ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ: ಎಸ್‌.ಜಿ.ಸಲಗರೆ

ಕಟ್ಟಡ ಕಾರ್ಮಿಕರಿಗೆ ಕಾನೂನು ಅರಿವು ಕಾರ್ಯಕ್ರಮ
Last Updated 20 ಅಕ್ಟೋಬರ್ 2021, 4:12 IST
ಅಕ್ಷರ ಗಾತ್ರ

ಗದಗ: ‘ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡ ಕಾರ್ಮಿಕರಿಗೆ ಯಾವುದೇ ರೀತಿಯ ಕಾನೂನಿನ ಸಮಸ್ಯೆ ಎದುರಾದಲ್ಲಿ ಪ್ರಾಧಿಕಾರದಿಂದ ಉಚಿತವಾಗಿ ಕಾನೂನು ನೆರವು ನೀಡಲಾಗುವುದು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಜಿ.ಸಲಗರೆ ತಿಳಿಸಿದರು.

ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಜಾಗೃತಿ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯ ಪಡೆದುಕೊಳ್ಳಲು ಮೊದಲಿಗೆ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಇದರಿಂದ ಕಾರ್ಮಿಕರಿಗೆ ಪಿಂಚಣಿ, ಮದುವೆ ಧನಸಹಾಯ, ಶೈಕ್ಷಣಿಕ ಧನಸಹಾಯ ಸೇರಿದಂತೆ ಹಲವಾರು ಸೌಲಭ್ಯಗಳು ಸಿಗುತ್ತವೆ. ಕಾರ್ಮಿಕರು ತಮ್ಮ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ಮಾಡದೇ ಕಡ್ಡಾಯವಾಗಿ ಶಾಲೆಗೆ ಸೇರಿಸಬೇಕು’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಮಹಮ್ಮದ್‌ ಇರ್ಫಾನ್‌ ಮಾತನಾಡಿ, ‘ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ಕಾರ್ಮಿಕರು ಪಡೆದುಕೊಳ್ಳಬೇಕು’ ಎಂದು ಹೇಳಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಮಾತನಾಡಿ, ‘ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆಯಲ್ಲಿ ನೋಂದಣಿ ಆಗುವುದರಿಂದ ಸಾಮಾಜಿಕ ಭದ್ರತೆ ಕಲ್ಯಾಣ ಯೋಜನೆಗಳನ್ನು ಪಡೆಯಲು ಅನುಕೂಲವಾಗುತ್ತದೆ. ಪ್ರಧಾನಮಂತ್ರಿ ಶ್ರಮಯೋಗಿ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ 60 ವರ್ಷದ ನಂತರ ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ’ ಎಂದು ತಿಳಿಸಿದರು.

ಪ್ರಧಾನ ನ್ಯಾಯಾಧೀಶ ಚಿನ್ನಸ್ವಾಮಿ ಮಾತನಾಡಿ, ಕಾರ್ಮಿಕರು ತಾವು ಬಳಸುವ ವಾಹನಗಳಿಗೆ ವಿಮೆ ಮಾಡಿಸಬೇಕು. ಇದರಿಂದ ಆಕಸ್ಮಿಕವಾಗಿ ಆಗುವ ಅಪಘಾತಗಳಿಗೆ ಪರಿಹಾರ ದೊರೆಯುತ್ತದೆ ಎಂದು ತಿಳಿಸಿದರು.

ವಕೀಲರಾದ ಶ್ರೀಗೌರಿ ಅವರು ಸಂವಿಧಾನದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಿಕೊಟ್ಟರು.

ಇದೇ ಸಂದರ್ಭದಲ್ಲಿ 40 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಕಿಟ್‍ಗಳನ್ನು ವಿತರಣೆ ಮಾಡಲಾಯಿತು.

ಹಿರಿಯ ಕಾರ್ಮಿಕ ನಿರೀಕ್ಷಕ ಗಿರೀಶ ಬಂಕದಮನಿ, ಕಾರ್ಮಿಕ ಇಲಾಖೆಯ ಪಿ.ಎಫ್.ಬಂತಿ, ಯೋಜನಾ ನಿರ್ದೇಶಕ ಸಂದೇಶ ಚ. ಪಾಟೀಲ, ಫಕ್ಕೀರಪ್ಪ ಹಡಗಲಿ, ಗೌರವಾಧ್ಯಕ್ಷ ಭೀಮಪ್ಪ ಎಚ್. ಪೂಜಾರ, ಉಪಾಧ್ಯಕ್ಷ ಶಂಕರ ಗುರುಬಸಣ್ಣವರ, ಗೌಸ್‌ಮೊಹಿದ್ದೀನ್‌ ಬಳ್ಳಾರಿ, ರಮೇಶ ಬಿಳೆಯಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT