ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಅಪೌಷ್ಟಿಕತೆ ನೀಗಿಸಲು ಕ್ರಮ

ಪೋಷಣ ಅಭಿಯಾನ– ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ
Last Updated 28 ನವೆಂಬರ್ 2020, 4:36 IST
ಅಕ್ಷರ ಗಾತ್ರ

ಗದಗ: ‘ಪೋಷಣ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ತೂಕದ ಯಂತ್ರ ಹಾಗೂ ಎತ್ತರ ನೋಡುವ ಮಾಪನಗಳನ್ನು ಅಂಗನವಾಡಿ ಕೇಂದ್ರಗಳಿಗೆ ಒದಗಿಸಲಾಗಿದ್ದು, ಅದನ್ನು ಬಳಸಿ ಮಕ್ಕಳ ಪೌಷ್ಟಿಕ ಮಟ್ಟ ತಿಳಿದುಕೊಳ್ಳಬೇಕು’ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಚಿಕಿತ್ಸೆಗಾಗಿ ಗದಗ ಜಿಲ್ಲಾ ಆಸ್ಪತ್ರೆ, ನರಗುಂದ ಮತ್ತು ರೋಣ ತಾಲ್ಲೂಕು ಆಸ್ಪತ್ರೆಗಳಲ್ಲಿರುವ ಪೌಷ್ಟಿಕ ಆಹಾರ ಪುನರ್ವಸತಿ ಕೇಂದ್ರಗಳಿಗೆ ದಾಖಲಿಸಬೇಕು’ ಎಂದು ಸೂಚಿಸಿದರು.

‘ಕಷ್ಟದಲ್ಲಿರುವ ಮಹಿಳೆಯರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಸ್ವಾಧಾರ ಗೃಹವನ್ನು ಸೇವಾ ಸಂಸ್ಥೆಯ ನೆರವಿನೊಂದಿಗೆ ನಡೆಸಲಾಗುತ್ತಿದೆ. ಮಾನವ ಕಳ್ಳ ಸಾಗಣೆಗೆ ಒಳಗಾದ ಮಹಿಳೆಯರು ಮತ್ತು ಪೋಕ್ಸೊ ಸಂತ್ರಸ್ತರಿಗಾಗಿ ಇರುವ ಉಜ್ವಲ್ ಕೇಂದ್ರವು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಆರು ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ವಹಿಸಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಮೂರು ತಿಂಗಳ ಅವಧಿಯಲ್ಲಿ ಐದು ಬಾಲ್ಯ ವಿವಾಹಗಳನ್ನು ತಡೆಹಿಡಿಯಲಾಗಿದೆ’ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಬಾಲ್ಯ ವಿವಾಹ ನಡೆದರೆ ಕೂಡಲೇ ಎಫ್‌ಐಆರ್‌ ದಾಖಲು ಮಾಡಬೇಕು. ಪ್ರತಿ ತಾಲ್ಲೂಕು ಹಾಗೂ ಗ್ರಾಮ ಪಂಚಾಯ್ತಿಯಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಲಾಗಿದ್ದು, ಸಭೆಗಳನ್ನು ನಡೆಸಿ ಬಾಲ್ಯವಿವಾಹಗಳು ನಡೆಯದಂತೆ ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

‘ಕೋವಿಡ್-19ನಿಂದಾಗಿ ಮಾರ್ಚ್‌ 15ರಿಂದ ಅಂಗನವಾಡಿ ಕೇಂದ್ರಗಳನ್ನು ಮುಚ್ಚಲಾಗಿದೆ. ಮಕ್ಕಳು, ಗರ್ಭಿಣಿ ಮತ್ತು ಬಾಣಂತಿಯರಿಗೆ ಆಹಾರ ಪದಾರ್ಥಗಳನ್ನು ತಿಂಗಳಿಗೊಮ್ಮೆ ಅವರವರ ಮನೆಗೆ ವಿತರಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ, ಅಧಿಕಾರಿಗಳು, ಸಂಘ ಸಂಸ್ಥೆ ಹಾಗೂ ವಿವಿಧ ಸಮಿತಿಗಳ ಸದಸ್ಯರು ಇದ್ದರು.

ಆದ್ಯತೆ ಮೇರೆಗೆ ನಿವೇಶನ ಒದಗಿಸಲು ಕ್ರಮ

‘ಜಿಲ್ಲೆಯಲ್ಲಿ 1,166 ಅಂಗನವಾಡಿ ಕೇಂದ್ರಗಳಿದ್ದು, ಅದರಲ್ಲಿ 872 ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡದಲ್ಲಿ ನಡೆಯುತ್ತಿವೆ. ಉಳಿದ ಕೇಂದ್ರಗಳು ಸಮುದಾಯ ಮತ್ತು ಬಾಡಿಗೆ ಕಟ್ಟಡದಲ್ಲಿವೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ತಿಳಿಸಿದರು.

‘ಅಂಗನವಾಡಿ ಕೇಂದ್ರಗಳಿಗೆ ಆದ್ಯತೆ ಮೇರೆಗೆ ನಿವೇಶನಗಳನ್ನು ಒದಗಿಸಲಾಗುವುದು. ಶೌಚಾಲಯ ಮತ್ತು ಕುಡಿಯುವ ನೀರಿನ ಸೌಲಭ್ಯ ಇಲ್ಲದ ಅಂಗನವಾಡಿ ಕೇಂದ್ರಗಳಿಗೆ ಸ್ವಚ್ಛ ಭಾರತ್‌ ಮಿಷನ್ ಹಾಗೂ ಜಲ ಜೀವನ ಮಿಷನ್ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಕ್ರಮ ವಹಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT