ಸೋಮವಾರ, ಮೇ 23, 2022
27 °C
ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು

ಸುಗಮ ‘ಪರೀಕ್ಷೆ’ಗೆ ಸಮನ್ವಯ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ‘ಜುಲೈ 19 ಮತ್ತು 22ರಂದು ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಕೋವಿಡ್ ಮಾರ್ಗಸೂಚಿಗಳ ಅನ್ವಯ ನಡೆಸಲು ಅಗತ್ಯದ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಒಟ್ಟು 103 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷೆಯ ಮುನ್ನಾ ದಿನದಂದು ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸ್‌ ಮಾಡಿಸಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿತಗೊಳ್ಳುವ ಎಲ್ಲ ಸಿಬ್ಬಂದಿಯೂ ಕೋವಿಡ್–19 ಲಸಿಕೆ ಹಾಕಿಸಿಕೊಳ್ಳುವಂತೆ ಕ್ರಮ ವಹಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಶಂಕಿತ ಹಾಗೂ ಸೋಂಕಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪ್ರತ್ಯೇಕ ಎರಡು ಕೊಠಡಿಗಳನ್ನು ಮೀಸಲಿಡಬೇಕು’ ಎಂದು ಸೂಚಿಸಿದರು.

‘ಸೋಂಕು ತಗುಲಿದ ವಿದ್ಯಾರ್ಥಿಗಳನ್ನು ಆಂಬುಲೆನ್ಸ್‌ ಮೂಲಕ ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಕರೆತಂದು ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಪರೀಕ್ಷಾ ಕೇಂದ್ರಗಳಿಗೆ ಬರುವ ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಪರೀಕ್ಷೆ ಕಾರ್ಯಕ್ಕೆ ನಿಯೋಜಿಸಲಾದ ಎಲ್ಲ ಸಿಬ್ಬಂದಿ ಮಾಸ್ಕ್‌ ಧರಿಸುವುದು ಕಡ್ಡಾಯ’ ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯದೊಳಗೆ ಪ್ರಶ್ನೆಪತ್ರಿಕೆಗಳನ್ನು ತಲುಪಿಸಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆ ಸಮಯಕ್ಕೆ ಹಾಜರಾಗಲು ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೆಚ್ಚಿನ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

‘ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ಜನದಟ್ಟಣೆ ಆಗುವುದನ್ನು ತಡೆಯಲು ಪೊಲೀಸ್‌ ಬಂದೋಬಸ್ತ್‌ ಹಾಕಬೇಕು. ಪರೀಕ್ಷಾ ಕೇಂದ್ರದಿಂದ 200 ಮೀ. ದೂರದಲ್ಲಿಯೇ ವಾಹನಗಳನ್ನು ನಿಲ್ಲಿಸುವ ವ್ಯವಸ್ಥೆ ಹಾಗೂ ಪರೀಕ್ಷೆ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆಯವರು ಕೇಂದ್ರದೊಳಕ್ಕೆ ಪ್ರವೇಶಿಸದಂತೆ ಕ್ರಮವಹಿಸಬೇಕು’ ಎಂದು ಪೊಲೀಸ್‌ ಇಲಾಖೆಗೆ ಸೂಚಿಸಿದರು.

ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಪರೀಕ್ಷೆ ಸಂದರ್ಭದಲ್ಲಿ ಲೋಪಗಳಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ಎನ್., ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್ ಕುಮಾರ್‌ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಡಿಎಚ್‌ಒ ಡಾ.ಸತೀಶ ಬಸರಿಗಿಡದ ಇದ್ದರು.

___

ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲ ಸಿದ್ಧತೆಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಬರೆಯಬಹುದು

ಬಸವಲಿಂಗಪ್ಪ ಜಿ.ಎಂ., ಡಿಡಿಪಿಐ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.