ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕು ಹರಡದಂತೆ ಎಚ್ಚರಿಕೆ ವಹಿಸಿ

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಎಂ.ಸುಂದರೇಶ್‌ ಬಾಬು
Last Updated 16 ಸೆಪ್ಟೆಂಬರ್ 2020, 15:54 IST
ಅಕ್ಷರ ಗಾತ್ರ

ಗದಗ: ‘ಸೆ.21ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಸುರಕ್ಷಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸೆ.21ರಿಂದ 28ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯಲ್ಲಿ ಸಮಸ್ಯೆಗಳು ಎದುರಾಗದಂತೆ ನಿಗಾ ವಹಿಸಬೇಕು. ಕೊರೊನಾ ವೈರಸ್‌ ವ್ಯಾಪಕವಾಗಿ ಹರಡುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನೂ ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿರುವ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಅರೆ ವೈದ್ಯಕೀಯ ಸಿಬ್ಬಂದಿ ನಿಯೋಜನೆ ಮಾಡಬೇಕು. ತುರ್ತು ಸೇವೆಗಾಗಿ ಆಂಬುಲೆನ್ಸ್ ಸೇವೆ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಕೋವಿಡ್-19 ನಿಯಂತ್ರಣಕ್ಕೆ ಪರೀಕ್ಷಾ ಕೇಂದ್ರದ ಆವರಣ ಮತ್ತು ಕೊಠಡಿಗಳನ್ನು ಸ್ವಚ್ಛಗೊಳಿಸಿ ಸ್ಯಾನಿಟೈಸ್‌ ಮಾಡಬೇಕು. ಪರೀಕ್ಷೆ ಸಮಯದಲ್ಲಿ ಮತ್ತು ನಂತರ ವಿದ್ಯಾರ್ಥಿಗಳು ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಡ್ಡಾಯಗೊಳಿಸಬೇಕು. ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಸೋಂಕಿತ ಹಾಗೂ ಶಂಕಿತ ಮಕ್ಕಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

‘ಪರೀಕ್ಷೆ ನಡೆಯುವಾಗ ವಿಷಯ ಶಿಕ್ಷಕರು ಪರೀಕ್ಷಾ ಕೇಂದ್ರದೊಳಗೆ ಬರದಂತೆ ನಿಗಾ ವಹಿಸಬೇಕು. ಕೊಠಡಿ ಮೇಲ್ವಿಚಾರಕರು ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್ ಬಂದೋಬಸ್ತ್, ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಕಾಲಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸುವಂತೆ ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಸವಲಿಂಗಪ್ಪ ಜಿ.ಎಂ. ಮಾತನಾಡಿ, ‘ಜಿಲ್ಲೆಯಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ 280 ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಒಟ್ಟು 5,493 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪೂರಕ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಅವರು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಕೊಠಡಿ ಮೇಲ್ವಿಚಾರಕರು ಸೇರಿದಂತೆ ವಿವಿಧ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT