ಮುಂಡರಗಿ: ಖಾಸಗಿ ಕಂಪನಿಯವರು ಪೂರೈಸಿದ ಸೂರ್ಯಕಾಂತಿ ಬಿತ್ತನೆ ಬೀಜ ಬಿತ್ತಿ ಬೆಳೆ ನಷ್ಟ ಅನುಭವಿಸಿದ ತಾಲ್ಲೂಕಿನ ಎಲ್ಲ ರೈತರಿಗೆ ಸರ್ಕಾರ ಈವರೆಗೂ ಪರಿಹಾರ ವಿತರಿಸಿಲ್ಲ. ಇದರಿಂದಾಗಿ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು, ತಕ್ಷಣ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ರೈತರಿಗೆ ಸೂಕ್ತ ಪರಿಹಾರ ಮಂಜೂರು ಮಾಡಬೇಕು ಎಂದು ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಇಟಗಿ ಒತ್ತಾಯಿಸಿದ್ದಾರೆ.
ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರ್ಕಾರ ಜು.15ರೊಳಗಾಗಿ ಅಗತ್ಯ ಪರಿಹಾರ ನೀಡಬೇಕು. ಇಲ್ಲದಿದ್ದರೆ ಜು.17ರಂದು ಮುಂಡರಗಿ ಬಂದ್‍ಗೆ ಕರೆ ನೀಡಿ ತಹಶೀಲ್ದಾರ್ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಕಳಪೆ ಬಿತ್ತನೆ ಬೀಜ ಪೂರೈಸಿರುವುದನ್ನು ವಿರೋಧಿಸಿ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರು ಈಗಾಗಲೆ ತಹಶೀಲ್ದಾರ್ ಕಾರ್ಯಾಲಯ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯಗಳ ಮುಂದೆ ಹಲವು ಬಾರಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು 'ಕೃಷಿ ವಿಜ್ಞಾನಿಗಳ ವರದಿ ಬಂದ ನಂತರ ಪರಿಹಾರ ನೀಡಲಾಗುವುದು' ಎಂದು ಭರವಸೆ ನೀಡಿದ್ದರು. ಆದರೆ ಈವರೆಗೂ ಯಾವುದೆ ಕ್ರಮ ಕೈಗೊಳ್ಳದಿರುವುದು ಅಕ್ಷಮ್ಯ ಎಂದು ತಿಳಿಸಿದ್ದಾರೆ.
ಕೃಷಿ ವಿಜ್ಞಾನಿಗಳು ಈಗಾಗಲೆ ತಾಲ್ಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿ ಬೆಳೆಯನ್ನು ಪರಿಶೀಲಿಸಿ ಹೋಗಿದ್ದಾರೆ. ಅದರ ವರದಿ ನೀಡಲು ಏಕೆ ತಡವಾಗುತ್ತಿದೆ ಎನ್ನುವುದು ರೈತರಿಗೆ ತಿಳಿಯದಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ವಿಜ್ಞಾನಿಗಳ ವರದಿಯನ್ನು ತರಿಸಿಕೊಂಡು ಪ್ರತಿ ಎಕರೆಗೆ ₹ 80 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸಕಾಲದಲ್ಲಿ ಬೆಳೆನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡದಿದ್ದರೆ ಪಟ್ಟಣದ ಅಂಗಡಿ, ಮುಗ್ಗಟ್ಟು ಮೊದಲಾದವುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ತಹಶೀಲ್ದಾರ್ ಕಾರ್ಯಾಲಯದ ಮುಂದೆ ಅಹೋರಾತ್ರಿ ಧರಣಿ ಕೈಗೊಳ್ಳಲಾಗುವುದು. ಈ ಸಂದರ್ಭದಲ್ಲಿ ಯಾವುದಾದರೂ ಅಹಿತಕರ ಘಟನೆ ಸಂಭವಿಸಿದ್ದಲ್ಲಿ ಅದಕ್ಕೆ ಸರ್ಕಾರವೆ ಹೊಣೆಯಾಗುತ್ತದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.