ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಆರೋಗ್ಯ ತಪಾಸಣೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಸೂಚನೆ

ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿರುವ 14 ಸಾವಿರ ಮಕ್ಕಳು
Last Updated 16 ಜುಲೈ 2021, 5:36 IST
ಅಕ್ಷರ ಗಾತ್ರ

ಗದಗ: ‘ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 243 ಮಕ್ಕಳ ಆರೋಗ್ಯದ ಕಾಳಜಿ ವಹಿಸಲಾಗಿದ್ದು, ಈಗ ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿರುವ 14,000 ಮಕ್ಕಳ ಆರೋಗ್ಯ ತಪಾಸಣೆಗೆ ಕ್ರಮವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆಗೆ ನಡೆದ ವಿಡಿಯೊ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸಾಧಾರಣ ಅಪೌಷ್ಟಿತೆಯಿಂದ ಬಳಲುತ್ತಿರುವ ಮಕ್ಕಳನ್ನು ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಬೇಕು. ಮಕ್ಕಳನ್ನು ಅಲ್ಲಿಗೆ ಕರೆತರುವ ಜವಾಬ್ದಾರಿಯನ್ನು ಅಂಗನವಾಡಿ ಕಾರ್ಯಕರ್ತೆಯರು ನಿಭಾಯಿಸಬೇಕು. ಇದೇ ಮಾದರಿಯಲ್ಲಿ ಪ್ರಮುಖ ಗ್ರಾಮಗಳಲ್ಲಿ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಬೇಕು. ಶಿಬಿರ ನಡೆಸುವ ಕುರಿತು ಮಕ್ಕಳ ಪೋಷಕರಿಗೆ ಮೊದಲೇ ಮಾಹಿತಿ ನೀಡಬೇಕು. ಈ ಪ್ರಕ್ರಿಯೆ ಸರಾಗವಾಗಿ ನಡೆಯಲು ತಾಲ್ಲೂಕು ಆಡಳಿತ ಸೂಕ್ತ ಯೋಜನೆ ರೂಪಿಸಬೇಕು’ ಎಂದು ನಿರ್ದೇಶನ ನೀಡಿದರು.

‘ತೀವ್ರ ಆರೋಗ್ಯ ಸಮಸ್ಯೆ ಹೊಂದಿರುವ ಮಕ್ಕಳನ್ನು ತಾಲ್ಲೂಕು ಆಸ್ಪತ್ರೆಗಳಿಗೆ ದಾಖಲು ಮಾಡಬೇಕು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಪ್ರತಿ ತಾಲ್ಲೂಕಿನಲ್ಲಿ ಆರೋಗ್ಯ ತಪಾಸಣೆ ನಡೆಸುವ ಸ್ಥಳ, ದಿನಾಂಕ ಮುಂತಾದ ವಿವರಗಳ ಚಾರ್ಟ್‌ ತಯಾರಿಸಿ ಈ ಕೆಲಸವನ್ನು ಸುಗಮಗೊಳಿಸಬೇಕು’ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ. ಮಾತನಾಡಿ, ‘ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ 14,000 ಮಕ್ಕಳು ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಸುಧಾರಣಾ ಶಿಬಿರ ಹಮ್ಮಿಕೊಂಡಿದ್ದು ಪೌಷ್ಟಿಕ ಆಹಾರ, ಔಷಧೋಪಚಾರ, ತಜ್ಞರಿಂದ ಪಾಲಕರಿಗೆ ಆಪ್ತ ಸಮಾಲೋಚನೆ, ದಾನಿಗಳಿಂದ ವಿವಿಧ ಪೌಷ್ಟಿಕ ಆಹಾರವನ್ನು ವಿತರಿಸಲಾಗುತ್ತಿದೆ’ ಎಂದು ತಿಳಿಸಿದರು.

ಡಿಎಚ್‌ಒ ಡಾ. ಸತೀಶ್‌ ಬಸರಿಗಿಡದ, ಆರ್.ಸಿ.ಎಚ್. ಅಧಿಕಾರಿ ಡಾ.ಬಿ.ಎಂ.ಗೊಜನೂರ, ನಗರಸಭೆ ಪೌರಾಯುಕ್ತ ರಮೇಶ ಜಾಧವ, ಟಿಎಚ್‌ಒಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇದ್ದರು.

ಎರಡನೇ ಸುತ್ತು ಶೀಘ್ರ ಆರಂಭ

‘ಕೋವಿಡ್-19 ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ತೀವ್ರ ಮತ್ತು ಸಾಧಾರಣ ಅಪೌಷ್ಟಿಕ ಮಕ್ಕಳ ಪಾಲಕರಿಗೆ ಆದ್ಯತೆ ಮೇರೆಗೆ ಕೋವಿಡ್–19 ಲಸಿಕೆ ಹಾಕಿಸಲು ಕ್ರಮವಹಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ. ಹೇಳಿದರು.

‘ಶಿಬಿರದಲ್ಲಿ ಪ್ರತಿನಿತ್ಯ ಮಕ್ಕಳ ಆರೋಗ್ಯ ತಪಾಸಣೆ, ಪೌಷ್ಟಿಕ ಆಹಾರ ತಯಾರಿಕಾ ಪ್ರಾತ್ಯಕ್ಷಿಕೆ ನಡೆಸಲಾಗುತ್ತಿದೆ. ಮೊದಲ ಸುತ್ತಿನ ಆರೋಗ್ಯ ತಪಾಸಣೆ ಪೂರ್ಣಗೊಂಡ ನಂತರ ಕೇಂದ್ರಗಳಿಗೆ ಸ್ಯಾನಿಟೈಸ್‌ ಮಾಡಿಸಿ, ಎರಡನೇ ಸುತ್ತಿನ ಆರೋಗ್ಯ ತಪಾಸಣೆ ಶಿಬಿರ ಆರಂಭಿಸಲಾಗುವುದು’ ಎಂದು ತಿಳಿಸಿದರು.

***

18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕುವ ಪ್ರಕ್ರಿಯೆ ಆರಂಭಗೊಂಡಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯಬೇಕು

- ಎಂ.ಸುಂದರೇಶ್‌ ಬಾಬು, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT