ಗುರುವಾರ , ಅಕ್ಟೋಬರ್ 29, 2020
19 °C
ಕೊರೊನಾ ಸೋಂಕು ನಿಯಂತ್ರಣದಲ್ಲಿ ಕಂದಾಯ ಅಧಿಕಾರಿಗಳ ಪಾತ್ರ– ವಿಚಾರ ಸಂಕಿರಣ

ಗದಗ | ಕಂದಾಯ ಇಲಾಖೆ ನಮ್ಮ ಹೆಮ್ಮೆ: ಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ‘ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಕ್ಕೆ ಹೆಮ್ಮೆ ಇದೆ’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಹೇಳಿದರು.

ಗದಗ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಭಾನುವಾರ ಕಂದಾಯ ಇಲಾಖೆ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

‘ಆಡಳಿತ ಜಾರಿಯಾದ ದಿನದಿಂದ ಇಂದಿನವರೆಗೆ ಕಂದಾಯ ಇಲಾಖೆ ಎಲ್ಲಾ ಇಲಾಖೆಗಳಿಗೆ ಮಾತೃ ಇಲಾಖೆಯಾಗಿ ಕರ್ತವ್ಯ ನಿರ್ವಹಿಸುತ್ತಿದೆ. ಸರ್ಕಾರದ ಹಲವಾರು ಮಹತ್ವದ ಯೋಜನೆಗಳ ಅನುಷ್ಠಾನ ಸೇರಿದಂತೆ ಎಲ್ಲ ಇಲಾಖೆಗಳ ಜತೆಗೆ ಸಮನ್ವಯ ಸಾಧಿಸಿ, ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ಅವರು ಹೇಳಿದರು.

‘ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಲೆಕ್ಕಾಧಿಕಾರಿಯ ಪಾತ್ರ ತುಂಬ ಮುಖ್ಯವಾದುದು. ಪ್ರಾಕೃತಿಕ ವಿಕೋಪ, ಪ್ರವಾಹ ಪರಿಸ್ಥಿತಿ, ಬರ ನಿರ್ವಹಣೆ ಜೊತೆಗೆ ಈಗ ಕೊರೊನಾ ಸೋಂಕು ತಡೆಗಟ್ಟುವಲ್ಲಿಯೂ ಇಲಾಖೆ ಮಹತ್ವದ ಪಾತ್ರ ನಿರ್ವಹಿಸುತ್ತಿದೆ’ ಎಂದು ಹೇಳಿದರು.

‘ಕೊರೊನಾ ಸೋಂಕು ತಡೆಗಟ್ಟುವ ಕಾರ್ಯದಲ್ಲಿ ಅನೇಕ ಸಹೋದ್ಯೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಕೋವಿಡ್‌ನಂತಹ ಸಂಕಷ್ಟದ ಕಾಲದಲ್ಲಿ ಕಂದಾಯ ಇಲಾಖೆ ನೌಕರರು ಶ್ರಮವಹಿಸಿ ಕೆಲಸ ಮಾಡುತ್ತಿದ್ದು, ಕರ್ತವ್ಯದ ಜತೆಗೆ ಕುಟುಂಬ ನಿರ್ವಹಣೆ, ದೈಹಿಕ, ಮಾನಸಿಕ ಆರೋಗ್ಯದ ಕಡೆಗೂ ಹೆಚ್ಚಿನ ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ್ ಮಾತನಾಡಿ, ‘ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಣ ಮಾಡುವುದರೊಂದಿಗೆ, ಕೊರೊನಾ ಜೊತೆ ಜೊತೆಗೆ ಜೀವನ ನಿರ್ವಹಣೆ ಮಾಡುವುದು ಅನಿವಾರ್ಯ. ಅದನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಸುರಕ್ಷಿತ ಅಂತರ, ಮಾಸ್ಕ್‌, ಸ್ಯಾನಿಟೈಸರ್‌ ಬಳಕೆ ಮೂಲಕ ಸೋಂಕು ಹರಡುವುದನ್ನು ತಡೆಯಬೇಕು’ ಎಂದು ಹೇಳಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕುಮಾರ್ ಅಣ್ಣಿಗೇರಿ ಅಧ್ಯಕ್ಷತೆ ವಹಿಸಿದ್ದರು. ಕಂದಾಯ ಇಲಾಖೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಸ್. ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರು, ತಾಲ್ಲೂಕು ಘಟಕದ ಅಧ್ಯಕ್ಷರು, ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು