ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಸೋಮಾರಿತನ ಸಲ್ಲದು: ಸಚಿವ ಬಿ.ಎ.ಬಸವರಾಜ

Last Updated 8 ಸೆಪ್ಟೆಂಬರ್ 2020, 3:11 IST
ಅಕ್ಷರ ಗಾತ್ರ

ಗದಗ: ‘ಗದಗ- ಬೆಟಗೇರಿ ನಗರಸಭೆ ವ್ಯಾಪ್ತಿ ಹಾಗೂ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೆತ್ತಿಕೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು’ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಹೇಳಿದರು.

ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನೀರು ಸರಬರಾಜು ಮತ್ತು ಒಳಚರಂಡಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ನಂತರ ಮಾಧ್ಯಮದವರ ಜತೆಗೆ ಮಾತನಾಡಿದರು.

‘ಸರ್ಕಾರದಿಂದ ಅನುಮೋದನೆ ಸಿಕ್ಕಿ, ಹಣ ಬಿಡುಗಡೆಯಾಗಿದ್ದರೂ ಕೂಡ ಸಾಕಷ್ಟು ಕಾಮಗಾರಿಗಳು ಪೂರ್ಣಗೊಂಡಿಲ್ಲ. ಈ ಬಗ್ಗೆ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಲಾಗಿದೆ. ಈ ಎಲ್ಲ ಕಾಮಗಾರಿಗಳನ್ನೂ ನವೆಂಬರ್‌ ವೇಳೆಗೆ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

‘ಎಲ್ಲ ಪಟ್ಟಣಗಳಿಗೆ 24X7 ಕುಡಿಯುವ ನೀರು ಒದಗಿಸುವ ಯೋಜನೆಗೆ ಅಗತ್ಯವಿರುವ ಪ್ರಸ್ತಾವ ಸಲ್ಲಿಸಲು ಸೂಚನೆ ನೀಡಿದ್ದು, ಇದಕ್ಕೆ ಸರ್ಕಾರದ ಮಟ್ಟದಲ್ಲಿ ಅನುಮೋದನೆ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.

‘ಗದಗ- ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣವಾಗುವ ನೂತನ ಬಡಾವಣೆಗಳಲ್ಲಿ ಶೇ 5ರಷ್ಟು ನಿವೇಶನಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ಮೀಸಲಿಡಲು ನಿರ್ಧರಿಸಲಾಗಿದೆ. ಈ ಕುರಿತು ಸುತ್ತೋಲೆಯನ್ನು ಶೀಘ್ರವೇ ಹೊರಡಿಸಲಾಗುವುದು’ ಎಂದು ಹೇಳಿದರು.

‘ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಯುಜಿಡಿ ಯೋಜನೆ ಜಾರಿಯಾಗಬೇಕು. ಈ ನಿಟ್ಟಿನಲ್ಲಿ ಯೋಜನೆ ರೂಪಿಸಿ, ಕೈಗೊಳ್ಳಬೇಕಾದಂತಹ ಯುಜಿಡಿ ಕಾಮಗಾರಿಗಳ ಸೂಕ್ತ ಪ್ರಸ್ತಾವಗಳನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಕಳಕಪ್ಪ ಬಂಡಿ, ಗದಗ- ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಇದ್ದರು.

ಗೌರವ ಘಟಕ: ನಿರ್ವಹಣೆ ಅಚ್ಚುಕಟ್ಟಾಗಿರಲಿ

‘ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗಿರುವ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಗೌರವ ಘಟಕಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವಂತೆ ಸೂಚಿಸಲಾಗಿದೆ’ ಎಂದು ಸಚಿವ ಬಿ.ಎ.ಬಸವರಾಜ ಹೇಳಿದರು.

‘ಸೂಕ್ತ ನಿರ್ವಹಣೆ ಜತೆಗೆ ವೈಯಕ್ತಿಕ ಶುಚಿತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಘಟಕದ ಸದುಪಯೋಗವಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT