ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಸೂತ್ರವಾಗಿ ಜರುಗಿದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

Last Updated 21 ಸೆಪ್ಟೆಂಬರ್ 2020, 12:32 IST
ಅಕ್ಷರ ಗಾತ್ರ

ಮುಂಡರಗಿ: ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಪ್ರೌಢಶಾಲೆ ಹಾಗೂ ಎಸ್.ಎಫ್.ಎಸ್. ಪ್ರೌಢಶಾಲೆಗಳಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ಶಾಂತಿ ಹಾಗೂ ಸುವ್ಯವಸ್ಥೆಯಿಂದ ಜರುಗಿದವು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಎಂ.ಬಸವಲಿಂಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಅಣ್ಣಿಗೇರಿ ಹಾಗೂ ಇತರ ಅಧಿಕಾರಿಗಳು ಎರಡೂ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕೊರೊನಾ ಶಂಕಿತರು ಹಾಗೂ ಸೋಂಕಿತರಿಗಾಗಿ ಪಟ್ಟಣದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಪ್ರತ್ಯೇಕ ಪರೀಕ್ಷಾ ಕೇಂದ್ರವನ್ನು ತೆರೆಯಲಾಗಿತ್ತು. ಮುಂಜಾಗೃತಾ ಕ್ರಮವಾಗಿ ಭಾನುವಾರ ಮೂರು ಕೇಂದ್ರಗಳನ್ನು ಸ್ಯಾನಿಟೈಸರ್ ಮಾಡಲಾಗಿತ್ತು.

ಪರೀಕ್ಷೆಗೆ ಆಗಮಿಸಿದ ಎಲ್ಲ ವಿದ್ಯಾರ್ಥಿಗಳನ್ನು ಶಾಲೆಗಳ ಆವರಣದಲ್ಲಿ ಸ್ಕ್ರೀನಿಂಗ್ ಮಾಡಲಾಯಿತು. ಎಲ್ಲರಿಗೂ ಸ್ಯಾನಿಟೈಸರ್ ನೀಡಲಾಯಿತು. ನಿಗದಿತ ಅಂತರವನ್ನು ಕಾಯ್ದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚಿಸಲಾಗಿತ್ತು.

ಜಗದ್ಗುರು ಅನ್ನದಾನೀಶ್ವರ ಪ್ರೌಢಶಾಲೆಯಲ್ಲಿ 211 ಹಾಗೂ ಎಸ್.ಎಫ್.ಎಸ್. ಪ್ರೌಢಶಾಲೆಯಲ್ಲಿ 148 ಒಟ್ಟು 359 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 19 ವಿದ್ಯಾರ್ಥಿಗಳು ಗೈರಾಗಿದ್ದರು.

ಕುಸಿದು ಬಿದ್ದ ಬಾಲಕಿ: ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯಲು ಆಗಮಿಸಿದ್ದ ತಾಲ್ಲೂಕಿನ ಹಳ್ಳಿಗುಡಿ ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಆರಂಭಕ್ಕೂ ಮುನ್ನವೆ ಕುಸಿದು ಬಿದ್ದಳು.

ತಕ್ಷಣ ಸ್ಥಳದಲ್ಲಿದ್ದ ಡಿ.ಡಿ.ಪಿ.ಐ. ಜಿ.ಎಂ.ಬಸವಲಿಂಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಅಣ್ಣಿಗೇರಿ, ಆರ್.ಎಲ್.ಬದಾಮಿ, ಭಾಗ್ಯಲಕ್ಷ್ಮಿ ಇನಾಮತಿ, ಎಚ್.ವೈ.ಭಜಂತ್ರಿ ವಿದ್ಯಾರ್ಥಿನಿಯ ಬಳಿಗೆ ದೌಡಾಯಿಸಿದರು. ಅಲ್ಲಿಯೇ ಬಾಲಕಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಡಿ.ಡಿ.ಪಿ.ಐ. ಅವರು ಬಾಲಕಿಗೆ ಉಪಾಹಾರದ ವ್ಯವಸ್ಥೆ ಮಾಡಿದರು. ನಂತರ ಬಾಲಕಿಯು ಚೇತರಿಸಿಕೊಂಡು ಪರೀಕ್ಷೆಗೆ ಹಾಜರಾದಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT