ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮರ್ಥ್ಯ ಅರಿತು ಒತ್ತಡ ನಿಭಾಯಿಸಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ: ಜಿಲ್ಲಾ ನ್ಯಾಯಾಧೀಶ ಆರ್.ವಿ.ಪಾಟೀಲ ಅಭಿಮತ
Last Updated 13 ಅಕ್ಟೋಬರ್ 2020, 2:40 IST
ಅಕ್ಷರ ಗಾತ್ರ

ಗದಗ: ‘ಪ್ರತಿಯೊಬ್ಬರೂ ಮಾನಸಿಕ ಸಮತೋಲನ ಕಾಯ್ದುಕೊಳ್ಳುವ ಮೂಲಕ ಆರೋಗ್ಯವಂತ ಜೀವನ ನಡೆಸಬೇಕು. ವ್ಯಕ್ತಿ ತನ್ನ ಸಾಮರ್ಥ್ಯಗಳನ್ನು ಅರಿತುಕೊಂಡು ಜೀವನದ ಸಾಮಾನ್ಯ ಒತ್ತಡಗಳನ್ನು ನಿಭಾಯಿಸಬೇಕು’ ಎಂದು ಪ್ರಧಾನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ವಿ.ಪಾಟೀಲ ಹೇಳಿದರು.

ಗದಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮಾನಸಿಕ ಅಸ್ವಸ್ಥತೆಯಿಂದ ಬಳಲುವವವರು ಸಾಮಾಜಿಕ, ಆರ್ಥಿಕ ಹಾಗೂ ಔದ್ಯೋಗಿಕವಾಗಿ ಹಿನ್ನಡೆ ಅನುಭವಿಸುತ್ತಾರೆ. ಹೀಗಾಗಿ ಮಾನಸಿಕ ಸಮಸ್ಯೆ ಇರುವ ವ್ಯಕ್ತಿಗಳು ಸಕಾಲಕ್ಕೆ ಚಿಕಿತ್ಸೆ ಪಡೆದುಕೊಳ್ಳಬೇಕು. ಈ ಬಗ್ಗೆ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

‘ಮಾನಸಿಕ ರೋಗಿಗಳಿಗೆ ಮಾನಸಿಕ ಹಿಂಸೆ ನೀಡಬಾರದು. ಅವರೊಂದಿಗೆ ಕ್ರೂರವಾಗಿ ವರ್ತಿಸಬಾರದು. ಈ ರೀತಿ ನಡೆದುಕೊಂಡಲ್ಲಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ಸರ್ಕಾರ ಮಾನಸಿಕವಾಗಿ ಅಸ್ವಸ್ಥಗೊಂಡಿರುವವರ ಬಗ್ಗೆ ನಿಗಾವಹಿಸಿದ್ದು, ಚಿಕಿತ್ಸೆಗಾಗಿ ಸಾಕಷ್ಟು ಹಣ ವ್ಯಯಿಸುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಅವರು ಹೇಳಿದರು.

ಮಾನಸಿಕ ಅಸ್ವಸ್ಥರ ಬಗ್ಗೆ ಕಾನೂನು ವಿಶೇಷ ಕಾಳಜಿ ವಹಿಸಿದ್ದು, ಅಂತವರನ್ನು ಪತ್ತೆ ಹಚ್ಚಿ ಪುನರ್ವಸತಿ ಕಲ್ಪಿಸುವ ಗುರುತರ ಜವಾಬ್ದಾರಿ ಕಾನೂನು ಸೇವೆಗಳ ಪ್ರಾಧಿಕಾರಕ್ಕಿದೆ. ಮಾನಸಿಕ ರೋಗದ ವಿರುದ್ಧ ಒಟ್ಟಾಗಿ ಹೋರಾಡುವ ಮೂಲಕ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಎಂ.ವಿ.ನರಸಿಂಹಸಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ, ಜೆಎಂಎಫ್‌ಸಿ ಮಹಾದೇವಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ ಬಸರೀಗಿಡದ, ಮಾನಸಿಕ ಆರೋಗ್ಯಾಧಿಕಾರಿ ಸೋಮಶೇಖರ ಬಿಜ್ಜಳ, ಮನೋರೋಗ ತಜ್ಞ ಡಾ.ತಾರಾಚಂದ ನಾಯ್ಕ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೈ.ಕೆ.ಭಜಂತ್ರಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ವಕೀಲ ಸಂಘದ ಪದಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾಣ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಪುಷ್ಪಾ ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT