ಕಾಲೇಜು ಮೂಲಸೌಲಭ್ಯಕ್ಕೆ ₹10 ಲಕ್ಷ ಅನುದಾನ: ಶಾಸಕ ರೇವಣ್ಣ

ಹಾಸನ: ಸರ್ಕಾರಿ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಿಗೆ ಮೂಲಸೌಲಭ್ಯ ಒದಗಿಸಲು ತಲಾ ₹5 ಲಕ್ಷ ವಿಶೇಷ ಅನುದಾನ ನೀಡಲಾಗುವುದು ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.
ತಾಲ್ಲೂಕಿನ ಮೊಸಳೆ ಹೊಸಳ್ಳಿ ಎಂಜಿನಿಯರ್ ಕಾಲೇಜು ಆವರಣದಲ್ಲಿ ಗುರುವಾರ ಸುಮಾರು 450 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಮಾಡಿ ಮಾತನಾಡಿದ ಅವರು, ₹2 ಕೋಟಿ ಅನುದಾನದಲ್ಲಿ ಕಾಲೇಜಿಗೆ ನೇರ ರಸ್ತೆ ವ್ಯವಸ್ಥೆ ಮಾಡಲಾಗುವುದು ಹಾಗೂ ಎರಡು ಕಾಲೇಜುಗಳಿಗೆ ವಿಶೇಷ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ
ನೀಡಿದರು.
ಗ್ರಾಮೀಣ ಅಭಿವೃದ್ಧಿಯಿಂದ ಮಾತ್ರ ದೇಶದ ಸಮಗ್ರ ಪ್ರಗತಿ ಸಾಧ್ಯ. ಹಳ್ಳಿಯ ಮಕ್ಕಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಬೇಕು. ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಉನ್ನತ ಶಿಕ್ಷಣ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಗ್ರಾಮೀಣ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅವಶ್ಯಕತೆಗಳ ಕೊರತೆಯಿಂದ ವಿದ್ಯಾಭ್ಯಾಸ ನಿಲ್ಲಿಸಬಾರದು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಸಂಪರ್ಕಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ನೆರವು ಹಾಗೂ ಕಾಲೇಜು ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ಸರ್ಕಾರದ ಸೌಲಭ್ಯ ಪಡೆದು, ದೊರೆತ ಅವಕಾಶವನ್ನು ವಿದ್ಯಾರ್ಥಿಗಳು ಬಳಸಿಕೊಂಡು ಸಮಾಜದ ಶ್ರೇಯೋಭಿವೃದ್ಧಿಗೆ ಮತ್ತು ತಮ್ಮ ಉಜ್ವಲ ಭವಿಷ್ಯಕ್ಕಾಗಿ ಉತ್ತಮ ರೀತಿಯಲ್ಲಿ ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.
ಎಂಜಿನಿಯರಿಂಗ್ ಕಾಲೇಜಿನಲ್ಲಿ ಸುಮಾರು 500 ಹಾಗೂ ಪಾಲಿಟೆಕ್ನಿಕ್ ನಲ್ಲಿ 250 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಉತ್ತಮ ದರ್ಜೆಯ ಪ್ರಯೋಗಾಲಯ, ಗ್ರಂಥಾಲಯ ಹಾಗೂ ಇತರೆ ಸೌಲಭ್ಯ ಇದೆ. ಸಾರಿಗೆ ಬಸ್ ಸೌಲಭ್ಯವೂ ಉತ್ತಮವಾಗಿದೆ ಎಂದು ತಿಳಿಸಿದರು.
ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ರಂಗಸ್ವಾಮಿ ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಡಿ. ಕುಮಾರ್ ಹಾಜರಿದ್ದರು. ಪ್ರಾಧ್ಯಾಪಕ ಡಾ. ಎಲ್. ತಿಮ್ಮೇಶ್ ನಿರೂಪಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.