ಗದಗ: ‘ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ದೋಷಿ ಎಂದು ಸಾಬೀತುಪಡಿಸಲು ಹಾಗೂ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಕಾರಣವಾಗುವ ಎಲ್ಲ ಸೇಡಿನ ಕ್ರಮಗಳನ್ನು ಅನುಸರಿಸುತ್ತಿದೆ’ ಎಂದು ಆಪಾದಿಸಿ ಗದಗ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ಮೌನ ಪ್ರತಿಭಟನೆ ನಡೆಸಿದರು.
ಗದಗ ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ವಿವಿಧ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಾತ್ಮ ಗಾಂಧಿ ವೃತ್ತದ ಪಕ್ಕದಲ್ಲಿ ನಿರ್ಮಿಸಲಾಗಿದ್ದ ವೇದಿಕೆಯಲ್ಲಿ ಸಂಜೆಯವರೆಗೂ ಮೌನ ಪ್ರತಿಭಟನೆ ಮುಂದುವರಿಸಿದರು.
‘ರಾಹುಲ್ ಗಾಂಧಿ ಅವರು ಈಗಾಗಲೇ ಅನೇಕ ವೇದಿಕೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ನಡುವಿನ ಸಂಬಂಧವನ್ನು ನೇರವಾಗಿ ಪ್ರಶ್ನಿಸುತ್ತ ಬಂದಿದ್ದಾರೆ. ರಾಹುಲ್ ಗಾಂಧಿ ಅವರ ಇಂತಹ ನಿರ್ಭೀತಿ ನಡೆಯನ್ನು ಸಹಿಸಿಕೊಳ್ಳಲಾಗದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮುಖಂಡರು ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಲ್ಲದೇ ಸೇಡಿನ ಕ್ರಮಗಳನ್ನು ಅನುಸರಿಸುತ್ತಿದ್ದಾರೆ’ ಎಂದು ಪ್ರತಿಭಟನಕಾರರು ದೂರಿದರು.
ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಜಿ.ಎಸ್. ಗಡ್ಡದೇವರಮಠ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಸುಜಾತಾ ದೊಡ್ಡಮನಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೀಲಮ್ಮ ಬೋಳನವರ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಸುಂಕಾಪುರ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಮಹಾ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ನಗರಸಭೆ ವಿರೋಧ ಪಕ್ಷದ ನಾಯಕ ಎಲ್.ಡಿ. ಚಂದಾವರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.