ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಕಿ ಧರಿಸಿ ಉತ್ತಮ ಹೆಸರು ಗಳಿಸಿ

ಸಹೋದ್ಯೋಗಿಗಳಿಗೆ ಸಲಹೆ ನೀಡಿದ ನಿವೃತ್ತ ಪೊಲೀಸ್ ಇನ್‌ಸ್ಪೆಕ್ಟರ್‌ ನಾಗರಾಜ ಎಚ್.ಮೈಲಾರ
Last Updated 3 ಏಪ್ರಿಲ್ 2021, 3:30 IST
ಅಕ್ಷರ ಗಾತ್ರ

ಗದಗ: ‘ಖಾಕಿ ಧರಿಸುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಹೆಸರು ಮಾಡಲು ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಅವಕಾಶಗಳಿದ್ದು ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು’ ಎಂದು ನಿವೃತ್ತ ಪೊಲೀಸ್ ಇನ್‌ಸ್ಪೆಕ್ಟರ್‌ ನಾಗರಾಜ ಎಚ್.ಮೈಲಾರ ಹೇಳಿದರು.

ಗದಗ ಜಿಲ್ಲಾ ಪೊಲೀಸ್ ವತಿಯಿಂದ ಬೆಟಗೇರಿಯ ಹಳೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

‘ತನಿಖೆ, ಮಾಹಿತಿ ಸಂವಹನ ಹೀಗೆ ಹತ್ತಾರು ವಿಭಾಗಗಳಲ್ಲಿ ಚುರುಕುತನದಿಂದ ಕಾರ್ಯನಿರ್ವಹಿಸಲು ಪೊಲೀಸ್‌ ಇಲಾಖೆಗೆ ಇಂದು ಅತ್ಯಾಧುನಿಕ ಸೌಲಭ್ಯಗಳು ಲಭ್ಯ ಇವೆ. ಇಲಾಖೆಯವರು ಆಯೋಜಿಸುವ ತರಬೇತಿ ಪಡೆದು ಅದನ್ನು ವೃತ್ತಿಯಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಪರಿಹರಿಸಲು ಬಳಸಿಕೊಳ್ಳಬೇಕು. ಪೊಲೀಸರು ಕೆಲಸಕ್ಕೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಕುಟುಂಬಕ್ಕೂ ನೀಡಬೇಕು’ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಮಾತನಾಡಿ, ‘ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಸ್ಮರಿಸಿಕೊಳ್ಳುವ ಉದ್ದೇಶದಿಂದ ಪೊಲೀಸ್ ಧ್ವಜ ದಿನಾಚರಣೆ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

‘ಪ್ರತಿ ವರ್ಷ ಪೊಲೀಸ್ ಧ್ವಜ ಮಾರಾಟ ಮಾಡಿ ಬಂದಂತಹ ಹಣದಲ್ಲಿ ಶೇ 50ರಷ್ಟು ಹಣವನ್ನು ನಿವೃತ್ತ ಪೊಲೀಸ್ ಅಧಿಕಾರಿಗಳ ಕಲ್ಯಾಣ ನಿಧಿಗೆ, ಶೇ 25ರಷ್ಟು ಘಟಕದ ಪೊಲೀಸ್ ಕಲ್ಯಾಣ ನಿಧಿಗೆ ಹಾಗೂ ಶೇ 25ರಷ್ಟು ಹಣವನ್ನು ಕೇಂದ್ರ ಕಲ್ಯಾಣ ನಿಧಿಗೆ ಜಮಾ ಮಾಡಲಾಗುತ್ತದೆ. ಈ ನಿಧಿಯನ್ನು ಸೇವೆಯಲ್ಲಿರುವ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಯ ಆರೋಗ್ಯ ಮತ್ತು ಮಕ್ಕಳ ವಿದ್ಯಾಭ್ಯಾಸ ಹಾಗೂ ಪೊಲೀಸರ ಮಕ್ಕಳ ಕಲ್ಯಾಣ ಕಾರ್ಯಕ್ರಮಗಳಿಗಾಗಿ ವಿನಿಯೋಗಿಸಲಾಗುವುದು’ ಎಂದರು.

‘ಸಮಾಜದ ಕಾನೂನು ಸುವ್ಯವಸ್ಥೆ ಕಾಪಾಡಲು ಹಗಲು-ರಾತ್ರಿ ಎನ್ನದೇ ತಮ್ಮ ಕುಟುಂಬವನ್ನು ಬದಿಗೊತ್ತಿ ಕ್ಲಿಷ್ಟಕರ ಪರಿಸ್ಥಿತಿಯಲ್ಲಿಯೂ ಜನರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯ ಪೊಲೀಸ್ ಇಲಾಖೆಯಿಂದ ಆಗುತ್ತಿದೆ’ ಎಂದು ಅವರು ತಿಳಿಸಿದರು.

‘ದೇಶದ ರಕ್ಷಣೆಗಾಗಿ ಗಡಿ ಕಾಯುವ ಸೈನಿಕರಂತೆ ಸಮಾಜದಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳನ್ನು ತಡೆಯುವಂತಹ ಮಹತ್ವದ ಕಾರ್ಯವನ್ನು ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ’ ಎಂದು ಅವರು ಹೇಳಿದರು.

ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ನಿವೃತ್ತ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನರಗುಂದ ಡಿವೈಎಸ್‌ಪಿ ಶಂಕರ ರಾಗಿ ವಂದಿಸಿದರು.

ಕ್ಷೇಮ ನಿಧಿಯಿಂದ ಧನಸಹಾಯ
‘ಏಪ್ರಿಲ್ 2020ರಿಂದ ಇಲ್ಲಿಯವರೆಗೆ 31 ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮ ನಿಧಿಯಿಂದ ₹ 1.27 ಲಕ್ಷ ವೈದ್ಯಕೀಯ ಧನಸಹಾಯ ಹಾಗೂ ಮರಣ ಹೊಂದಿದ 9 ಮಂದಿ ನಿವೃತ್ತ ಪೊಲೀಸ್ ಅಧಿಕಾರಿಗಳ ಅಂತ್ಯ ಸಂಸ್ಕಾರಕ್ಕೆ ₹ 85 ಸಾವಿರ ನೀಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT