ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್- ಮಾರ್ಗಸೂಚಿ ಪಾಲನೆಗೆ ಸೂಚನೆ

ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸಭೆ
Last Updated 5 ಡಿಸೆಂಬರ್ 2020, 3:00 IST
ಅಕ್ಷರ ಗಾತ್ರ

ಗದಗ: ‘ಗ್ರಾಮ ಪಂಚಾಯ್ತಿ ಚುನಾವಣೆ ಘೋಷಣೆಯಾಗಿದ್ದು, ಮತದಾನ ಪ್ರಕ್ರಿಯೆ ಸಂದರ್ಭದಲ್ಲಿ ಕೋವಿಡ್-19 ನಿಯಂತ್ರಣ ಕ್ರಮಕ್ಕಾಗಿ ತಾಲ್ಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು
ಸೂಚಿಸಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ವಿಡಿಯೊ ಕಾನ್ಫರೆನ್ಸ್‌ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಡಿ.22 ಹಾಗೂ 27ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ಆರೋಗ್ಯ ತಪಾಸಣೆಗೆ ನಿಯೋಜಿಸಬೇಕು. ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯ್ತಿಗಳಲ್ಲಿ ಅಗತ್ಯದ ಸಿಬ್ಬಂದಿ ಹಾಗೂ ಪರಿಕರಗಳ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು ಎಂದು ಡಿಎಚ್‌ಒಗೆ’ ಸೂಚಿಸಿದರು.

‘ಸೋಂಕಿತರು ಹಾಗೂ ಶಂಕಿತರು ಮತದಾನ ಮಾಡಲು ಸಂಜೆ ಒಂದು ಗಂಟೆ ಸಮಯ ನಿಗದಿಪಡಿಸಲಾಗಿದೆ. ಈ ಸಂದರ್ಭದಲ್ಲಿ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿರುವ ಸೋಂಕಿತರನ್ನು ಗುರುತಿಸಬೇಕು. ಸುರಕ್ಷತಾ ಪರಿಕರಗಳೊಂದಿಗೆ ಅವರನ್ನು ಮತಗಟ್ಟೆಗೆ ಕರೆತಂದು ಮತದಾನ ಮಾಡಲು ಅವಕಾಶ ಕಲ್ಪಿಸಬೇಕು’ ಎಂದು ಹೇಳಿದರು.

‘ನಾಮಪತ್ರಗಳ ಸ್ವೀಕೃತಿಗಾಗಿ ಗ್ರಾಮ ಪಂಚಾಯ್ತಿಗಳಿಗೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಿ, ಈಗಾಗಲೇ ತರಬೇತಿ ನೀಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ನೇಮಿಸಲಾದ ಚುನಾವಣಾಧಿಕಾರಿಗಳಿಗೆ ಗ್ರಾಮ ಪಂಚಾಯ್ತಿಗಳಿಂದ ಅಗತ್ಯದ ಸೌಲಭ್ಯಗಳನ್ನು ಒದಗಿಸಬೇಕು. ಚುನಾವಣೆಗೆ ನಿಯೋಜಿಸಲಾದ ಅಧಿಕಾರಿಗಳು ಸಿಬ್ಬಂದಿ ಜತೆಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಚುನಾವಣೆ ಯಶಸ್ವಿಗೊಳಿಸಬೇಕು’ ಎಂದು ತಿಳಿಸಿದರು.

‘ಕೋವಿಡ್‌–19 ಸೋಂಕಿತರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕಿತರನ್ನು ಕೂಡಲೇ ಪತ್ತೆ ಮಾಡಿ ಪರೀಕ್ಷೆಗೆ ಒಳಪಡಿಸಬೇಕು. ತಾಲ್ಲೂಕು ಕೇಂದ್ರಗಳಲ್ಲಿ ಹೋಂ ಕ್ವಾರಂಟೈನ್‌ನಲ್ಲಿ ಇರುವವರ ಮೇಲೆ ನಿಗಾ ಇರಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಅಗತ್ಯದ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್‌ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ., ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರೀಗಿಡದ ಹಾಗೂ ಜಿಲ್ಲೆಯ ಎಲ್ಲ ತಹಶೀಲ್ದಾರರು ಸಭೆಯಲ್ಲಿ ಭಾಗವಹಿಸಿದ್ದರು.

‘ಕಂದಾಯ ಗ್ರಾಮಗಳ ಪಟ್ಟಿ ನೀಡಿ’

‘ಸಕಾಲ ಸಪ್ತಾಹ ಚಾಲ್ತಿಯಲ್ಲಿದ್ದು ಸಕಾಲದಡಿ ಸ್ವೀಕೃತವಾಗುವ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದರು.

‘ತಾಂತ್ರಿಕ ದೋಷಗಳಿದ್ದರೆ ಅವುಗಳನ್ನು ಕೂಡಲೇ ಸರಿಪಡಿಸಿಕೊಂಡು ಬಾಕಿ ಇರುವ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡಲು ಕ್ರಮ ವಹಿಸಬೇಕು. ಸ್ಮಶಾನ ಇಲ್ಲದ ಗ್ರಾಮಗಳ ಸಮೀಪದಲ್ಲಿರುವ ಸರ್ಕಾರಿ ಜಾಗ ಗುರುತಿಸಿ, ಅವುಗಳ ನಕ್ಷೆ ತಯಾರಿಸಿ ವರದಿ ನೀಡಬೇಕು. ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳನ್ನು ಗುರುತಿಸಿ ಅವುಗಳ ಪಟ್ಟಿ ನೀಡಬೇಕು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT