ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆ; ಬೇಜವಾಬ್ದಾರಿ ಬೇಡ

ಬಿಎಲ್‌ಒಗಳಿಗೆ ಜಿಲ್ಲಾ ಚುನಾವಣಾಧಿಕಾರಿ ವೈಶಾಲಿ ಕಟ್ಟುನಿಟ್ಟಿನ ಸೂಚನೆ
Published 22 ನವೆಂಬರ್ 2023, 15:57 IST
Last Updated 22 ನವೆಂಬರ್ 2023, 15:57 IST
ಅಕ್ಷರ ಗಾತ್ರ

ಗದಗ: ಗದಗ ವಿಧಾನಸಭಾ ಕ್ಷೇತ್ರದ ನಿಯೋಜಿತ ಬಿಎಲ್‌ಒಗಳು ಹಾಗೂ ಮೇಲ್ವಿಚಾರಕರು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮತ್ತು ಚುನಾವಣಾ ಕರ್ತವ್ಯದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಬೇಜವಾಬ್ದಾರಿಯಿಂದ ವರ್ತಿಸಿದಲ್ಲಿ ಶಿಸ್ತುಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ವೈಶಾಲಿ ಎಂ.ಎಲ್. ಎಚ್ಚರಿಕೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ 66-ಗದಗ ವಿಧಾನಸಭಾ ಮತಕ್ಷೇತ್ರದ ಎಲ್ಲ ಬಿಎಲ್‌ಒ ಹಾಗೂ ಮೇಲ್ವಿಚಾರಕರಿಗೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಕುರಿತಂತೆ ಬುಧವಾರ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯವು ಎಲ್ಲ ಬಿಎಲ್‌ಒಗಳ ಉತ್ತಮ ಕಾರ್ಯನಿರ್ವಹಣೆಯಿಂದ ಪೂರ್ಣಗೊಳ್ಳಬೇಕು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪಗಳಿಗೆ ಆಸ್ಪದ ನೀಡಬಾರದು’ ಎಂದು ತಿಳಿಸಿದರು.

‘ಮತದಾರರು ಮರಣ ಹೊಂದಿದ್ದಲ್ಲಿ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲು, ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಲು ನಮೂನೆ 8ರಲ್ಲಿ ಅರ್ಜಿ ಸ್ವೀಕರಿಸಿ, ಸರಿಪಡಿಸಬೇಕು. ದೋಷಮುಕ್ತ ಮತದಾರರ ಪಟ್ಟಿ ಸಿದ್ಧವಾಗುವಲ್ಲಿ ಬಿಎಲ್‌ಒಗಳ ಪಾತ್ರ ಪ್ರಮುಖವಾಗಿದೆ. 18 ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಬಿಎಲ್‌ಒಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಜಾಗರೂಕತೆಯಿಂದ ಮಾಡುವ ಮೂಲಕ ಚುನಾವಣಾ ಕಾರ್ಯ ಯಶಸ್ವಿಗೊಳಿಸಬೇಕು’ ಎಂದರು.

ಬಿಎಲ್‌ಒಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರತಿ ಮತದಾರರ ಮನೆಗಳಿಗೆ ಖುದ್ದಾಗಿ ತೆರಳಿ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ವ್ಯಕ್ತಿ ವಾಸಿಸುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಬೇರೆಡೆಯಿಂದ ಬಂದು ವಾಸಿಸುವವರ ಹೆಸರು ನಮೂನೆ 6ರಲ್ಲಿ ಅರ್ಜಿ ಸ್ವೀಕರಿಸಿ ನೋಂದಾಯಿಸಿಕೊಳ್ಳಬೇಕು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯವು ವಿಳಂಬ ಮಾಡದೇ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಬಿಎಲ್‌ಒ ಹಾಗೂ ಮೇಲ್ವಿಚಾರಕರಿಗೆ ನಡೆದ ತರಬೇತಿ ಸಂಧರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ತಹಶೀಲ್ದಾರ್‌ ಶ್ರೀನಿವಾಸಮೂರ್ತಿ ಕುಲಕರ್ಣಿ, ಶಿರಸ್ತೇದಾರ ಬಿ.ಎಸ್.ಕನ್ನೂರ ಸೇರಿದಂತೆ ಗದಗ ವಿಧಾನಸಭಾ ಕ್ಷೇತ್ರದ ಬಿಎಲ್‌ಒ ಹಾಗೂ ಮೇಲ್ವಿಚಾರಕರು ಇದ್ದರು.

Highlights - ಬೇಜವಾಬ್ದಾರಿಯಿಂದ ವರ್ತಿಸಿದರೆ ಶಿಸ್ತು ಕ್ರಮ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ: ಕಾಲಮಿತಿ ಒಳಗೆ ಪೂರ್ಣಗೊಳಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT