ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಾನುಭವಿ ಆಯ್ಕೆ ಪಾರದರ್ಶಕವಾಗಿರಲಿ

ಪ.ಜಾತಿ, ಪ.ಪಂ ಉಪ ಹಂಚಿಕೆ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ
Last Updated 26 ಮೇ 2022, 16:23 IST
ಅಕ್ಷರ ಗಾತ್ರ

ಗದಗ: ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿ ನಡೆಯಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಶೀಘ್ರ ತಲುಪಿಸಲು ಕ್ರಮವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‍ಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈ ಯೋಜನೆಯಡಿ ಬಿಡುಗಡೆಯಾದ ಅನುದಾನ ದುರುಪಯೋಗ ಆಗದಂತೆ ನಿಗಾವಹಿಸಬೇಕು. ಕ್ರಿಯಾಯೋಜನೆ ತಯಾರಾದ ನಂತರ ಟೆಂಡರ್ ಕರೆದು ನಿಗದಿತ ಕಾಲಮಿತಿಯಲ್ಲಿಯೇ ಕಾಮಗಾರಿ ಪೂರ್ಣಗೊಳ್ಳುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಇಲಾಖಾವಾರು ಸಾಧಿಸಿದ ಪ್ರಗತಿ ವಿವರವನ್ನು ಇಲಾಖೆಯ ಅಂತರ್ಜಾಲದಲ್ಲಿ ತಪ್ಪದೇ ಅಪ್‍ಡೇಟ್ ಮಾಡಬೇಕು’ ಎಂದು ಅವರು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, ‘2022-23ನೇ ಸಾಲಿನ ಪರಿಶಿಷ್ಟ ಜಾತಿ ಉಪ ಹಂಚಿಕೆ (ಎಸ್‍ಸಿಎಸ್‍ಪಿ) ಯೋಜನೆಯಡಿ ಏಪ್ರಿಲ್ 30ರವರೆಗೆ ವಿವಿಧ ಇಲಾಖೆಗಳಡಿ ಒಟ್ಟಾರೆ ₹2003.84 ಲಕ್ಷ ಅನುದಾನ ಬಿಡುಗಡೆಯಾಗಿದೆ. ಈ ಪೈಕಿ ₹771.29 ಲಕ್ಷ ಖರ್ಚಾಗಿದೆ. 195 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದು ಶೇ 38ರಷ್ಟು ಪ್ರಗತಿಯಾಗಿದೆ’ ಎಂದು ತಿಳಿಸಿದರು.

‘ಪರಿಶಿಷ್ಟ ಪಂಗಡ ಉಪಹಂಚಿಕೆ (ಟಿಎಸ್‍ಪಿ) ಯೋಜನೆಯಡಿ ವಿವಿಧ ಇಲಾಖೆಗಳಡಿ ₹640.74 ಲಕ್ಷ ಬಿಡುಗಡೆಯಾಗಿದ್ದು ಆ ಪೈಕಿ ₹332.45 ಲಕ್ಷ ಖರ್ಚಾಗಿದೆ. 34 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದು, ಶೇ 52ರಷ್ಟು ಪ್ರಗತಿಯಾಗಿದೆ’ ಎಂದು ಸಭೆಗೆ ತಿಳಿಸಿದರು.

ಪರಿಶಿಷ್ಟ ಜಾತಿ ಉಪ ಹಂಚಿಕೆ ಮತ್ತು ಪರಿಶಿಷ್ಟ ಪಂಗಡ ಉಪಹಂಚಿಕೆ ಯೋಜನೆಯಡಿ ಕೃಷಿ, ಅಂಗವಿಕಲ, ಆಯುಷ್ , ಲೋಕೋಪಯೋಗಿ, ಯುವ ಸಬಲೀಕರಣ ಮತ್ತು ಕ್ರೀಡೆ, ಸಾರ್ವಜನಿಕ ಶಿಕ್ಷಣ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಯಾವುಲ್ಲಾ ಕೆ., ತೋಟಗಾರಿಕೆ ಉಪ ನಿರ್ದೇಶಕ ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ., ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಇದ್ದರು.

****

ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಯಡಿ ಕೈಗೊಂಡ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ದೊರಕಬೇಕು. ಸಮನ್ವಯತೆ ಸಾಧಿಸುವುದು ಮುಖ್ಯ
-ಡಾ.ಸುಶೀಲಾ ಬಿ., ಜಿಲ್ಲಾ ಪಂಚಾಯ್ತಿ ಸಿಇಒ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT