ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಕೋವಿಡ್‌ ಲಸಿಕೆ: ಹಾಸನಕ್ಕೆ 3ನೇ ಸ್ಥಾನ

ಸಮಗ್ರ ಅಭಿವೃದ್ಧಿಗೆ ಎಲ್ಲರ ಸಹಕಾರ ಅತ್ಯಗತ್ಯ: ಸಿಇಒ
Last Updated 4 ಜನವರಿ 2022, 15:48 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಎಲ್ಲಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಇಲಾಖೆಗಳ ನಡುವೆ ಸಮನ್ವಯ ಹಾಗೂ ಪರಸ್ಪರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜ್ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕೋವಿಡ್ ಲಸಿಕಾ ಕಾರ್ಯದಲ್ಲಿ ಹಾಸನ ತಾಲ್ಲೂಕು ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿರುವುದು ಶ್ಲಾಘನೀಯ. ಅದೇ ರೀತಿ ಮೂರನೇ ಅಲೆ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.ಆಯುಷ್ಮಾನ್ ಭಾರತ್ ಉತ್ತಮ ಯೋಜನೆಯಾಗಿದ್ದು ನಗರ, ಪಟ್ಟಣ ಹಾಗೂ ಹಳ್ಳಿಗಳ ಪ್ರತಿಯೊಬ್ಬರಿಗೂ ತಲುಪಬೇಕು. ಅದಕ್ಕೆ ಸೂಕ್ತ ಅರಿವು, ನೆರವು ನೀಡಬೇಕು ಎಂದರು.

ರೈತರಿಗೆ ಪೂರಕವಾದ ಗಂಗಾ ಕಲ್ಯಾಣ ಯೋಜನೆ ಅನುಷ್ಠಾನದಲ್ಲಿ ವಿಳಂಬ ಅಥವಾ ನಿರ್ಲಕ್ಷ್ಯ ವಹಿಸಿದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ವರ್ಷಕ್ಕೆ ಮೂರು ಕಂತುಗಳಲ್ಲಿ ಆರುಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ಅದು ಸಕಾಲದಲ್ಲಿ ತಲುಪಬೇಕು.ಕೃಷಿಯನ್ನು ಲಾಭದಾಯಕ ಉದ್ದಿಮೆಯಾಗಿ ಪರಿವರ್ತಿಸಿಕೊಳ್ಳಲು ಗ್ರಾಮಪಂಚಾಯಿತಿ ಮಟ್ಟದಲ್ಲಿ ರೈತರಿಗೆ ಮಾಹಿತಿ ನೀಡುವ ವ್ಯವಸ್ಥೆ ಮಾಡಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಅಪೌಷ್ಟಿಕತೆ, ಸಾಧರಣ ಅಪೌಷ್ಟಿಕತೆ ಇರುವ ಮಹಿಳೆಯರು ಮತ್ತು ಮಕ್ಕಳಿಗೆ ಪೌಷ್ಟಿಕ ಆಹಾರದ ಜೊತೆಗೆ ಚಿಕಿತ್ಸೆ ನೀಡಬೇಕು. ಬಾಲ್ಯವಿವಾಹ ತಡೆಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಇದೇ ವೇಳೆ ಸಭೆಯಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಬಾಕಿ ಇರುವ ಶೌಚಾಲಯಗಳನಿರ್ಮಾಣ, ಹೊಸ ವೈಯಕ್ತಿಕ ಗೃಹ ಶೌಚಾಲಯಗಳು, ಘನತ್ಯಾಜ್ಯ ನಿರ್ವಹಣಾಘಟಕ, ದ್ರವ ತ್ಯಾಜ್ಯ ನಿರ್ವಹಣಾ ಘಟಕ ಅನುಷ್ಠಾನ ಕುರಿತು ಸಲಹೆ, ಸೂಚನೆ ನೀಡಿದರು.

ವಿವಿಧ ವಸತಿ ಯೋಜನೆಗಳ ಅನುಷ್ಠಾನ, ಹೊಸ ನಿವೇಶನ ನಿರ್ಮಾಣ, ಉದ್ಯೋಗ ಖಾತರಿ ಯೋಜನೆ, ಅಂಗನವಾಡಿ ಕಾಮಗಾರಿಗಳ ಪ್ರಗತಿ ಮತ್ತು ವಿದ್ಯುತ್ ಸಂಪರ್ಕ ಮಾಹಿತಿ ವಿಷಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಹಲವು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗಳಾದ ಚಂದ್ರಶೇಖರ್, ಡಾ.ಪುನೀತ್, ಜಂಟಿ ಕೃಷಿ ನಿರ್ದೇಶಕ ಕೆ.ಎಚ್. ರವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಮಂಜುನಾಥ್, ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಬಾಲಕೃಷ್ಣ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೇಶ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಅಧಿಕಾರಿ ಕೆ.ಎಲ್. ಯಶವಂತ್, ತಹಶೀಲ್ದಾರ್ ನಟೇಶ್ ಹಾಗೂ ಹಾಸನ ತಾಲ್ಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT