ಶನಿವಾರ, ಸೆಪ್ಟೆಂಬರ್ 18, 2021
27 °C
40 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ: ಸಚಿವ ಗೋಪಾಲಯ್ಯ

ಅತಿವೃಷ್ಟಿ; ಜಿಲ್ಲೆಯಲ್ಲಿ ₹272 ಕೋಟಿ ನಷ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜಿಲ್ಲೆಯಲ್ಲಿ ಕಳೆದ ತಿಂಗಳು ಸುರಿದ ಭಾರಿ ಮಳೆಗೆ ₹272 ಕೋಟಿ ನಷ್ಟ ಸಂಭವಿಸಿದೆ  ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಬೆಳೆ, ವಿದ್ಯುತ್‌ ಕಂಬ, ರಸ್ತೆ, ಕೆರೆ, ಶಾಲಾ, ಅಂಗನವಾಡಿ ಕೇಂದ್ರ ಹಾನಿಗೆ ಸಂಬಂಧಿಸಿದಂತೆ ಆಯಾ ಇಲಾಖೆ ಮೂಲಕವೇ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. 40 ಹೆಕ್ಟೇರ್‌ ಬೆಳೆ ಹಾನಿಯಾಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೋವಿಡ್‌ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹಿಮ್ಸ್‌ ಆಸ್ಪತ್ರೆಯಲ್ಲಿ ಮಕ್ಕಳಿಗೆ 200 ಹಾಸಿಗೆ ವಾರ್ಡ್‌ ಸಿದ್ಧಪಡಿಸಲಾಗಿದೆ. ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕ ಸ್ಥಾಪನೆ ಮಾಡಲಾಗುತ್ತಿದೆ. ನಿತ್ಯ ಜಿಲ್ಲೆಗೆ 25 ಸಾವಿರ ಡೋಸ್‌ ಕೋವಿಡ್‌ ಲಸಿಕೆ ಪೂರೈಕೆ ಆಗುತ್ತಿದ್ದು, ಸಮಸ್ಯೆ ನಿವಾರಣೆ ಆಗಿದೆ ಎಂದರು.

ಎರಡು ದಿನದಲ್ಲಿ ಸಕಲೇಶಪುರಕ್ಕೆ ಭೇಟಿ ನೀಡಿ, ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಾಲ್‌ ಸಮೀಪ ಉಂಟಾಗಿರುವ ಭೂ ಕುಸಿತ ದುರಸ್ತಿ ಕಾಮಗಾರಿ ಪರಿಶೀಲಿಸಲಾಗುವುದು. ಮೂರು ದಿನಗಳಲ್ಲಿ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಅನೇಕ ಸಮಸ್ಯೆಗಳ ಕುರಿತು ಮುಂದಿನ ವಾರದಲ್ಲಿ ಕಂದಾಯ, ಅರಣ್ಯ, ಲೋಕೋಪಯೋಗಿ ಸಚಿವರು ಒಳಗೊಂಡಂತೆ ಜಿಲ್ಲೆಯ ಜನ ಪ್ರತಿನಿಧಿಗಳು, ಕಾಫಿ ಬೆಳೆಗಾರರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು. ಕಾಡಾನೆ, ಮಳೆ ಹಾನಿ, ರಸ್ತೆ ಇತ್ಯಾದಿ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕ್ರಮಕೈಗೊಳ್ಳಲಾಗುವುದು ಎಂದರು.

ನಗರದ ಹೊಸ ಬಸ್‌ ನಿಲ್ದಾಣ ಸಮೀಪ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಗ ಹೆಚ್ಚಿಸುವ ಸಲುವಾಗಿ ಎರಡು ಮೂರು ದಿನಗಳಲ್ಲಿ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹಾಸನ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಕಡಿಮೆ ಆಗಿಲ್ಲ. 23 ರಿಂದ ಶಾಲೆಗಳು ಪ್ರಾರಂಭವಾಗಲಿದ್ದು, ಇನ್ನೂ ಒಂದು ವಾರ ಕಾಲಾವಕಾಶ ಇದೆ. ಪಾಸಿಟಿವಿಟಿ ದರ ನೋಡಿಕೊಂಡು ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಆರ್‌.ಗಿರೀಶ್‌, ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್‌ಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ.ಪರಮೇಶ್‌ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.