ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: 651 ಮಂದಿ ಗಂಟಲು ದ್ರವ ಮಾದರಿ ಸಂಗ್ರಹ

ಮಾಸ್ಟರ್‌ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌
Last Updated 22 ಸೆಪ್ಟೆಂಬರ್ 2021, 16:24 IST
ಅಕ್ಷರ ಗಾತ್ರ

ಹಾಸನ: ನಗರದ ಮಾಸ್ಟರ್‌ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಬುಧವಾರ 651 ವಿದ್ಯಾರ್ಥಿಗಳಿಂದ ಗಂಟಲು ದ್ರವ ಮಾದರಿ ಸಂಗ್ರಹಿಸಲಾಯಿತು.

ಕಾಲೇಜಿನಲ್ಲಿ ಅಂದಾಜು 1,200 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಶೇ 80 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿ ಹಾಜರಾದರೆ, ಶೇ 20 ರಷ್ಟು ವಿದ್ಯಾರ್ಥಿಗಳು ಆನ್‌ ಲೈನ್‌ ತರಗತಿಯಲ್ಲಿ ಪಾಠ ಕೇಳುತ್ತಿದ್ದಾರೆ.

ಸೆ. 18 ರಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ವಿದ್ಯಾರ್ಥಿಯ ತಂದೆ ಆರೋಗ್ಯ ಇಲಾಖೆ ಸಿಬ್ಬಂದಿಯಾಗಿದ್ದು, ಅವರಿಗೂ ಪಾಸಿಟಿವ್ ಬಂದಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ.ಸತೀಶ್‌ ಕುಮಾರ್‌ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಕಾಲೇಜಿಗೆ ಭೇಟಿ ನೀಡಿ, ಪರಿಶೀಲಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಲಾಯಿತು.

‘ಕಾಲೇಜು ವಿದ್ಯಾರ್ಥಿಗಳಿಗೆ ಮೊಬೈಲ್‌ ಬಳಕೆಗೆ ಅವಕಾಶ ಇಲ್ಲದ ಕಾರಣ ಶಿಕ್ಷಕರ ಮೊಬೈಲ್‌ಗೆ ಒಟಿಪಿ ಕಳುಹಿಸಿ, ಗಂಟಲು ದ್ರವ ಮಾದರಿ ಸಂಗ್ರಹಿಸಬೇಕಾಯಿತು. ಇನ್ನೂ 500 ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿ ಸಂಗ್ರಹಿಸಬೇಕಿದ್ದು, ಗುರುವಾರ ಸಂಗ್ರಹಿಸಲಾಗುವುದು’ ಎಂದು ಹಾಸನ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಿಜಯ್‌ ತಿಳಿಸಿದರು.

‘ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ತಿಂಗಳಿಗೊಮ್ಮೆ ಕೋವಿಡ್‌ ಪರೀಕ್ಷೆ ಮಾಡಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆಯಲಾಗಿದೆ. ಹೀಗೆ ಮಾಡುವುದರಿಂದ ಕೊರೊನಾ 3ನೇ ಅಲೆ ಹೇಗೆ ಹರಡುತ್ತದೆ ಎಂಬುದನ್ನು ಗುರುತಿಸಿ ತಡೆಯಬಹುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT