ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರಿಗೆ ನರಕ ತೋರಿಸಿದ ಬಿಜೆಪಿ

ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಕಿಡಿ
Last Updated 26 ನವೆಂಬರ್ 2021, 2:59 IST
ಅಕ್ಷರ ಗಾತ್ರ

ಗದಗ: ‘ಏಳು ವರ್ಷಗಳ ಹಿಂದೆ ಅಧಿಕಾರ ಕೊಟ್ಟರೆ ಭಾರತೀಯರೆಲ್ಲರಿಗೂ ಸ್ವರ್ಗ ತೋರಿಸುತ್ತೇವೆ ಎಂದಿದ್ದ ಬಿಜೆಪಿ ನಾಯಕರು, ಅಧಿಕಾರ ಪಡೆದ ನಂತರ ನರಕ ತೋರಿಸಿದ್ದಾರೆ’ ಎಂದು ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಕಿಡಿಕಾರಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಸಭೆಗೂ ಮುನ್ನ ಅವರು ಸುದ್ದಿಗಾರರ ಜತೆಗೆ ಮಾತನಾಡಿ, ‘ಪೆಟ್ರೋಲ್, ಡೀಸೆಲ್, ಗ್ಯಾಸ್‌ ಸಿಲಿಂಡರ್‌ ಬೆಲೆಗಳು ಗಗನಕ್ಕೇರಿವೆ. ಒಂದು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಬಿಜೆಪಿ ಸರ್ಕಾರ ಉದ್ಯೋಗ ಕೊಡುವುದಿರಲಿ; ಅಷ್ಟು ಪ್ರಮಾಣದ ಜನರ ಉದ್ಯೋಗವನ್ನು ಕಸಿದುಕೊಂಡಿದ್ದಾರೆ. ಇವರ ಅಧಿಕಾರಾವಧಿಯಲ್ಲಿ ಜನಸಾಮಾನ್ಯರು ಜೀವನ ಮಾಡುವುದೇ ಕಷ್ಟವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದದಿಂದ 25 ಮಂದಿ ಬಿಜೆಪಿ ಸಂಸದರನ್ನು ಜನರು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಆದರೆ, ಅವರೆಲ್ಲರೂ ರಾಜ್ಯದ ಜನರ ಪರವಾಗಿ ಧ್ವನಿ ಎತ್ತದೇ, ಜನಾಶೀರ್ವಾದ ಯಾತ್ರೆ ಮಾಡಿದ್ದು ನಾಚಿಕೆಗೇಡಿನ ಸಂಗತಿ. ಹೀಗೆ ಮುಂದುವರಿದರೆ ಜನರು ಬಿಜೆಪಿ ಸರ್ಕಾರದ ವಿರುದ್ಧ ‘ಜನಾಕ್ರೋಶ ಯಾತ್ರೆ’ ಮಾಡಲಿದ್ದಾರೆ’ ಎಂದು ಎಚ್ಚರಿಸಿದರು.

‘ಉತ್ತರ ಭಾರತದ ಪಂಚ ರಾಜ್ಯಗಳ ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೋಲಿನ ಭೀತಿಯಿಂದಾಗಿ ಪ್ರಧಾನಿ ಮೋದಿ ರೈತರ ಕ್ಷಮೆಯಾಚಿಸಿ, ಕಾಯ್ದೆಗಳನ್ನು ಹಿಂಪಡೆಯುವ ಮಾತುಗಳನ್ನಾಡಿದ್ದಾರೆ’ ಎಂದು ಹೇಳಿದರು.

‘ಧಾರವಾಡ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ ವರಿಷ್ಠರು ಅವಕಾಶ ನೀಡಿದ್ದಾರೆ. ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡಬೇಕು’ ಎಂದು ಮನವಿ ಮಾಡಿದ ಅವರು, ‘ಹಾವೇರಿ ಜಿಲ್ಲೆ ನನ್ನ ಕರ್ಮಭೂಮಿಯಾಗಿದ್ದು ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಜನತೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ’ ಎಂದರು.

ಕೆಪಿಸಿಸಿ ವಕ್ತಾರ ಡಿ.ಆರ್. ಪಾಟೀಲ, ಧಾರವಾಡ ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್. ಪಾಟೀಲ, ಮಾಜಿ ಸಚಿವ ಬಿ.ಆರ್. ಯಾವಗಲ್, ಮಾಜಿ ಶಾಸಕರಾದ ಶ್ರೀಶೈಲಪ್ಪ ಬಿದರೂರ, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಇದ್ದರು.

ಹೆಚ್ಚಿನ ಅಂತರದಲ್ಲಿ ಗೆಲ್ಲಿಸುವ ವಿಶ್ವಾಸ

‘ಕಳೆದ ಬಾರಿ 25 ಕ್ಷೇತ್ರಗಳಲ್ಲಿ 14ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಈ ಬಾರಿ ಡಿ.10ರಂದು 25 ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಕಳೆದ ಬಾರಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದರು.

‘ಅವಿಭಜಿತ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುವ ವಿಶ್ವಾಸವಿದೆ. ಈಗಾಗಲೇ ಎರಡು ಅವಧಿಗೆ ವಿಧಾನಪರಿಷತ್ ಸದಸ್ಯನಾಗಿ ಕಾರ್ಯನಿರ್ವಹಿಸಿದ ಅನುಭವವಿದ್ದು, ಜನರು ಈ ಬಾರಿ ಆಶೀರ್ವದಿಸಿದರೆ ಮುಂದಿನ ದಿನಗಳಲ್ಲಿ ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ’ ಎಂದು ಹೇಳಿದರು.

***

ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯರ ಸಂಖ್ಯೆ ಹೆಚ್ಚಿದ್ದು, ಕಾಂಗ್ರೆಸ್‌ ಅಭ್ಯರ್ಥಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತಗಳು ಸಿಗಲಿವೆ
- ಜಿ.ಎಸ್. ಪಾಟೀಲ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT