ಶನಿವಾರ, ಫೆಬ್ರವರಿ 4, 2023
18 °C
ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಖಡಕ್‌ ಸೂಚನೆ

ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಬನ್ನಿ: ಸಚಿವ ಬಿ.ಸಿ.ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ‘ಅಧಿಕಾರಿಗಳು ಸಭೆಗೆ ಹಾಜರಾಗುವ ಮುನ್ನ ತಮ್ಮ ಇಲಾಖೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ಹೊಂದಿರಬೇಕು. ಸಿದ್ಧತೆ ಇಲ್ಲದೇ ಕಾಟಾಚಾರಕ್ಕೆ ಸಭೆಗೆ ಬಂದು ಹೋಗುವುದು ವೃತ್ತಿಗೆ ಮಾಡುವ ದ್ರೋಹ. ಸರ್ಕಾರ ಕೊಡುವ ಸಂಬಳಕ್ಕೆ ಶ್ರದ್ಧೆಯಿಂದ ಕೆಲಸ ಮಾಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವರ ಈ ಮಾತಿಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಕೂಡ ಧ್ವನಿಗೂಡಿಸಿದರು.

‘ಸಭೆ ನಡೆಯುವುದಕ್ಕೂ ಏಳು ದಿನದ ಮುಂಚೆಯೇ ನೋಟಿಸ್‌ ನೀಡಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಅಧಿಕಾರಿಗಳ ಜತೆಗೆ ಚರ್ಚೆ ಮಾಡಿ ಮಾಹಿತಿ ತಿಳಿದುಕೊಂಡು ಸಭೆಗೆ ಬರಬೇಕಿತ್ತು. ಅದು ಬಿಟ್ಟು ಕಡತ ಹಿಡಿದುಕೊಂಡು ಸಭೆಗೆ ಬಂದು ಮಾಹಿತಿ ಕೇಳಿದಾಗ, ಎಲ್ಲಿದೆ ಎಂದು ಹುಡುಕಾಡುವುದು ಸರಿಯಲ್ಲ. ಸರ್ಕಾರ ಸಂಬಳ ಕೊಡುತ್ತದೆ. ಅದಕ್ಕೆ ಸರಿಯಾಗಿ ಕೆಲಸ ಮಾಡಬೇಕು. ಜನರ ತೆರಿಗೆಯ ಹಣಕ್ಕೆ ನ್ಯಾಯ ಒದಗಿಸಬೇಕು. ಮುಂದೆ ಇಂತಹ ನಡವಳಿಕೆಯನ್ನು ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

‘ಭೀಷ್ಮ ಕೆರೆ ಪಕ್ಕದಲ್ಲಿ ಬೀದಿ ದೀಪ ದುರಸ್ತಿಗೆ ಶೀಘ್ರ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರ ಪದವಿ ಪೂರ್ವ ಕಾಲೇಜುಗಳನ್ನು ಗುರುತಿಸಿ ಆ ಕಾಲೇಜುಗಳಿಗೆ ಸ್ವಂತ ಕಟ್ಟಡಕ್ಕೆ ಅಗತ್ಯದ ನಿವೇಶನ ಒದಗಿಸಲು ಪ್ರಸ್ತಾವ ಸಲ್ಲಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಕಾಲೇಜು ಕಟ್ಟಡಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

ಬಿತ್ತನೆ ಹಂಗಾಮು ಪ್ರಾರಂಭವಾಗುವುದಕ್ಕೂ ಮುನ್ನ ಜಿಲ್ಲೆಯ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ದಾಸ್ತಾನು ಮಾಡಿಟ್ಟುಕೊಳ್ಳಬೇಕು. ಕಳಪೆ ಗುಣಮಟ್ಟ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಅಂಗಡಿಯ ಪರವಾನಗಿ ರದ್ದುಪಡಿಸಬೇಕು ಎಂದು ನಿರ್ದೇಶನ ನೀಡಿದರು.

ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂದು ರೈತರಲ್ಲಿ ಮನವರಿಕೆ ಮಾಡಿಸಬೇಕು. ಅದಕ್ಕಾಗಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ತೋಟಗಾರಿಕೆ ಬೆಳೆಗಳಿಗೆ ಇರುವ ಯೋಜನೆಗಳ ಕುರಿತು ತಿಳಿವಳಿಕೆ ನೀಡಬೇಕು. ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಪ್ರೋತ್ಸಾಹ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಬೆಂಬಲ ಬೆಲೆ ಯೋಜನೆ ಅಡಿ ಈಗಾಗಲೇ ಖರೀದಿಸಲಾದ ಕಡಲೆಯನ್ನು ಶೀಘ್ರವೇ ಮಾರಾಟ ಮಾಡಿ ಹೊಸದಾಗಿ ಖರೀದಿಸುವ ಕಡಲೆಯನ್ನು ಸಂಗ್ರಹಿಸಿಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. 

ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ‘ಸದ್ಯದಲ್ಲಿಯೇ  ಪಿಯುಸಿ ಪರೀಕ್ಷೆಗಳು ನಡೆಯಲಿದ್ದು ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಪೊಲೀಸ್‌ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಬಿ. ಕಲ್ಲೇಶ ಮಾತನಾಡಿ, 2021-22ನೇ ಸಾಲಿನ ಮನರೇಗಾ ಯೋಜನೆಯಡಿ ಕೃಷಿ ಹೊಂಡ, ದನದ ದೊಡ್ಡಿ, ಕುರಿ, ಮೇಕೆ ದೊಡ್ಡಿ, ಎರೆಹುಳು ತೊಟ್ಟಿ , ತೋಟಗಾರಿಕೆ ಅಭಿವೃದ್ಧಿ, ರೇಷ್ಮೆ ಅಭಿವೃದ್ಧಿ, ಕೃಷಿ ಅರಣ್ಯ, ಪೌಷ್ಟಿಕ ಕೈ ತೋಟ, ಬಚ್ಚಲು ಗುಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಒಟ್ಟಾರೆ ₹3273.41 ಲಕ್ಷ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಮನರೇಗಾ ಯೋಜನೆಯಡಿ 42.28 ಲಕ್ಷ  ಮಾನವ ದಿನಗಳನ್ನು ಸೃಜಿಸಲಾಗಿದ್ದು ಶೇ 105.67 ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

ಶಾಸಕ ಕಳಕಪ್ಪ ಬಂಡಿ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಕಾಂತಿಲಾಲ್ ಬನ್ಸಾಲಿ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಎಸ್‌ಪಿ ಶಿವಪ್ರಕಾಶ್‌ ದೇವರಾಜು, ಡಿಎಫ್‌ಒ ದೀಪಿಕಾ ಬಾಜಪೇಯಿ, ಸಿಇಒ ಡಾ. ಸುಶೀಲಾ ಬಿ.,  ಎಡಿಸಿ ಸತೀಶ್‌ ಕುಮಾರ್ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಇದ್ದರು.

‘ಕೆರೆಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಿ’

‘ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ 75 ಕೆರೆಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರಚಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಲಾಗಿದೆ’ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ಚಿಂಚಲಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸ್ವಂತ ಕಟ್ಟಡಕ್ಕೆ ಸರ್ಕಾರಕ್ಕೆ  ಮನವಿ ಸಲ್ಲಿಸಬೇಕು. ಅಂಗವಿಕಲರಿಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ತಲುಪಿಸಲು ಅನುಕೂಲವಾಗುವಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ನಿಗಾ ವಹಿಸಬೇಕು. 12ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್–19 ಲಸಿಕಾಕರಣ ಪೂರ್ಣಗೊಳಿಸಬೇಕು. ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಪಟ್ಟಿ ನೀಡಿ ಸ್ವಂತ ಕಟ್ಟಡಗಳ ನಿರ್ಮಾಣಕ್ಕೆ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದರು.

ಅಧಿಕಾರಿಗಳು ಜನ ಸೇವಕರಂತೆ ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು, ಅಹಿತಕರ ಘಟನೆಗಳು ನಡೆಯದಂತೆ ತಡೆಯುವುದು ಹಾಗೂ ನಮ್ಮ ಕರ್ತವ್ಯಕ್ಕೆ ಚ್ಯುತಿ ಬರದಂತೆ ಕೆಲಸ ನಿರ್ವಹಿಸುವೆ.

ಬಿ.ಸಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

ಜಿಲ್ಲೆಯಲ್ಲಿರುವ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಹೊಸ ಯೋಜನೆಗಳನ್ನು ರೂಪುಗೊಳಿಸಿ ತಮ್ಮದೇ ಛಾಪು ಮೂಡಿಸಬೇಕು. ಕೇವಲ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಟಾನಕ್ಕೆ ಮಾತ್ರ ಸೀಮಿತಗೊಳ್ಳಬಾರದು.

ಸಿ.ಸಿ.ಪಾಟೀಲ, ಸಚಿವ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.