ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗದಗ | ಕುಸುಬೆ ಖರೀದಿಗೆ ಬೆಂಬಲ ಬೆಲೆ ನಿಗದಿ

ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಕುಸುಬೆ ಖರೀದಿ: ಡಿಸಿ
Published 4 ಜುಲೈ 2024, 14:21 IST
Last Updated 4 ಜುಲೈ 2024, 14:21 IST
ಅಕ್ಷರ ಗಾತ್ರ

ಗದಗ: ‘2023-24ನೇ ಸಾಲಿನ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರೈತರಿಂದ ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ 2023-24ನೇ ಸಾಲಿನ ಹಿಂಗಾರು ಹಂಗಾಮಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಕುಸುಬೆ ಹುಟ್ಟುವಳಿ ಖರೀದಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಸರ್ಕಾರದ ಮಾನದಂಡಗಳ ಅನ್ವಯ ಎಫ್‌ಎಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮವಹಿಸಬೇಕು. ಖರೀದಿ ಏಜೆನ್ಸಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್‌ಗಳನ್ನು ನೇಮಿಸಬೇಕು. ಜಿಲ್ಲೆಯ ಪ್ರತಿ ರೈತರಿಂದ ಎಕರೆಗೆ 5 ಕ್ವಿಂಟಲ್‌ನಂತೆ ಗರಿಷ್ಠ 15 ಕ್ವಿಂಟಲ್ ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಖರೀದಿಸಬಹುದು. ಖರೀದಿ ಸಂಸ್ಥೆಗಳು ಯಾವುದೇ ರೀತಿಯಲ್ಲಿ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು’ ಎಂದು ಸೂಚಿಸಿದರು.

‘ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಹುಟ್ಟುವಳಿಗೆ ಪ್ರತಿ ಕ್ವಿಂಟಲ್‍ಗೆ ₹5,800 ಬೆಲೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶ 1-7-2024ರ ಅನುಸಾರ ನ್ಯಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಮತ್ತು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ನೇಮಿಸಿದೆ. ರೈತರು ನೋಂದಣಿ ಕಾಲಾವಧಿಯನ್ನು ಆದೇಶದ ದಿನಾಂಕದಿಂದ 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ನಡೆಸಲಾಗುವುದು’ ಎಂದು ಕೃಷಿ ಮಾರಾಟ ಇಲಾಖೆ ಅಧಿಕಾರಿಗಳು ತಿಳಿಸಿದರು.

ಜಿಲ್ಲೆಯ 10 ಕಡೆ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು.  

ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರಿ ಸಂಘಗಳ ಇಲಾಖೆಯ ಕೆ.ಓ.ಎಫ್. ವ್ಯವಸ್ಥಾಪಕರು ಇದ್ದರು.

ಕುಸುಬೆ ಖರೀದಿ ಕೇಂದ್ರಗಳ ವಿವರ

ಗದಗ ತಾಲ್ಲೂಕು- ಬಳಗಾನೂರ ಹೊಂಬಳ ಮುಳಗುಂದ; ಶಿರಹಟ್ಟಿ ತಾಲ್ಲೂಕು- ರಣತೂರ ಮಾಗಡಿ ರೋಣ ತಾಲ್ಲೂಕು- ಅಬ್ಬಿಗೇರಿ ಸೂಡಿ ನಿಡಗುಂದಿ; ಮುಂಡರಗಿ- ಬರದೂರ; ನರಗುಂದ- ಕಣಕಿಕೊಪ್ಪ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT