಸಿಕೆ ಹಾಕುವ ಗುರಿ ಹೊಂದಲಾಗಿದೆ’ ಎಂದು ಹೇಳಿದರು.

‘ದೇಶದಲ್ಲಿ ಉತ್ತರ ಪ್ರದೇಶದ ನಂತರ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕ ಪಾತ್ರವಾಗಿದೆ. ನವೆಂಬರ್ ಅಂತ್ಯದವರೆಗೆ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡು ಡೋಸ್‌ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯ ಪ್ರತಿ ತಾಲ್ಲೂಕಿಗೆ ಹಂಚಿಕೆ ಮಾಡಿರುವ ಲಸಿಕೆಯನ್ನು ಆ ದಿನವೇ ಸಂಪೂರ್ಣವಾಗಿ ಅರ್ಹರಿಗೆ ನೀಡಲು ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್. ಮಾತನಾಡಿ, ಗ್ರಾಮೀಣ ಭಾಗದಲ್ಲಿ ರೈತರು, ಕೂಲಿ ಕಾರ್ಮಿಕರು ಬೆಳಿಗ್ಗೆ ಕೆಲಸಕ್ಕೆ ಹೋಗುವುದರೊಳಗಾಗಿ ಲಸಿಕೆ ನೀಡಬೇಕು. ಸಂಜೆ ತಡವಾಗಿ ಮನೆಗೆ ಬರುವವರೆಗೂ ಕಾಯ್ದು ಲಸಿಕೆ ನೀಡಲು ಕ್ರಮ ವಹಿಸಬೇಕು. ಈ ಲಸಿಕಾ ಅಭಿಯಾನದ ಯಶಸ್ಸಿಗೆ ಸ್ತ್ರೀಶಕ್ತಿ ಗುಂಪುಗಳ ಸಹಕಾರ ಪಡೆದುಕೊಳ್ಳಬೇಕು. ಜತೆಗೆ ಆಶಾ, ಅಂಗನವಾಡಿ ಕಾರ್ಯಕರ್ತರನ್ನು ಬಳಸಿಕೊಳ್ಳಬೇಕು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್ ಕುಮಾರ್‌ ಎಂ. ಮಾತನಾಡಿ, ‘ಜಿಲ್ಲೆಯಲ್ಲಿ ಶಾಲಾ ತರಗತಿಗಳು ಆರಂಭವಾಗಿದ್ದು, ತರಗತಿಗೆ ಹಾಜರಾಗುವ ಮಕ್ಕಳ ಮೂಲಕ ಕೋವಿಡ್ ಲಸಿಕೆ ಪಡೆಯದ ಪಾಲಕರಿಗೆ ಪ್ರೇರೇಪಿಸಿ ಲಸಿಕೆ ನೀಡಬೇಕು’ ಎಂದು ಹೇಳಿದರು.

ಡಿಎಚ್‌ಒ ಡಾ. ಸತೀಶ ಬಸರಿಗಿಡದ, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಡಿಡಿಪಿಐ ಬಸವಲಿಂಗಪ್ಪ ಜಿ.ಎಂ., ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ.ಕರಿಗೌಡ್ರ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಜಗದೀಶ್ ನುಚ್ಚಿನ್, ಆರ್.ಸಿ.ಎಚ್ ಅಧಿಕಾರಿ ಡಾ.ಬಿ.ಎಂ ಗೋಜನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT