ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

465 ಹಳ್ಳಿಗೆ ನದಿಯಿಂದ ಕುಡಿಯುವ ನೀರು

₹ 280 ಕೋಟಿ ವೆಚ್ಚದಲ್ಲಿ ಕಾಮಗಾರಿ: ಶಾಸಕ ಹೇಳಿಕೆ
Last Updated 2 ಜೂನ್ 2019, 9:57 IST
ಅಕ್ಷರ ಗಾತ್ರ

ಚನ್ನರಾಯಪಟ್ಟಣ: ₹ 280 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ 465 ಹಳ್ಳ್ಳಿಗಳಿಗೆ ಹೇಮಾವತಿ ನದಿ ಮೂಲದಿಂದ ಕುಡಿಯುವ ನೀರು ಒದಗಿಸಲಾಗುವುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಹಯೋಗದಲ್ಲಿ ಶನಿವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ವಿಶ್ವ ಚಿತ್ತಭ್ರಮಣೆ ಹಾಗು ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿ, ನದಿ ಮೂಲದಿಂದ ನೀರು ಒದಗಿಸುವ ಯೋಜನೆಗೆ ಇನ್ನೊಂದು ತಿಂಗಳಲ್ಲಿ ಸಚಿವ ಸಂಪುಟದ ಒಪ್ಪಿಗೆ ದೊರೆಯಲಿದೆ ಎಂದರು.

ಪಟ್ಟಣದಲ್ಲಿ ₹ 10 ಕೋಟಿ ವೆಚ್ಚದಲ್ಲಿ 32 ವಸತಿಗೃಹ ನಿರ್ಮಿಸಲಾಗುವುದು ಅದರಲ್ಲಿ 12 ವಸತಿಗೃಹಗಳನ್ನು ಆರೋಗ್ಯ ಇಲಾಖೆಗೆ ಮೀಸಲಿರಿಸಲಾಗುವುದು. ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಹೆಚ್ಚು ಅನುದಾನ ತಂದು ಅಗತ್ಯ ಕಾಮಗಾರಿ ಕೈಗೊಳ್ಳಲಾಗುವುದು. ನವಿಲೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ₹ 2 ಕೋಟಿ ಹಾಗೂ ಶ್ರೀನಿವಾಸಪುರ, ಬಳಗಟ್ಟ ಗ್ರಾಮದಲ್ಲಿ 4 ಕೋಟಿ ವೆಚ್ಚದಲ್ಲಿ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲಾಗುವುದು. ಹಿರೀಸಾವೆ ಮತ್ತು ಬಾಗೂರು ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಆರು ತಿಂಗಳಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಕೆಲಸ ಮಾಡುವ ಸಿಬ್ಬಂದಿಗೆ ವೇತನ ನೀಡಿಲ್ಲ. ಈ ಸಂಬಂಧ ಮುಖ್ಯಮಂತ್ರಿ, ಸಂಬಂಧಪಟ್ಟ ಅಧಿಕಾರಿಯ ಜೊತೆ ದೂರವಾಣಿ ಮೂಲಕ ಚರ್ಚಿಸಲಾಗಿದ್ದು, ಇನ್ನೊಂದು ವಾರದಲ್ಲಿ ವೇತನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಿ.ಮಹೇಶ್ ಮಾತನಾಡಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಶನಿವಾರ ರಕ್ತದಾನ ಮಾಡಿದ್ದಾರೆ. ಇನ್ನು ಮುಂದೆ ಪ್ರತಿ ತಿಂಗಳು ಸರ್ಕಾರದ ಬೇರೆ ಇಲಾಖೆಯ ಸಿಬ್ಬಂದಿ, ಸಂಘ, ಸಂಸ್ಥೆಯ ಪದಾಧಿಕಾರಿಗಳು ರಕ್ತದಾನ ಮಾಡಲಿದ್ದಾರೆ ಎಂದರು.

ಹಾಸನ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ನಾಗಲಕ್ಷ್ಮಿ ಮಾತನಾಡಿ, ಬೇರೆ ವಸ್ತುಗಳ ರೀತಿ ರಕ್ತವನ್ನು ಉತ್ಪಾದನೆ ಮಾಡಲು ಸಾಧ್ಯವಿಲ್ಲ. ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವ ಮೂಲಕ ಸಂಕಷ್ಟದಲ್ಲಿರುವ ವ್ಯಕ್ತಿಗೆ ನೆರವಾಗಬೇಕು. ರಕ್ತದಾನ ಮಾಡುವುದರಿಂದ ನಾಲ್ಕು ಜೀವ ಉಳಿಸಬಹುದು ಎಂದರು.

ಡಾ.ಮಾಲಿನಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅನಿತಾ ಮಾತನಾಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎ.ಎನ್.ಕಿಶೋರ್ ಕುಮಾರ್, ನಗರ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ್, ಪುರಸಭಾ ಸದಸ್ಯ ಸಿ.ಎನ್. ಶಶಿಧರ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ದೇವರಾಜೆಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT