ಶನಿವಾರ, ಅಕ್ಟೋಬರ್ 1, 2022
20 °C
ಶಾಸಕ ಎಚ್.‌ ಕೆ. ಪಾಟೀಲ ಆರೋಪ

ಜನರು ಸಂಕಷ್ಟದಲ್ಲಿ ಸರ್ಕಾರ ನಿದ್ದೆಯಲ್ಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ತಿಂಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಎಲ್ಲೆಡೆ ಅವಾಂತರ ಸೃಷ್ಟಿಸಿದೆ. ಸಾರ್ವಜನಿಕರು, ಕೃಷಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಇನ್ನೂ ಗಾಢನಿದ್ರೆಯಿಂದ ಎದ್ದಂತೆ ಕಾಣುತ್ತಿಲ್ಲ ಎಂದು ಗದಗ ಶಾಸಕ ಎಚ್.ಕೆ. ಪಾಟೀಲ ಟೀಕಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ನಿಲ್ಲುವಂತೆ ಕಾಣುತ್ತಿಲ್ಲ. ನಗರ ಹಾಗೂ ಗ್ರಾಮೀಣ ಭಾಗದಲ್ಲಿನ ಅನೇಕ ಮನೆಗಳು ಈಗಾಗಲೇ ಬಿದ್ದಿವೆ. ಇನ್ನು ಕೆಲ ಮನೆಗಳು ಕುಸಿಯುತ್ತಿವೆ. ಅನೇಕ ಕಡೆಗಳಲ್ಲಿ ಪ್ರಾಣ ಹಾನಿಯೂ ಆಗಿದೆ. ಆದರೆ ಮುಖ್ಯಮಂತ್ರಿ ಹಾಗೂ ಸಚಿವರು ಜನರ ಕಷ್ಟಕ್ಕೆ ಸ್ಪಂದಿಸಲು ಮುಂದಾಗಿಲ್ಲ ಎಂದು ಆರೋಪಿಸಿದರು.

ಕಟಾವಿಗೆ ಬಂದ ಬೆಳೆ ನೆಲಕಚ್ಚಿದೆ. ಫಸಲು ಕೈ ಸೇರುವ ಲಕ್ಷಣವಿಲ್ಲದೆ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಆದಕಾರಣ ಸರ್ಕಾರ ಈ ಕೂಡಲೇ ಪರಿಹಾರ ವಿತರಣೆಗೆ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ಅತಿಯಾದ ಮಳೆಯಿಂದ ಜಿಲ್ಲೆ ಸೇರಿದಂತೆ ರಾಜ್ಯದೆಲ್ಲೆಡೆ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ. ರಸ್ತೆಗಳ ತುಂಬೆಲ್ಲ ಗುಂಡಿಗಳು ಬಿದ್ದಿದ್ದು ಸಂಚಾರ ಮಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಡ ರಸ್ತೆಗಳ ಬಗ್ಗೆ ಜನ ಬೊಟ್ಟು ಮಾಡಿ ತೋರಿಸುವಂತಾಗಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ಹದಗೆಟ್ಟ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು. ಇಲ್ಲವಾದಲ್ಲಿ ಜನರೇ ಬೀದಿಗಿಳಿದು ಹೋರಾಟ ಮಾಡಬೇಕಾದ ಪರಸ್ಥಿತಿ ಎದುರಾಗುತ್ತದೆ ಎಂದು ಎಚ್ಚರಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯನವರ ವಯಸ್ಸಿನ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸಿದ್ಧರಾಮಯ್ಯನವರೇ ತಮ್ಮ ವಯಸ್ಸಿನ ಕುರಿತು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಸರಿಯಲ್ಲ ಎಂದರು.

ದಾವಣಗೆರೆಯಲ್ಲಿ ನಡೆದ ಸಿದ್ದರಾಮ ಉತ್ಸವ ರಾಷ್ಟ್ರಮಟ್ಟದ ಕಾರ್ಯಕ್ರಮವಾಗಿತ್ತು. ಅದರಿಂದ ನಮ್ಮ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ. ಈ ಕಾರಣಕ್ಕೆ ಪ್ರತಿಪಕ್ಷಗಳು ಕಸಿವಿಸಿಗೊಂಡಿವೆ. ಕೆಲವು ನಾಯಕರು ಗಾಬರಿಯಾಗಿದ್ದಾರೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು