ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ಬ್ಯಾನರ್‌, ಹೋರ್ಡಿಂಗ್ಸ್‌ ತೆರವಿಗೆ ಸೂಚನೆ

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆ: ಮಾದರಿ ನೀತಿ ಸಂಹಿತೆ ಜಾರಿ
Last Updated 30 ಸೆಪ್ಟೆಂಬರ್ 2020, 16:29 IST
ಅಕ್ಷರ ಗಾತ್ರ

ಗದಗ: ‘ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆಯಾಗಿದ್ದು, ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನಗರಸಭೆ, ಪಟ್ಟಣ ಪಂಚಾಯ್ತಿ,ಪುರಸಭೆ ಮತ್ತು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಳವಡಿಸಿರುವ ಬ್ಯಾನರ್, ಪೋಸ್ಟರ್ ಹಾಗೂ ಹೋರ್ಡಿಂಗ್ಸ್‌ಗಳನ್ನು ಶೀಘ್ರವೇ ತೆರವುಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಗದಗ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಧಿಸೂಚನೆ ಅಕ್ಟೋಬರ್ 1ರಂದು ಪ್ರಕಟವಾಗಲಿದ್ದು, ಅ.8ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಅ.9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.12 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಅ.28ರಂದು ಮತದಾನ ನಡೆಯಲಿದೆ. ನವೆಂಬರ್ 2ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ನ.5ಕ್ಕೆ ಚುನಾವಣೆ ಪ್ರಕ್ರಿಯೆ ಕೊನೆಗೊಳ್ಳಲಿದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಒಟ್ಟು 15,743 ಪದವೀಧರರ ಮತದಾರರಿದ್ದು, 28 ಮತದಾನ ಕೇಂದ್ರಗಳಿವೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಕಾಲಾವಕಾಶವಿದ್ದು, ಅರ್ಹ ಪದವೀಧರ ಮತದಾರರು ಸಂಬಂಧಿಸಿದ ಕಚೇರಿಗಳಿಗೆ ಅರ್ಜಿ ಸಲ್ಲಿಸಬಹುದು’ ಎಂದು ತಿಳಿಸಿದರು.

‘ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿ ಚುನಾವಣೆ ಆಯೋಗ ಸೂಚಿಸುವ ನಿರ್ದೇಶನಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಜಿಲ್ಲೆಯಲ್ಲಿ ಅಗತ್ಯಕ್ಕೆ ಅನುಸಾರವಾಗಿ ವಿಡಿಯೊ ವೀಕ್ಷಣಾ ದಳ, ಸಂಚಾರ ವಿಚಕ್ಷಣಾ ದಳಗಳನ್ನು ನೇಮಿಸಿ ನಿಗಾ ವಹಿಸಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೋವಿಡ್‌–19 ನಡುವೆ ಚುನಾವಣೆ ನಡೆಯುತ್ತಿದ್ದು, ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.

ಪ್ರಚಾರ ಸಂದರ್ಭದಲ್ಲಿ ಕಡ್ಡಾಯವಾಗಿ ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸಬೇಕು. ಮತದಾನದ ವೇಳೆ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಸುರಕ್ಷಿತ ಅಂತರ ಕಾಯ್ದುಕೊಳ್ಳುವುದರ ಜತೆಗೆ ಸ್ಯಾನಿಟೈಸರ್ ಬಳಕೆ ಮಾಡಬೇಕು’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮೋಹನ್ ಮಾಳಶೆಟ್ಟಿ, ಜೆಡಿಎಸ್ ಪ್ರತಿನಿಧಿ ರಮೇಶ್ ಕಲಬುರ್ಗಿ, ಆರ್.ಪಿ.ಜಾಧವ್, ಬಹುಜನ ಸಮಾಜ ಪಕ್ಷದ ಪ್ರತಿನಿಧಿ ಎಂ.ಕೆ.ತಳಗಡೆ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ನಗರಸಭೆ ಮುಖ್ಯ ಯೋಜನಾಧಿಕಾರಿ ಎಸ್.ಎನ್.ರುದ್ರೇಶ್, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಡಿಎಚ್‌ಒ ಡಾ.ಸತೀಶ್ ಬಸರೀಗಿಡದ ಹಾಗೂ ಜಿಲ್ಲೆಯ ಎಲ್ಲ ತಹಶೀಲ್ದಾರರು ಸಭೆಯಲ್ಲಿ ಭಾಗವಹಿಸಿದ್ದರು.

ಸವಲತ್ತು ಹಿಂಪಡೆಯಲು ಸೂಚನೆ

‘ವಿವಿಧ ನಿಗಮ, ಮಂಡಳಿಗಳು, ಸ್ಥಳೀಯ ಪ್ರಾಧಿಕಾರ, ಸಂಸ್ಥೆಗಳ ಅಧ್ಯಕ್ಷರಿಗೆ ನೀಡಿರುವ ಸರ್ಕಾರಿ ವಾಹನಗಳನ್ನು ನಿಯಮಾನುಸಾರ ಹಿಂಪಡೆಯಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು ಸೂಚನೆ ನೀಡಿದರು.

‘ಸರ್ಕಾರಿ ಗೆಸ್ಟ್‌ಹೌಸ್‌ಗಳನ್ನು ವಶಕ್ಕೆ ಪಡೆಯಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ತಹಶೀಲ್ದಾರರು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

ಅಂಚೆ ಮತದಾನ ಅವಕಾಶ

80 ವರ್ಷ ದಾಟಿದವರು ಹಾಗೂ ಕೋವಿಡ್ ಶಂಕಿತರು ಮತ್ತು ಸೋಂಕಿತ ಪದವೀಧರ ಮತದಾರರು ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ನಿಗದಿತ ಅರ್ಜಿ ನಮೂನೆಯಲ್ಲಿ ನೋಡಲ್ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು.

ಇದಕ್ಕಾಗಿ ಜಿಲ್ಲಾ ಆರೋಗ್ಯ ಅಧಿಕಾರಿಗಳನ್ನು ಕೋವಿಡ್ ನಿರ್ವಹಣೆಯ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT