ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಕ್ರವ್ಯೂಹದಲ್ಲಿ ಸಿಲುಕಿರುವ ಡಿಕೆಶಿ: ಸಚಿವ ಶ್ರೀರಾಮುಲು ಲೇವಡಿ

Last Updated 19 ಅಕ್ಟೋಬರ್ 2020, 14:18 IST
ಅಕ್ಷರ ಗಾತ್ರ

ಗದಗ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸ್ಥಿತಿ ಈಗ ಚಕ್ರವ್ಯೂಹದಲ್ಲಿ ಸಿಕ್ಕಿಹಾಕಿಕೊಂಡಿದ್ದ ಅಭಿಮನ್ಯುವಿನಂತಾಗಿದೆ’ ಎಂದು ಸಚಿವ ಶ್ರೀರಾಮುಲು ಇಲ್ಲಿ ಲೇವಡಿ ಮಾಡಿದರು.

ಗದಗದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಈಗ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್‌ ಅವರಿಗೆ ನಿಜದ ಸವಾಲು ಎದುರಾಗಿದೆ. ಸಹೋದರ ಡಿ.ಕೆ.ಸುರೇಶ್‌ ಅವರ ಕ್ಷೇತ್ರವ್ಯಾಪ್ತಿಗೆ ಒಳಪಡುವ ಆರ್‌.ಆರ್‌. ನಗರ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲೇ ಬೇಕಾದ ಅನಿವಾರ್ಯತೆ ಇದೆ’ ಎಂದು ಹೇಳಿದರು.

‘ಒಂದು ವೇಳೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸೋತರೆ ಅವರಿಗೆ ಭಾರಿ ಮುಖಭಂಗವಾಗಲಿದೆ. ಸಹೋದರನ ಕ್ಷೇತ್ರದಲ್ಲೇ ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲಾಗದಿದ್ದವರು; ಇಡೀ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಹೇಗೆ ಗೆಲ್ಲಿಸುತ್ತಾರೆ ಎಂದು ಅವರ ಪಕ್ಷದವರೇ ಮಾತನಾಡಿಕೊಳ್ಳುತ್ತಾರೆ. ಹಾಗಾಗಿ, ಅವರಿಗೆ ಹತಾಶಭಾವ ಕಾಡುತ್ತಿದ್ದು ಬಿಜೆಪಿ ವಿರುದ್ಧ ಟೀಕೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ’ ಎಂದು ಹೇಳಿದರು.

‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತಂತ್ರ; ಡಿಕೆಶಿ ಅವರ ಕುತಂತ್ರವನ್ನು ಛಿದ್ರಗೊಳಿಸುವ ಶಕ್ತಿ ಬಿಜೆಪಿಗೆ ಇದೆ. ಎರಡು ವಿಧಾನಸಭಾ ಉಪಚುನಾವಣೆ ಹಾಗೂ ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅ.19ರಂದು ‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ‘ಕಾಳಜಿ ಕೇಂದ್ರಗಳಲ್ಲೂ ಜಾತಿ ತಾರತಮ್ಯ?’ ಸುದ್ದಿಯ ಬಗ್ಗೆ ಪ್ರಸ್ತಾಪಿಸಿದ ಸಚಿವ ಶ್ರೀರಾಮುಲು, ‘ಸಂತ್ರಸ್ತ ಮಹಿಳೆ ಹುಲಿಗೆಮ್ಮ ಕಾಳಜಿ ಕೇಂದ್ರಗಳಲ್ಲಿ ಆಹಾರ ವಿತರಣೆಯಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಅಲ್ಲಿನ ಅಧಿಕಾರಿಗಳಿಗೆ ಕರೆಮಾಡಿ ಸಮಸ್ಯೆ ಬಗ್ಗೆ ವಿಚಾರಿಸಿದ್ದೇನೆ. ಜತೆಗೆ ವರದಿ ನೀಡುವಂತೆ ಸೂಚಿಸಿದ್ದೇನೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ 21ರಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಪ್ರವಾಹ ಸಂತ್ರಸ್ತರ ನೆರವಿಗಾಗಿ ₹88 ಕೋಟಿ ಹಣ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಿದ್ದೇವೆ’ ಎಂದು ತಿಳಿಸಿದರು.

‘ಸಮಾಜ ಕಲ್ಯಾಣ ಇಲಾಖೆ ಸಚಿವನಾಗಿ ಅಧಿಕಾರ ಸ್ವೀಕರಿಸಿದ ನಂತರ ಕೆಲವೊಂದು ಯೋಜನೆಗಳನ್ನು ಹಾಕಿಕೊಂಡಿದ್ದೇನೆ. ಇಲಾಖೆ ವತಿಯಿಂದ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳ ಕ್ರೀಡಾ ಭವಿಷ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಮುಂದಿನ ಹತ್ತು ವರ್ಷಗಳಲ್ಲಿ ಇಲಾಖೆಯ ವಸತಿಶಾಲೆಯ ವಿದ್ಯಾರ್ಥಿಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವಂತಾಗಬೇಕು ಎಂಬುದು ನಮ್ಮ ಗುರಿಯಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT