ಗುರುವಾರ , ಏಪ್ರಿಲ್ 2, 2020
19 °C

24X7 ಸೇವೆಗೆ ವೈದ್ಯರು ಸಜ್ಜಾಗಿ: ಸಚಿವ ಸಿ.ಸಿ.ಪಾಟೀಲ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ವೈದ್ಯರು ಸಮಯದ ಪರಿವೆ ಇಲ್ಲದೆ ಮುಂದಿನ 8ರಿಂದ 10 ದಿನ 24X7 ಸೇವೆಗೆ ಸಜ್ಜಾಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕೊರೊನಾ ವೈರಸ್‌ ನಿಯಂತ್ರಣ ಮತ್ತು ಮುಂಜಾಗ್ರತೆ ಕ್ರಮಗಳ ಕುರಿತ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಕೆಟ್ಟ ಸುದ್ದಿಗಳಿಗೆ ವೇಗ ಜಾಸ್ತಿ. ಒಳ್ಳೆಯ ಸುದ್ದಿಗಳಿಗೆ ವೇಗ ಕಡಿಮೆ. ಆದ್ದರಿಂದ, ಕೊರೊನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಐಪಿಸಿ ಸೆಕ್ಷನ್‌ 188ರ ಪ್ರಕಾರ ಕಾನೂನು ಕ್ರಮ ಜರುಗಿಸಬೇಕು. ಕೊರೊನಾ ಬಗ್ಗೆ ಜಿಲ್ಲಾಧಿಕಾರಿ ಅವರನ್ನು ಹೊರತುಪಡಿಸಿ ಯಾರೂ ಮಾಧ್ಯಮಗಳಿಗೆ ಮಾಹಿತಿ ನೀಡುವಂತಿಲ್ಲ’ ಎಂದು ಹೇಳಿದರು.

‘ಹೋಟೆಲ್‌ಗಳಲ್ಲಿ ತಂಗುವ ಹೊರ ರಾಜ್ಯ, ಹೊರ ದೇಶಗಳ ಪ್ರವಾಸಿಗರು ಮತ್ತು ಪ್ರಯಾಣಿಕರ ಬಗ್ಗೆ ಹೋಟೆಲ್ ಮಾಲೀಕರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಜಿಲ್ಲೆಯ ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಕೆಲಸ ಮಾಡಬೇಕು’ ಎಂದರು.

‘ಈ ಹಿಂದೆ ಯಾವತ್ತೂ ವಾರದ ಮಟ್ಟಿಗೆ ರಾಜ್ಯ ಸ್ತಬ್ಧವಾದ ನಿದರ್ಶನಗಳು ಇಲ್ಲ. ವ್ಯಾಪಾರ, ವಹಿವಾಟು ಬಂದ್ ಆಗುವುದರಿಂದ ಸಾಕಷ್ಟು ನಷ್ಟ ಉಂಟಾಗುತ್ತಿದೆ. ಆದಾಗ್ಯೂ, ರಾಜ್ಯದ ಜನರ ಆರೋಗ್ಯದ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ’ ಎಂದು ತಿಳಿಸಿದರು.

‘ಸೂಕ್ಷ್ಮ ಮತ್ತು ವಿಷಮ ಸ್ಥಿತಿಯಲ್ಲಿ ವೈದ್ಯರು ಸೇವೆ ಸಲ್ಲಿಸುತ್ತಿರುವುದು ಅಭಿನಂದನೀಯ. ಜಿಲ್ಲಾಡಳಿತ ಕೂಡ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ ಎಲ್.ಅರಸಿದ್ಧಿ, ಉಪ ವಿಭಾಗಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು