ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುಗ್ರೀವಾಜ್ಞೆ ಹಿಂಪಡೆಯದಿದ್ದರೆ ಉಗ್ರ ಹೋರಾಟ’

ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ: ಹೆದ್ದಾರಿ ತಡೆದು ಬೃಹತ್‌ ಪ್ರತಿಭಟನೆ
Last Updated 25 ಸೆಪ್ಟೆಂಬರ್ 2020, 16:17 IST
ಅಕ್ಷರ ಗಾತ್ರ

ಗದಗ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಚೆಗೆ ಹೊರಡಿಸಿರುವ ಸುಗ್ರೀವಾಜ್ಞೆಗಳು ಮತ್ತು ರೂಪಿಸಿರುವ ಮಸೂದೆಗಳು ರೈತರಿಗೆ ಮರಣ ಶಾಸನವಿದ್ದಂತೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಸಾಬಳೆ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಗದಗ ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ರೈತ ಸಂಘದ ಸದಸ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಅಲ್ಲಿಂದ ಜಾಥಾ ಮೂಲಕ ಟಿಪ್ಪು ವೃತ್ತದವರೆಗೆ ಸಾಗಿದ ಪ್ರತಿಭಟನಕಾರರು, ಹೆದ್ದಾರಿ ತಡೆದು ‍ಪ್ರತಿಭಟಿಸಿದರು.

‘ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತರಬಾರದು ಎಂದು ಇಡೀ ದೇಶದ ರೈತರೆಲ್ಲರೂ ಪ್ರತಿಭಟನೆ ನಡೆಸಿದರು. ಆದರೆ, ರೈತನೇ ದೇಶದ ಬೆನ್ನೆಲುಬು ಎಂದು ಹೇಳುವ ಬಿಜೆಪಿ ಸರ್ಕಾರ ನಮ್ಮ ವಿರೋಧದ ನಡುವೆಯೂ ಸುಗ್ರೀವಾಜ್ಞೆ ಮೂಲಕ ಮಸೂದೆ ರೂಪಿಸಿರುವುದರ ಹಿಂದೆ ದೊಡ್ಡ ಹುನ್ನಾರ ಅಡಗಿದೆ. ಕಾರ್ಪೊರೇಟ್‌ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಅವರ ಉದ್ದೇಶ ಸ್ಪಷ್ಟವಾಗಿದೆ. ರೈತರಿಗೆ ಮಾರಕವಾಗಿರುವ ತಿದ್ದುಪಡಿಗಳನ್ನು ರದ್ದುಗೊಳಿಸಬೇಕು’ ಎಂದು ಬಸವರಾಜ ಸಾಬಳೆ ಆಗ್ರಹಿಸಿದರು.

‘ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಒಬ್ಬ ವ್ಯಕ್ತಿ 400 ಎಕರೆ ಜಮೀನು ಖರೀದಿಸುವ ಅವಕಾಶ ನೀಡಲಾಗಿದೆ. ಇಂತಹ ರೈತ ವಿರೋಧಿ ಕಾನೂನನ್ನು ಒಂದು ತಿಂಗಳೊಳಗೆ ಹಿಂಪಡೆಯದಿದ್ದರೆ ಮತ್ತೆ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದ ಅವರು, ಕಳಸಾ ಬಂಡೂರಿ ಯೋಜನೆಯ ಕಾಮಗಾರಿಯನ್ನು ಆದಷ್ಟು ಬೇಗನೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಗದಗ ಜಿಲ್ಲಾ ರೈತ ಸಂಘದ ಸದಸ್ಯರಿಂದ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು, ‘ರೈತರ ಬೇಡಿಕೆ ಮತ್ತು ಒತ್ತಾಯಗಳನ್ನು ಸರ್ಕಾರಕ್ಕೆ ಮುಟ್ಟಿಸಲಾಗುವುದು. ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣಗೊಳಿಸುವುದರಿಂದ ರೈತರಿಗೆ ಆಗುವ ತೊಂದರೆಗಳ ಬಗ್ಗೆಯೂ ಮನವರಿಕೆ ಮಾಡಿಕೊಡಲಾಗುವುದು’ ಎಂದು ಅವರು ಭರವಸೆ ನೀಡಿದರು.

ಪ್ರತಿಭಟನಕಾರರು ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು. ಪೊಲೀಸರು ಮೊದಲೇ ಯೋಜಿಸಿದ್ದರಿಂದ ಪ್ರತಿಭಟನೆ ಸಂದರ್ಭದಲ್ಲಿ ಸಂಚಾರ ದಟ್ಟಣೆ ಉಂಟಾಗಲಿಲ್ಲ. ಪ್ರತಿಭಟನೆಯಲ್ಲಿ ನೂರಾರು ರೈತರು ಪಾಲ್ಗೊಂಡಿದ್ದರು.

‘ಬಿಎಸ್‌ವೈ ರಾಜೀನಾಮೆ ನೀಡಲಿ’

‘ಪ್ರಧಾನಮಂತ್ರಿ ಮೋದಿ ಅವರು ರೈತರ ಬದುಕನ್ನು ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿಸುತ್ತಿದ್ದಾರೆ. ರೈತರು ಬೆಳೆದ ಬೆಳೆಗಳೆಲ್ಲವೂ ಹಾಳಾಗಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರೈತರ ಗೋಳು ಕೇಳುವವರೇ ಇಲ್ಲವಾಗಿದೆ. ರೈತರಿಗೆ ಒಳ್ಳೆಯದು ಮಾಡುತ್ತೇನೆ ಎಂದು ಹೇಳುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಬಸವರಾಜ ಸಾಬಳೆ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT